ರಾಜ್ಯ

ಬರ ಪರಿಸ್ಥಿತಿಯ ಸಮಗ್ರ ವರದಿ ಸಲ್ಲಿಸಿ: ಅಧಿಕಾರಿಗಳಿಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೂಚನೆ

ಗ್ರಾಮ ಮಟ್ಟದಲ್ಲಿ ವಾಸ್ತವ ಸ್ಥಿತಿ ಪರಿಶೀಲಿಸಿ ವರದಿ ನೀಡಲು ನಿರ್ದೇಶನ; ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆಗೆ ಒತ್ತು

ಯಾದಗಿರಿ, ಆ.5: ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯನ್ನು ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಿ, ಗ್ರಾಮ ಮಟ್ಟದಲ್ಲಿ ವಾಸ್ತವ ಸ್ಥಿತಿಯ ವರದಿಯನ್ನು ತ್ವರಿತವಾಗಿ ಸಲ್ಲಿಸಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ, ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರಪೀಡಿತ ಪ್ರದೇಶಗಳ ಕುರಿತು ಅಧಿಕಾರಿಗಳು ಸ್ಥಳಮಟ್ಟದಲ್ಲಿ ಸಮೀಕ್ಷೆ ನಡೆಸಿ ಪ್ರತಿಯೊಂದು ಗ್ರಾಮದ ನೀರಿನ ಲಭ್ಯತೆ, ಬೆಳೆಗಳ ಸ್ಥಿತಿ ಹಾಗೂ ಜನರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ನಿಖರ ಮಾಹಿತಿಯೊಂದಿಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿ, ಕುಡಿಯುವ ನೀರಿನ ಲಭ್ಯತೆ, ಕೃಷಿ ಚಟುವಟಿಕೆಗಳ ಸ್ಥಿತಿ, ಜನ-ಜಾನುವಾರುಗಳಿಗೆ ಅಗತ್ಯ ಸೌಲಭ್ಯಗಳು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿರುವ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.

ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಯಾವುದೇ ಇಲಾಖೆಯಲ್ಲಿ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು. ಸರ್ಕಾರದ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಗೆ ಮುನ್ನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನೂತನವಾಗಿ ನವೀಕರಣಗೊಂಡ ಸಭಾಂಗಣವನ್ನು ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಉದ್ಘಾಟಿಸಿದರು. ನವೀಕರಣಗೊಂಡ ಸಭಾಂಗಣವು ಜಿಲ್ಲಾ ಮಟ್ಟದ ಆಡಳಿತಾತ್ಮಕ ಸಭೆಗಳು ಹಾಗೂ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.

ಸಭೆಯಲ್ಲಿ ಮಾಜಿ ಸಚಿವರು ಹಾಗೂ ಶಹಾಪುರ ಕ್ಷೇತ್ರದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಶ್ರೀ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ಗುರುಮಿಟ್ಕಲ್ ಶಾಸಕ ಶರಣಗೌಡ ಕಂದಕೂರ್, ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡೂರು ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಓರಡಿಯಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಇಲಾಖೆಗಳ ಪ್ರಗತಿ ವರದಿಯನ್ನು ಮಂಡಿಸಿದರು.

Related Articles

Leave a Reply

Your email address will not be published. Required fields are marked *

Back to top button