ರಾಜಕೀಯ

ವಸತಿ ಶಾಲೆ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಘಟನೆಗೆ ಸರ್ಕಾರದ ನಿರ್ಲಕ್ಷ್ಯ ಕಾರಣ ಎಂದು ಆರೋಪ; ರಾಜ್ಯದ ಎಲ್ಲ ವಸತಿ ಶಾಲೆಗಳ ಪರಿಶೀಲನೆಗೆ ಆಗ್ರಹ

ಕಲಬುರಗಿ, ಜು.31: ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ ಬಳಿಕ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಚಿತ್ತಾಪುರ ತಾಲ್ಲೂಕಿನ ಗುಂಡುಗುರ್ತಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ದುರ್ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಕರಜಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.

ಇದು ಕೇವಲ ಒಂದು ಆಕಸ್ಮಿಕ ಘಟನೆ ಅಲ್ಲ. ವಸತಿ ಶಾಲೆಗಳ ನಿರ್ವಹಣೆ, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಆಹಾರದ ಗುಣಮಟ್ಟದ ಮೇಲಿನ ಸರ್ಕಾರ ಮತ್ತು ಸಂಬಂಧಿತ ಇಲಾಖೆಯ ನಿರ್ಲಕ್ಷ್ಯದ ಪ್ರತಿಬಿಂಬವಾಗಿದೆ. ಇಂತಹ ಘಟನೆಗಳು ಮರುಕಳಿಸುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ ಎಂದು ಅವರು ಆರೋಪಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಆಡಳಿತದ ಮೇಲೆ ಸಮರ್ಪಕ ನಿಗಾ ವಹಿಸದೇ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ. ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಗಂಭೀರ ಘಟನೆ ನಡೆದಿದ್ದರೂ ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳು ತ್ವರಿತ ಹಾಗೂ ಪರಿಣಾಮಕಾರಿ ಕ್ರಮ ಕೈಗೊಂಡಿರುವುದು ಕಾಣುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

ಘಟನೆ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ರಾಜ್ಯದ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಮತ್ತು ಸುರಕ್ಷತಾ ಕ್ರಮಗಳ ಕುರಿತು ತುರ್ತು ಪರಿಶೀಲನೆ ನಡೆಸಿ, ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಕ್ಕಳ ಸುರಕ್ಷತೆ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ಇರಬಾರದು ಎಂದು ಚಲವಾದಿ ನಾರಾಯಣಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button