ಜಿಲ್ಲಾಸುದ್ದಿಶಿಕ್ಷಣ

ಕೆಬಿಎನ್ ವಿಶ್ವವಿದ್ಯಾಲಯದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಯುವಜನತೆ ರಾಷ್ಟ್ರದ ಶಕ್ತಿ; ಜ್ಞಾನ, ಚಾರಿತ್ರ್ಯ ಮತ್ತು ಕೌಶಲ್ಯ ಬೆಳೆಸಿಕೊಳ್ಳಿ: ಡಾ. ಮುಸ್ತಫಾ ಅಲ್ ಹುಸ್ಸೇನಿ

ಕಲಬುರಗಿ, ಆ.15: ಯುವಜನತೆ ರಾಷ್ಟ್ರದ ಶಕ್ತಿ ಹಾಗೂ ಅತ್ಯಮೂಲ್ಯ ಸಂಪನ್ಮೂಲವಾಗಿದ್ದು, ಪ್ರತಿಯೊಬ್ಬ ಯುವಕ-ಯುವತಿಯೂ ಜ್ಞಾನ, ಚಾರಿತ್ರ್ಯ ಮತ್ತು ಕೌಶಲ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಹೃದಯದಲ್ಲಿ ಪ್ರೀತಿ ಹಾಗೂ ಸೌಹಾರ್ದತೆಯನ್ನು ಹೊಂದಿರಬೇಕು ಎಂದು ಕೆಬಿಎನ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ದೇಶಕ ಡಾ. ಮುಸ್ತಫಾ ಅಲ್ ಹುಸ್ಸೇನಿ ಹೇಳಿದರು.

ನಗರದ ಕೆಬಿಎನ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಅನೇಕ ದೇಶಪ್ರೇಮಿಗಳು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅವರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯನ್ನು ಸದಾ ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ. ದೇಶದ ಅಭಿವೃದ್ಧಿಗಾಗಿ ಅನೇಕರು ನಿರಂತರವಾಗಿ ಶ್ರಮಿಸುತ್ತಿದ್ದು, ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಅಭಿವ್ಯಕ್ತಿ ಸ್ವಾತಂತ್ರ್ಯದ ಮೌಲ್ಯವನ್ನು ಅರಿತುಕೊಂಡು ಸಮಾಜ ಹಾಗೂ ರಾಷ್ಟ್ರದ ಜವಾಬ್ದಾರಿಯನ್ನು ಗೌರವಿಸಬೇಕು. ಎಲ್ಲ ಧರ್ಮಗಳನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ದ್ವೇಷದಿಂದ ಯಾವುದೇ ಸಾಧನೆ ಸಾಧ್ಯವಿಲ್ಲ. ಏಕತೆ, ಸಹೋದರತೆ ಮತ್ತು ಸೌಹಾರ್ದತೆಯಿಂದ ಬದುಕುವ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡೋಣ ಎಂದು ಡಾ. ಮುಸ್ತಫಾ ಅಲ್ ಹುಸ್ಸೇನಿ ಕರೆ ನೀಡಿದರು.

ವಿಶ್ವವಿದ್ಯಾಲಯದ ಸಮ-ಉಪಕುಲಪತಿಗಳು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿ, ವಿಶ್ವವಿದ್ಯಾಲಯದ ವಿವಿಧ ಸಾಧನೆಗಳನ್ನು ವಿವರಿಸಿದರು. ಕೆಬಿಎನ್ ವಿಶ್ವವಿದ್ಯಾಲಯ ದಿನದಿಂದ ದಿನಕ್ಕೆ ಅಭಿವೃದ್ಧಿಯತ್ತ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲಿದೆ. ವಿಶ್ವವಿದ್ಯಾಲಯದಲ್ಲಿ ಸಂಶೋಧನೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಈ ಕ್ಷೇತ್ರದಲ್ಲಿಯೂ ಮಹತ್ವದ ಹೆಜ್ಜೆಗಳನ್ನು ಇಡಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಂದ ದೇಶಭಕ್ತಿ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ 150 ವರ್ಷ ಪೂರೈಸಿದ ‘ವಂದೇ ಮಾತರಂ’ ಗೀತೆಯನ್ನು ಪ್ರಸ್ತುತಪಡಿಸಲಾಯಿತು. ಅಕ್ಬರ್ ಪಟೇಲ್ ಅವರ ಕಾರ್ಯವೈಖರಿಯನ್ನು ಅಭಿನಂದಿಸಿ ಅವರಿಗೆ ಮೆಚ್ಚುಗೆಯ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಅಕ್ಬರ್ ಹುಸ್ಸೇನಿ ಶಾಲೆಯ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕನ್ನಡ, ಉರ್ದು ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಭಾಷಣ ಮಾಡಿದರು. ದೇಶಭಕ್ತಿ ಗೀತೆಗಳ ಕಾರ್ಯಕ್ರಮವೂ ನಡೆಯಿತು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಮಿರ್ ವಿಲಾಯತ್ ಅಲಿ ಸ್ವಾಗತಿಸಿದರು. ಸಹ ಪ್ರಾಧ್ಯಾಪಕಿ ಡಾ. ಗೀತಾಂಜಲಿ ಕಾಂಬಳೆ ವಂದಿಸಿದರು. ವಿದ್ಯಾರ್ಥಿಗಳಾದ ನಿದಾ ಹಾಗೂ ಷಾಜಿಯಾ ಕಾರ್ಯಕ್ರಮ ನಿರ್ವಹಿಸಿದರು.

Related Articles

Leave a Reply

Your email address will not be published. Required fields are marked *

Back to top button