ಆಮ್ ಆದ್ಮಿ ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಸಾಗರ್ ನೇಮಕ
ರಾಜ್ಯ ಘಟಕದಿಂದ ಅಧಿಕೃತ ಆದೇಶ; ಉತ್ತರ ಕನ್ನಡ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಿಗೂ ಹೊಸ ಅಧ್ಯಕ್ಷರ ನೇಮಕ

ಚಿತ್ತಾಪುರ, ಆ.5: ಆಮ್ ಆದ್ಮಿ ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಸಾಗರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು, ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದ್ದು, ಜಿಲ್ಲೆಯಲ್ಲಿ ಪಕ್ಷದ ಚಟುವಟಿಕೆಗಳನ್ನು ವಿಸ್ತರಿಸುವ ಜವಾಬ್ದಾರಿಯನ್ನು ಜಗದೀಶ್ ಸಾಗರ್ ಅವರಿಗೆ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ, ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಹಿತೇಂದ್ರ ನಾಯ್ಕ್ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ತಡಸದ ಅವರನ್ನು ಸಹ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೊಸ ಪದಾಧಿಕಾರಿಗಳ ನೇಮಕದಿಂದ ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಚೈತನ್ಯ ದೊರೆಯಲಿದ್ದು, ಸ್ಥಳೀಯ ಮಟ್ಟದಲ್ಲಿ ಪಕ್ಷದ ಕಾರ್ಯಚಟುವಟಿಕೆಗಳು ವೇಗ ಪಡೆಯಲಿವೆ ಎಂದು ಪಕ್ಷದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



