ಸಮಗ್ರ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಬೀದರ್ನಲ್ಲಿ ಇಂದು ಪ್ರತಿಭಟನೆ
ಎಲ್ಲ ಭಾಷಾ ಮಾಧ್ಯಮಗಳ ಖಾಲಿ ಹುದ್ದೆಗಳನ್ನು ಒಳಗೊಂಡಂತೆ ನೇಮಕಾತಿ ಪ್ರಕ್ರಿಯೆ ನಡೆಸಲು ಒತ್ತಾಯ

ಬೀದರ್: ರಾಜ್ಯ ಸರ್ಕಾರ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ, ಎಲ್ಲ ಭಾಷಾ ಮಾಧ್ಯಮಗಳ ಖಾಲಿ ಹುದ್ದೆಗಳನ್ನು ಒಳಗೊಂಡಂತೆ ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಮೈನಾರಿಟಿ ರಿಫಾರ್ಮ್ಸ್ ಫೋರಂ (ಎಂಆರ್ಎಫ್) ಅಧ್ಯಕ್ಷ ಡಾ. ಮಕ್ಸೂದ್ ಚಂದಾ ಆಗ್ರಹಿಸಿದ್ದಾರೆ.
ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳ ಶಿಕ್ಷಕರ ಹುದ್ದೆಗಳಿಗೆ ಆದ್ಯತೆ ನೀಡಲಾಗಿದ್ದು, ಉರ್ದು, ಮರಾಠಿ, ತೆಲುಗು, ತಮಿಳು, ಹಿಂದಿ ಸೇರಿದಂತೆ ಇತರೆ ಭಾಷಾ ಮಾಧ್ಯಮದ ಸರ್ಕಾರಿ ಶಾಲೆಗಳ ಖಾಲಿ ಹುದ್ದೆಗಳಿಗೆ ಸಮರ್ಪಕ ಅವಕಾಶ ಕಲ್ಪಿಸಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಲ್ಲ ಭಾಷಾ ಮಾಧ್ಯಮಗಳಲ್ಲಿರುವ ಖಾಲಿ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಪ್ರಕ್ರಿಯೆಯಲ್ಲಿ ಸೇರಿಸದಿರುವುದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗುವುದರ ಜೊತೆಗೆ, ಶಿಕ್ಷಕರ ಕೊರತೆಯಿಂದ ಬಳಲುತ್ತಿರುವ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶಿಕ್ಷಣದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಆ.17ರಂದು ಪ್ರತಿಭಟನೆ
ಈ ಹಿನ್ನೆಲೆಯಲ್ಲಿ ಆ.17ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ ಎಲ್ಲ ಭಾಷಾ ಮಾಧ್ಯಮಗಳ ಮಂಜೂರಾದ ಹಾಗೂ ಖಾಲಿ ಹುದ್ದೆಗಳನ್ನು ಗುರುತಿಸಿ, ಅಗತ್ಯವಿರುವ ಹುದ್ದೆಗಳಿಗೆ ಪೂರಕ ಅಧಿಸೂಚನೆ ಹೊರಡಿಸಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಡಾ. ಮಕ್ಸೂದ್ ಚಂದಾ ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಂಡು, ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಅಗತ್ಯ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.



