ಸಮಾಜ

ಹೋರಾಟಗಾರ ಭೂಮಾನಂದ ಹತ್ಯೆ ಖಂಡಿಸಿ ಮಾದಿಗ ಸಮುದಾಯದ ಪ್ರತಿಭಟನೆ

ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು ಆಗ್ರಹ; ಕುಟುಂಬಕ್ಕೆ ರಕ್ಷಣೆ, ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯ

ಕಲಬುರಗಿ, ಆ.6: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಮಾದಿಗ ಸಮುದಾಯದ ಹೋರಾಟಗಾರ ಭೂಮಾನಂದ ಅವರ ಹತ್ಯೆಯನ್ನು ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಡಾ. ಬಾಬು ಜಗಜೀವನರಾಂ ಅಭಿವೃದ್ಧಿ ಮತ್ತು ಹೋರಾಟ ಸಮಿತಿಯ ನೇತೃತ್ವದಲ್ಲಿ ಮಾದಿಗ ಸಮುದಾಯದವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಮಿತಿಯ ಜಿಲ್ಲಾಧ್ಯಕ್ಷ ರಾಜು ಎಸ್. ಕಟ್ಟಿಮನಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ದಶರಥ ಕಲಗುತ್ತಿ, ರಮೇಶ್ ವಾಡೇಕರ್, ಮಲ್ಲಿಕಾರ್ಜುನ ಜಿನ್ನಕೇರಿ, ಪ್ರದೀಪ್ ಭಾವೆ, ಮಂಜುನಾಥ ಲೇಗಂಟಿ, ಅಮೃತ ಸಾಗರ್, ಶ್ರೀನಿವಾಸ ರಾಮನಾಳಕರ್, ರಂಜಿತ್ ಕುಮಾರ್ ಮುಳಿಮನಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಭೂಮಾನಂದ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದರು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ಜೀವಿಸುವ ಹಕ್ಕು ಮತ್ತು ಸಮಾನತೆಯ ಹಕ್ಕನ್ನು ನೀಡಿದೆ. ಆದರೆ ರಾಜ್ಯದಲ್ಲಿ ದಲಿತ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಗಳು ಆತಂಕಕಾರಿ ಬೆಳವಣಿಗೆಯಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು.

ದಲಿತರ ಪರವಾಗಿ ಕೆಲಸ ಮಾಡುವ ಹೋರಾಟಗಾರರ ಜೀವ, ಆಸ್ತಿ ಮತ್ತು ಗೌರವದ ರಕ್ಷಣೆಗೆ ಸರ್ಕಾರ ವಿಶೇಷ ಹೊಣೆಗಾರಿಕೆ ವಹಿಸಬೇಕು. ಭೂಮಾನಂದ ಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ, ಕೃತ್ಯದಲ್ಲಿ ಭಾಗಿಯಾದ ಎಲ್ಲ ಆರೋಪಿಗಳು ಹಾಗೂ ಇದರ ಹಿಂದಿರುವ ಸಂಚುಕೋರರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ದಲಿತ ಮುಖಂಡರು ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು. ಭೂಮಾನಂದ ಅವರ ಕುಟುಂಬಕ್ಕೆ ಸಮರ್ಪಕ ರಕ್ಷಣೆ ನೀಡುವುದರ ಜೊತೆಗೆ ₹10 ಲಕ್ಷ ಪರಿಹಾರ, 10 ಎಕರೆ ಜಮೀನು ಮಂಜೂರು ಮಾಡಬೇಕು ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಕರಣದ ವಿಚಾರಣೆಯನ್ನು ತ್ವರಿತ ನ್ಯಾಯಾಲಯದ ಮೂಲಕ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button