ರಾಜ್ಯ

ಕಡೇಚೂರು ಅನಿಲ ಸೋರಿಕೆ ದುರಂತ: ಮೃತರ ಕುಟುಂಬಗಳಿಗೆ ಸಂಸದ ರಾಧಾಕೃಷ್ಣ ದೊಡ್ಡಮನಿ ಸಂತಾಪ

ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಲು ಸೂಚನೆ; ಕಾರ್ಮಿಕರ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಜಿಲ್ಲಾಡಳಿತಕ್ಕೆ ನಿರ್ದೇಶನ

ಕಲಬುರಗಿ/ಯಾದಗಿರಿ, ಆ.6: ಯಾದಗಿರಿ ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಫಾರ್ಮಾ ಕಂಪನಿಯಲ್ಲಿ ಸಲ್ಫರ್ ಡೈಆಕ್ಸೈಡ್ ಅನಿಲ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆಗೆ ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಂಸದರು, ಗಾಯಾಳುಗಳಿಗೆ ತುರ್ತು ಹಾಗೂ ಅಗತ್ಯ ವೈದ್ಯಕೀಯ ಚಿಕಿತ್ಸೆ ಯಾವುದೇ ವಿಳಂಬವಿಲ್ಲದೆ ದೊರೆಯುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದಲ್ಲದೆ, ಫಾರ್ಮಾ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಸುರಕ್ಷತೆಗಾಗಿ ಜಾರಿಯಲ್ಲಿರುವ ಕ್ರಮಗಳನ್ನು ಜಿಲ್ಲಾಡಳಿತ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ಸುರಕ್ಷತಾ ನಿಯಮಾವಳಿಗಳ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ದುರಂತದಲ್ಲಿ ಮೃತಪಟ್ಟ ಬಡ ಕಾರ್ಮಿಕರ ಕುಟುಂಬಗಳಿಗೆ ಸಂಸದರು ಸಾಂತ್ವನ ಸೂಚಿಸಿ, ಅವರ ಕುಟುಂಬದ ದುಃಖದಲ್ಲಿ ತಾವು ಸಹ ಭಾಗಿಯಾಗಿದ್ದೇವೆ ಎಂದು ಹೇಳಿದರು. ಗಾಯಾಳುಗಳು ಶೀಘ್ರ ಗುಣಮುಖರಾಗಿ ಆರೋಗ್ಯವಂತರಾಗಲಿ ಎಂದು ಹಾರೈಸಿದರು.

Related Articles

Leave a Reply

Your email address will not be published. Required fields are marked *

Back to top button