ರಾಜಕೀಯ

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಖಂಡಿಸಿ ಆ.20ರಂದು ಕಲಬುರಗಿಯಲ್ಲಿ ಸಾಂಕೇತಿಕ ಧರಣಿ

ಕೋಮುವಾದಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ; ದಲಿತ ಸಮುದಾಯದ ಮುಂದೆ ಕ್ಷಮೆಯಾಚಿಸುವಂತೆ ಒತ್ತಾಯ

ಕಲಬುರಗಿ, ಆ.18: ಉತ್ತರ ಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಬಳಿಕ ಕೋಮುವಾದಿಗಳು ಹೋಮ-ಹವನ ನಡೆಸಿ ಸ್ಥಳವನ್ನು ಶುದ್ಧೀಕರಣ ಮಾಡಿರುವುದನ್ನು ಖಂಡಿಸಿ ಇದೇ ಆಗಸ್ಟ್ 20ರಂದು ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಅರ್ಜುನ ಭದ್ರೆ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆ ಕೇವಲ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಡಿದ ಅವಮಾನವಲ್ಲ. ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಘಟನೆಗೆ ಕಾರಣರಾದ ಕೋಮುವಾದಿಗಳ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಸರ್ಕಾರದ ಜನವಿರೋಧಿ ನೀತಿಗಳ ಕುರಿತು ದೇಶದ ಜನರ ಮುಂದೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಖರ್ಗೆ ಅವರು ಸಭೆ ನಡೆಸಿದ ಸ್ಥಳವನ್ನು ಹೋಮ-ಹವನ ಮಾಡಿ ಗಂಗಾಜಲ ಸಿಂಪಡಿಸುವ ಮೂಲಕ ಶುದ್ಧೀಕರಣ ಮಾಡಲಾಗಿದೆ ಎಂದು ಅರ್ಜುನ ಭದ್ರೆ ಆರೋಪಿಸಿದರು.

ಈ ಶುದ್ಧೀಕರಣ ಕಾರ್ಯಕ್ರಮ ಬಿಜೆಪಿ ಪಕ್ಷದ ಕುತಂತ್ರದಿಂದ ನಡೆದಿದೆ ಎಂದು ಅವರು ಆರೋಪಿಸಿದರು. ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ರಾಜ್ಯಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಿ ಬಿಜೆಪಿ ಪಕ್ಷದವರು ಇದರಲ್ಲಿ ಭಾಗಿಯಾಗಿಲ್ಲ ಎಂದು ಹೇಳಿರುವುದು ಸತ್ಯಕ್ಕೆ ವಿರುದ್ಧವಾಗಿದೆ ಎಂದರು. ಬಿಜೆಪಿ ಮುಖಂಡ ಗಿರೀಶ್‌ಚಂದ್ರ ಪಾಂಡೆ ಅವರ ನೇತೃತ್ವದಲ್ಲಿ ಹೋಮ-ಹವನ ನಡೆದಿದೆ ಎಂದು ಆರೋಪಿಸಿದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಮನುವಾದಿ ಹಾಗೂ ಜಾತಿವಾದಿ ಮನೋಭಾವದ ಮುಖವಾಡ ಮತ್ತೊಮ್ಮೆ ಕಳಚಿಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಾಷ್ಟ್ರೀಯ ಹಿರಿಯ ನಾಯಕರು ಭಾಷಣ ಮಾಡಿದ ಸ್ಥಳವನ್ನೇ ಶುದ್ಧೀಕರಣ ಮಾಡಿರುವುದು ಇಡೀ ದಲಿತ ಸಮುದಾಯಕ್ಕೆ ಅವಮಾನವಾಗಿದೆ. ಈ ಘಟನೆಯಿಂದ ದೇಶದ ದಲಿತ ಸಮುದಾಯದ ಭಾವನೆಗಳಿಗೆ ನೋವುಂಟಾಗಿದೆ ಎಂದು ಹೇಳಿದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಮಾನವೀಯತೆ ಹಾಗೂ ದಲಿತ ಸಮುದಾಯದ ಬಗ್ಗೆ ಗೌರವವಿದ್ದರೆ, ಈ ಘಟನೆಗೆ ಸಂಬಂಧಿಸಿದಂತೆ ದೇಶದ ದಲಿತ ಸಮುದಾಯದ ಮುಂದೆ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಕ್ರಾಂತಿ, ಮಹಾಂತೇಶ ಬಡದಾಳ, ಸೂರ್ಯಕಾಂತ ಆಜಾದಪುರ ಸೇರಿದಂತೆ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button