ಶಿಕ್ಷಣ

ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕಳಪೆ ಆಹಾರ ಪೂರೈಕೆಯಿಂದ ವಿದ್ಯಾರ್ಥಿಗಳ ಆರೋಗ್ಯ ಹದಗೆಟ್ಟ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಕಲಬುರಗಿ, ಆ.3: ಜಿಲ್ಲೆಯ ವಿವಿಧ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಕಳಪೆ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಆಹಾರ ಪೂರೈಕೆ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸಮೃದ್ಧಿ ಕರ್ನಾಟಕ ಜನಪರ ಸಮಿತಿ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಮಿತಿಯ ರಾಜ್ಯಾಧ್ಯಕ್ಷ ಸುಭಾಷ್ ಬಿದನೂರು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾದೇವಿ ಹೇಳವಾರ, ರಾಜ್ಯ ಕಾರ್ಯದರ್ಶಿ ಶಿಕಾಂತ್ ಡೆಂಗಿ, ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಎಂ.ಡಿ. ನವಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಫುಲೆ, ಜಿಲ್ಲಾ ಉಪಾಧ್ಯಕ್ಷ ಉದಯಕುಮಾರ್ ಸಲಗರ್, ರಾಜ್ಯ ಸಂಚಾಲಕ ರವಿ ಗೌಳಿ, ಜಿಲ್ಲಾ ಉಪಾಧ್ಯಕ್ಷೆ ರಾಜೇಶ್ವರಿ, ಜಿಲ್ಲಾ ಖಜಾಂಚಿ ಶ್ರೀನಾಥ್, ಕಾರ್ಯದರ್ಶಿ ಮನೋಜ್ ಕಾಳೆ, ರಾಹುಲ್, ವಿನೋದ್ ಸೇರಿದಂತೆ ಹಲವರು ಭಾಗವಹಿಸಿದರು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಹಾರ ಗುಣಮಟ್ಟ ಪರಿಶೀಲನಾ ಅಧಿಕಾರಿಗಳು, ವಾರ್ಡನ್‌ಗಳು ಹಾಗೂ ಆಹಾರ ಪೂರೈಕೆ ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮೊದಲು ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಭೇಟಿ ನೀಡಿದ ವೇಳೆ ಅಲ್ಲಿನ ಆಹಾರದ ಗುಣಮಟ್ಟ ಹಾಗೂ ಅವ್ಯವಸ್ಥೆ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಆದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದ ಕಾರಣ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗುವ ಘಟನೆ ನಡೆದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಧಿಕಾರಿಗಳು ವಸತಿ ನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಿ ಆಹಾರದ ಗುಣಮಟ್ಟ ಹಾಗೂ ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಬೇಕಿತ್ತು. ಆದರೆ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದೆ ಎಂದು ಅವರು ದೂರಿದರು.

ಅಫಜಲಪುರ ತಾಲ್ಲೂಕಿನ ಕರ್ಜಗಿ ಮುರಾರ್ಜಿ ದೇಸಾಯಿ ವಸತಿ ನಿಲಯದಲ್ಲಿಯೂ ಇದೇ ರೀತಿಯ ಘಟನೆ ನಡೆದಿದ್ದು, ಆಹಾರ ಗುಣಮಟ್ಟ ಪರಿಶೀಲನೆ ಹಾಗೂ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳೇ ಇದಕ್ಕೆ ಕಾರಣ ಎಂದು ಆರೋಪಿಸಿದರು.

ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ತಪ್ಪಿತಸ್ಥ ಅಧಿಕಾರಿಗಳು, ಆಹಾರ ಗುಣಮಟ್ಟ ಪರಿಶೀಲನಾ ಸಿಬ್ಬಂದಿ ಹಾಗೂ ಗುತ್ತಿಗೆದಾರರ ವಿರುದ್ಧ ಸ್ವಯಂಪ್ರೇರಿತ (ಸುವೋ ಮೋಟೋ) ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಆರೋಗ್ಯಕ್ಕೆ ಯಾವುದೇ ಧಕ್ಕೆಯಾಗದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button