ರೈತರೊಂದಿಗೆ ಚೆಲ್ಲಾಟವಾಡಬೇಡಿ: ವಿಮಾ ಕಂಪನಿಗಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ ತಾಕೀತು
ಬೆಳೆ ವಿಮೆ ಮಾಡಿಸಿರುವ ರೈತರಿಗೆ ಮಧ್ಯಂತರ ಪರಿಹಾರ ನೀಡಲು ಸೂಚನೆ; ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರು, ಜಾನುವಾರು ಮೇವಿನ ಸಮಸ್ಯೆ ಪರಿಹರಿಸಲು ನಿರ್ದೇಶನ

ಕಲಬುರಗಿ, ಆ.12: ಮುಂಗಾರು ಹಂಗಾಮಿನಲ್ಲಿ ಹೆಸರು, ಉದ್ದು, ಎಳ್ಳು, ಸೋಯಾಬೀನ್ ಸೇರಿದಂತೆ ಹಲವು ಬೆಳೆಗಳನ್ನು ಬಿತ್ತನೆ ಮಾಡಿ ನಷ್ಟ ಅನುಭವಿಸಿರುವ ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ಒದಗಿಸುವ ಬದಲು ಬೆಳೆ ನಷ್ಟ ಕಡಿಮೆಯಾಗಿದೆ ಎಂದು ವರದಿ ನೀಡುತ್ತಿರುವ ಪ್ರಕರಣಗಳು ತಮ್ಮ ಗಮನಕ್ಕೆ ಬಂದಿವೆ. ವಿಮಾ ಕಂಪನಿಗಳು ರೈತರೊಂದಿಗೆ ಆಟವಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ತಾವು ಸುಮ್ಮನಿರುವುದಿಲ್ಲ ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ವಿಮಾ ಕಂಪನಿಗಳಿಗೆ ಎಚ್ಚರಿಕೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಸುದೀರ್ಘ ಐದು ಗಂಟೆಗಳ ಕಾಲ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ರೈತರು ಮುಂಗಾರು ಬೆಳೆ ವಿಮೆ ಮಾಡಿಸಿದ್ದಾರೆ. ಇವರಿಗೆ ಮಧ್ಯಂತರ ಪರಿಹಾರ ಜಮಾ ಮಾಡದೆ ವಿಮಾ ಕಂಪನಿಗಳು ರೈತರಿಗೆ ಮೋಸ ಮಾಡುವ ಹುನ್ನಾರ ನಡೆಸುತ್ತಿವೆ ಎಂಬ ಆರೋಪಗಳಿವೆ. ಈ ಬಗ್ಗೆ ತಕ್ಷಣ ಪರಿಶೀಲನೆ ನಡೆಸಿ, ರೈತರಿಗೆ ಯಾವುದೇ ಕಾರಣಕ್ಕೂ ವಿಮಾ ಕಂಪನಿಗಳು ಹಾಗೂ ಇತರರಿಂದ ಮೋಸವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿದ್ದ ಕೃಷಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸಭೆಯಲ್ಲಿ ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ ಶಾಸಕರು, ವಿಮಾ ಕಂಪನಿಗಳಿಗೆ ತಕ್ಷಣವೇ ಕಂತು ಪಾವತಿಸಿ ನೋಂದಣಿಯಾಗಿರುವ ರೈತರಿಗೆ ಮಧ್ಯಂತರ ಪರಿಹಾರ ನೀಡುವಂತೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಕೂಡಲೇ ಕ್ರಮ ಜರುಗಿಸಿ, ನಂತರ ಬೆಳೆ ಕಟಾವು ಪ್ರಯೋಗದ ಬಳಿಕ ಬೆಳೆ ನಷ್ಟದ ಅಂತಿಮ ಲೆಕ್ಕಾಚಾರ ನಡೆಸಿ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.
ಮುಂದಿನ ಆರು ತಿಂಗಳ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕಲಬುರಗಿ ದಕ್ಷಿಣ ಕ್ಷೇತ್ರದ ಎಲ್ಲ 28 ಗ್ರಾಮಗಳಲ್ಲಿ ಕೊಳವೆಬಾವಿಗಳ ಅಗತ್ಯವಿದ್ದಲ್ಲಿ ಕೊರೆಸಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬರ ಪರಿಸ್ಥಿತಿ ಉಂಟಾದಲ್ಲಿ ಗ್ರಾಮೀಣ ಭಾಗಗಳಲ್ಲಿ ಗೋಶಾಲೆಗಳನ್ನು ಆರಂಭಿಸುವ ಕುರಿತು ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಅಗತ್ಯವಿರುವ ಕಡೆ ಗೋಶಾಲೆಗಳನ್ನು ತೆರೆಯಲು ಯೋಜನೆ ರೂಪಿಸಿ, ಜಾನುವಾರುಗಳಿಗೆ ಸಾಕಷ್ಟು ಮೇವು ದಾಸ್ತಾನು ಇರುವಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಅಲ್ಲಮಪ್ರಭು ಪಾಟೀಲ ನಿರ್ದೇಶನ ನೀಡಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಗ್ರೇಡ್-2 ತಹಸೀಲ್ದಾರ್, ಕೃಷಿ, ಪಶುಸಂಗೋಪನೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಗೆ ಗೈರಾದ ಕೆಲವು ಅಧಿಕಾರಿಗಳನ್ನು ಗುರುತಿಸಿ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಶಾಸಕ ಅಲ್ಲಮಪ್ರಭು ಪಾಟೀಲ ಸೂಚಿಸಿದರು. ರೈತರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ, ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.



