ಜಿಲ್ಲಾಸುದ್ದಿ

ಬರ ಪರಿಹಾರಕ್ಕೆ ಆಗ್ರಹಿಸಿ ಆ.20ರಂದು ಕಲಬುರಗಿ ಬಂದ್‌ಗೆ ಕರೆ

ರೈತರ ಸಾಲ ಮನ್ನಾ, ಎಕರೆಗೆ ₹50 ಸಾವಿರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ಕಲಬುರಗಿ, ಆ.16: ಜಿಲ್ಲೆಯಲ್ಲಿ ಮುಂಗಾರು ಮಳೆ ವಿಫಲಗೊಂಡು ಬರ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ತಕ್ಷಣ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು, ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್ 20ರಂದು ಕಲಬುರಗಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂದ್‌ಗೆ ವಿವಿಧ ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಬೆಂಬಲ ನೀಡಲಿದ್ದು, ಜಿಲ್ಲೆ ಹಾಗೂ ನಗರದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ ಎಂದರು.

ಕಲ್ಯಾಣ ಕರ್ನಾಟಕ ಸೇರಿದಂತೆ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ತಕ್ಷಣ ಸರ್ಕಾರ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಮುಂಗಾರು ಮಳೆ ಕೊರತೆಯಿಂದ ಹೆಸರು, ಉದ್ದು, ಸೋಯಾಬೀನ್, ಎಳ್ಳು, ಹತ್ತಿ, ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಪ್ರತಿ ಎಕರೆಗೆ ₹50 ಸಾವಿರ ಬರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಎಲ್ಲ ರೈತರ ವಿಮಾ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಮಹಾರಾಷ್ಟ್ರದ ಪುಣೆ ಉಜ್ಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು. ಅಂತರ್ಜಲ ಮಟ್ಟ ಕುಸಿದಿರುವುದರಿಂದ ಬೋರ್‌ವೆಲ್‌ಗಳು ಹಾಗೂ ಬಾವಿಗಳು ಬತ್ತುತ್ತಿವೆ. ರೈತರ ಕಬ್ಬು ಒಣಗುತ್ತಿದ್ದು, ನದಿಗಳಲ್ಲಿಯೂ ನೀರಿನ ಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ಕೂಡಲೇ ಗೋಶಾಲೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎನ್‌ಎಂಎಂಸಿ ಕಂಪನಿಯ ವಿರುದ್ಧ ಕ್ರಮ ಕೈಗೊಂಡು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಅಂಗವಿಕಲರ ವೇತನದ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಹಿಂಗಾರು ಬಿತ್ತನೆಗೆ ಅಗತ್ಯವಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ಒದಗಿಸಬೇಕು. ಬೆಂಬಲ ಬೆಲೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಮೇಲೆ ಹಾಗೂ ಕೇಂದ್ರ ಸರ್ಕಾರವು ರಾಜ್ಯದ ಮೇಲೆ ಹೊಣೆ ಹೊರಿಸುವುದನ್ನು ಬಿಟ್ಟು, ತಕ್ಷಣವೇ ಕೇಂದ್ರಕ್ಕೆ ನಿಯೋಗ ತೆರಳಿ ಪರಿಹಾರ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿಸಬೇಕು ಎಂದು ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದರು.

ಆ.20ರ ಕಲಬುರಗಿ ಬಂದ್ ಯಶಸ್ವಿಗೊಳಿಸಲು ಎರಡು ದಿನಗಳಲ್ಲಿ ಎಲ್ಲ ಕನ್ನಡಪರ ಸಂಘಟನೆಗಳ ಸಭೆ ಕರೆದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ರೈತರ ಸಂಕಷ್ಟ ನಿವಾರಣೆಗೆ ನಡೆಯಲಿರುವ ಬಂದ್‌ಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಸಚಿನ್ ಎಸ್. ಫರತಾಬಾದ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್, ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸಂದೀಪ್ ಭರಣಿ, ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ರವಿ ಎನ್. ದೇವಗಾಂವ್ ಸೇರಿದಂತೆ ಭೀಮಾಶಂಕರ ಮಾಢಿಯಾಳ, ಮೌಲಾಮುಲ್ಲಾ, ಆನಂದ ದೊಡ್ಮನಿ, ಗೋಪಾಲ ನಾಟೀಕಾರ್, ನಂದಕುಮಾರ ನಾಗಭುಜಂಗ, ಕರೆಪ್ಪ ಕರಗೊಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button