
ಕಲಬುರಗಿ, ಜು.31: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರ ಗ್ರಾಮದಲ್ಲಿ ಆಟೋ ಚಾಲಕರಾಗಿರುವ ದತ್ತು ಬಜ್ಜಿ (ಮಾಗಣಗೇರಿ) ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಕೋಲಿ-ಕಬ್ಬಲಿಗ ಸಮನ್ವಯ ಸಮಿತಿಯ ಕಾರ್ಯಕರ್ತರು ಶುಕ್ರವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಳಿಕ ಸಾಂಕೇತಿಕ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹಲ್ಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕೊಲೆ, ಮಾರಣಾಂತಿಕ ಹಲ್ಲೆ, ಮಹಿಳೆಯರ ಮೇಲಿನ ದೌರ್ಜನ್ಯ, ಮಾದಕ ವಸ್ತುಗಳ ಹಾವಳಿ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. ಸಾರ್ವಜನಿಕರ ಸುರಕ್ಷತೆ ಕಾಪಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಜುಲೈ 24ರಂದು ದೇವಲಗಾಣಗಾಪುರದಲ್ಲಿ ಆಟೋ ಚಾಲಕ ದತ್ತು ಬಜ್ಜಿ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ, ಗಾಯಾಳುವಿನ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಹಾಗೂ ಅವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ದೇವಲಗಾಣಗಾಪುರ ಧಾರ್ಮಿಕ ಕ್ಷೇತ್ರವಾಗಿರುವ ಕಾರಣ ಅಲ್ಲಿ ಗಾಂಜಾ, ಮಾದಕ ವಸ್ತುಗಳು, ಜೂಜು ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಇದೇ ವೇಳೆ ಅಫಜಲಪುರ ತಾಲ್ಲೂಕಿನ ಬಂದರವಾಡ ಗ್ರಾಮದ ಲಕ್ಷ್ಮಣ ಕೇಳಕರ ಅವರು ವಿದ್ಯುತ್ ಅವಘಡದಲ್ಲಿ ಎರಡೂ ಕೈಗಳನ್ನು ಕಳೆದುಕೊಂಡಿದ್ದರೂ ಇದುವರೆಗೆ ಸಮರ್ಪಕ ಪರಿಹಾರ ದೊರೆತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅವರಿಗೆ ಸರ್ಕಾರದಿಂದ ತಕ್ಷಣ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಅವಣ್ಣ ಮಾಕೇರಿ, ಶರಣಪ್ಪ ತಳವಾರ, ಬಸವರಾಜ ಸಪ್ಪಣಗೋಳ, ಬಸವರಾಜ ಬೂದಿಹಾಳ, ವಿದ್ಯಾಧರ ಮಂಗಳೂರು, ರಮೇಶ್ ನಾಟೀಕಾರ, ಮಲ್ಲಿಕಾರ್ಜುನ ಎಮ್ಮೆನೂರ, ಸೂರ್ಯಕಾಂತ ಓರಾದ್, ರಮೇಶ್ ಜಮಾದಾರ, ರಾಕೇಶ್ ಜಮಾದಾರ, ಸಂತೋಷ ಕೋಲಿ, ಚಂದ್ರಕಾಂತ ತಳವಾರ, ಪ್ರೇಮ್ ಕೋಲಿ, ಆನಂದ ಕದರಗಿ, ದೇವೇಂದ್ರ ಕೆ. ಚಿಗರಳ್ಳಿ ಸೇರಿದಂತೆ ಸಮಾಜದ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.



