ರಾಜ್ಯ

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 13 ಸ್ಥಳಗಳಲ್ಲಿ ಇಡಿ ದಾಳಿ

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ; ರಾಜ್ಯದ 21 ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ

ಕಲಬುರಗಿ, ಆ.18: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ಬೆಳಗ್ಗೆಯೇ ರಾಜ್ಯದ ಹಲವು ಕಡೆಗಳಲ್ಲಿ ಏಕಕಾಲಕ್ಕೆ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಬೆಂಗಳೂರು ಹಾಗೂ ಕಲಬುರಗಿಯ ಆನಂದನಗರದಲ್ಲಿರುವ ನಿವಾಸಗಳು ಸೇರಿದಂತೆ 13ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ಸಿಆರ್‌ಪಿಎಫ್ ಯೋಧರ ಬಿಗಿ ಭದ್ರತೆಯಲ್ಲಿ ಬೆಳಗ್ಗೆಯಿಂದಲೇ ಕಾರ್ಯಾಚರಣೆ ನಡೆಯುತ್ತಿದ್ದು, 10ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮೂರು ಗಂಟೆಗೂ ಅಧಿಕ ಕಾಲದಿಂದ ತೀವ್ರ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಮೂಲ ಜಾಲವನ್ನು ಭೇದಿಸಲು ಇಡಿ ಅಧಿಕಾರಿಗಳು ರಾಜ್ಯಾದ್ಯಂತ ಬಲೆ ಬೀಸಿದ್ದಾರೆ.

ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸಗಳಷ್ಟೇ ಅಲ್ಲದೆ, ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ, ಪ್ರಕರಣದ ಮಧ್ಯವರ್ತಿಗಳು ಹಾಗೂ ಡಿಜಿಟಲ್ ಮೌಲ್ಯಮಾಪನ ನಡೆಸಿದ ಸಂಸ್ಥೆಗಳ ಕಚೇರಿಗಳ ಮೇಲೆಯೂ ದಾಳಿ ನಡೆಸಲಾಗಿದೆ.

ಅಕ್ರಮವಾಗಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಆಯ್ಕೆಯಾದ ಅಭ್ಯರ್ಥಿಗಳ ಮನೆಗಳ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರು, ಕಲಬುರಗಿ, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಕಾರವಾರ, ಬೆಳಗಾವಿ ಸೇರಿದಂತೆ ಗುಜರಾತ್‌ನ ಅಹಮದಾಬಾದ್‌ವರೆಗೆ ಒಟ್ಟು 21 ಪ್ರಮುಖ ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ತಂಡಗಳು ಏಕಕಾಲಕ್ಕೆ ಪರಿಶೀಲನೆ ನಡೆಸುತ್ತಿವೆ.

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಹಣಕಾಸು ಅಕ್ರಮ, ಲಂಚಾವತಾರ ಹಾಗೂ ಅಕ್ರಮ ಹಣ ವರ್ಗಾವಣೆ ನಡೆದಿದೆ ಎನ್ನಲಾದ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು, ಹಣಕಾಸು ವ್ಯವಹಾರಗಳ ದಾಖಲೆಗಳು ಹಾಗೂ ಇತರ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳುವ ಉದ್ದೇಶದಿಂದ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ದಾಳಿ ಹಾಗೂ ಶೋಧ ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಹತ್ವದ ಮಾಹಿತಿ ಹೊರಬರುವ ಸಾಧ್ಯತೆ ಇದೆ.

Related Articles

Leave a Reply

Your email address will not be published. Required fields are marked *

Back to top button