ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯದ ಶಾಸಕರಿಗೆ ಅವಕಾಶ ನೀಡದಿರುವುದಕ್ಕೆ ಆಕ್ರೋಶ
ಸಚಿವ ಸಂಪುಟದಲ್ಲಿ ಬ್ರಾಹ್ಮಣರ ಸೇರ್ಪಡೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಕಲಬುರಗಿ, ಆ.8- ರಾಜ್ಯ ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯವನ್ನು ನಿರ್ಲಕ್ಷಿಸಿರುವುದನ್ನು ಖಂಡಿಸಿ ಹಾಗೂ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಜಿಲ್ಲಾ ಬ್ರಾಹ್ಮಣರ ಸಂಘದ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಜಿಲ್ಲಾ ಸಂಘದ ಅಧ್ಯಕ್ಷ ಪಾಂಡುರಂಗ ದೇಶಮುಖ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ರಾಹ್ಮಣ ಸಮುದಾಯದ ಶಾಸಕರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು. ಅಲ್ಲದೆ ವಿವಿಧ ನಿಗಮ, ಮಂಡಳಿಗಳಲ್ಲಿ ಸಮುದಾಯದ ಜನಪ್ರತಿನಿಧಿಗಳಿಗೆ ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಪ್ರಸ್ತುತ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯದ ಶಾಸಕರಲ್ಲಿ ಒಬ್ಬರಿಗೂ ಸಚಿವ ಸ್ಥಾನ ನೀಡದಿರುವುದು ಇಡೀ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹಿಂದಿನಿಂದಲೂ ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರೆಯುತ್ತಿತ್ತು. ಕಾಂಗ್ರೆಸ್ ಪಕ್ಷದ ಸರ್ಕಾರಗಳ ಅವಧಿಯಲ್ಲಿಯೂ ಹಿರಿಯ ನಾಯಕರಾದ ಆರ್.ವಿ. ದೇಶಪಾಂಡೆ ಹಾಗೂ ದಿನೇಶ್ ಗುಂಡೂರಾವ್ ಅವರು ಹಲವು ಬಾರಿ ಪ್ರಭಾವಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದೇ ರೀತಿ ಹಲವು ಶಾಸಕರನ್ನು ವಿವಿಧ ನಿಗಮ-ಮಂಡಳಿಗಳಿಗೆ ನೇಮಕ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಸಚಿವ ಸಂಪುಟದಲ್ಲಿ ಸಮುದಾಯದ ಹಿರಿಯ ಶಾಸಕರಿಗೂ ಸ್ಥಾನ ದೊರೆಯದಿರುವುದು ಬೇಸರ ತಂದಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಬೆಳಗಾವಿ ಜಿಲ್ಲೆಯ ಸವದತ್ತಿ ಮತಕ್ಷೇತ್ರದ ಯುವ ಶಾಸಕ ವಿಶ್ವಾಸ ವೈದ್ಯ ಅವರನ್ನೂ ಸರ್ಕಾರ ಪರಿಗಣಿಸಿಲ್ಲ. ಅದೇ ರೀತಿ ಕಲ್ಯಾಣ ಕರ್ನಾಟಕ ಭಾಗದಿಂದಲೂ ಯಾವುದೇ ಜಿಲ್ಲೆಗೆ ಬ್ರಾಹ್ಮಣ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದು ಸಮುದಾಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದ ಜನಪ್ರತಿನಿಧಿಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು. ಜೊತೆಗೆ ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಸಮುದಾಯದ ಅರ್ಹ ಶಾಸಕರು ಮತ್ತು ಮುಖಂಡರನ್ನು ನೇಮಕ ಮಾಡುವ ಮೂಲಕ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗೋವಾಳಕೃಷ್ಣ ಕುಲಕರ್ಣಿ, ಮಂಜುನಾಥ ಕುಲಕರ್ಣಿ, ಡಾ. ಲಕ್ಷ್ಮೀಕಾಂತ್ ಮೊಹರೀರ್, ವಿನೂತ್ ಜೋಶಿ, ಹರಿಪ್ರಸನ್ನ ಚಿತ್ತಾಪುರಕರ್, ಪವನಕುಮಾರ್ ಕೊರವಿ, ಪಾಂಡುರಂಗ ದೇಶಪಾಂಡೆ, ವಿಜಯರಾವ್ ಕುಲಕರ್ಣಿ, ಶ್ರೀನಿವಾಸ್ ಕುಲಕರ್ಣಿ, ಪ್ರಮೋದ್ ಕುಲಕರ್ಣಿ, ಸಂಜೀವ್ ಅಳವಂಡಿ, ಶ್ರೀನಿವಾಸ್ ದೇಸಾಯಿ, ಅಮಿತ್ ಕುಲಕರ್ಣಿ, ಗೋವಿಂದ್ ಕುಲಕರ್ಣಿ, ಪ್ರಮೋದ್ ಕಟ್ಟಿ, ಶಾಮರಾವ್ ಕುಲಕರ್ಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.



