ಜಿಲ್ಲಾಸುದ್ದಿ

ಪರಿಷತ್ತಿನಲ್ಲಿ ವಿಶ್ವಕರ್ಮರಿಗೆ ಪ್ರಾತಿನಿಧ್ಯ ನೀಡಿ: ದೇವೇಂದ್ರ ದೇಸಾಯಿ ಕಲೂರ್ ಆಗ್ರಹ

ಅತ್ಯಂತ ಹಿಂದುಳಿದ ಸಮುದಾಯಗಳಿಗೆ ನ್ಯಾಯಯುತ ಪಾಲು ಕಲ್ಪಿಸಲು ಒಬಿಸಿಯಲ್ಲೂ ಒಳಮೀಸಲಾತಿ ಜಾರಿಗೆ ಆಗ್ರಹ

ಕಲಬುರಗಿ, ಆ.18: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ವ್ಯವಸ್ಥೆಯನ್ನೂ ಸಮಗ್ರವಾಗಿ ಮರುಪರಿಶೀಲಿಸಿ, ಅತ್ಯಂತ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಒಬಿಸಿ ವರ್ಗದಲ್ಲಿಯೂ ಒಳಮೀಸಲಾತಿ ಜಾರಿಗೆ ತರಬೇಕು ಎಂದು ವಿಶ್ವಕರ್ಮ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲೂರ್ ಆಗ್ರಹಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿಯ ಮೂಲ ಆಶಯ ಸಾಮಾಜಿಕ ನ್ಯಾಯ ಹಾಗೂ ಸಮಾನ ಅವಕಾಶ ಕಲ್ಪಿಸುವುದಾಗಿದೆ. ಆದರೆ ಹಿಂದುಳಿದ ವರ್ಗಗಳಲ್ಲಿನ ಕೆಲವೇ ಪ್ರಬಲ ಸಮುದಾಯಗಳು ಮೀಸಲಾತಿಯ ಹೆಚ್ಚಿನ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದು, ಅನೇಕ ಅತ್ಯಂತ ಹಿಂದುಳಿದ ಸಮುದಾಯಗಳು ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಸಮಗ್ರ ಅಧ್ಯಯನ ನಡೆಸಬೇಕು. ಅತ್ಯಂತ ಹಿಂದುಳಿದ ಸಮುದಾಯಗಳನ್ನು ಪ್ರತ್ಯೇಕವಾಗಿ ಗುರುತಿಸಿ, ಅವರಿಗೆ ನ್ಯಾಯಯುತ ಪಾಲು ದೊರೆಯುವಂತೆ ಒಬಿಸಿ ವರ್ಗದಲ್ಲಿಯೂ ಒಳಮೀಸಲಾತಿ ಜಾರಿಗೆ ತರುವ ಕುರಿತು ವಿಧಾನಮಂಡಲದ ಅಧಿವೇಶನದಲ್ಲಿಯೇ ಗಂಭೀರ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ಅಗತ್ಯವಿದ್ದಲ್ಲಿ ತಜ್ಞರ ಸಮಿತಿ ರಚಿಸಿ ವರದಿ ಪಡೆದು, ಅದರ ಆಧಾರದ ಮೇಲೆ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಮೀಸಲಾತಿಯ ಸೌಲಭ್ಯಗಳು ಎಲ್ಲ ಹಿಂದುಳಿದ ಸಮುದಾಯಗಳಿಗೂ ಸಮಾನವಾಗಿ ತಲುಪುವಂತಾಗಬೇಕು ಎಂದು ಹೇಳಿದರು.

ವಿಶ್ವಕರ್ಮರಿಗೆ ವಿಧಾನ ಪರಿಷತ್ತಿನಲ್ಲಿ ಪ್ರಾತಿನಿಧ್ಯ ನೀಡಿ

ವಿಶ್ವಕರ್ಮ ಪಂಚ ಸಮುದಾಯ ಸೇರಿದಂತೆ ಅನೇಕ ಹಿಂದುಳಿದ ಸಮುದಾಯಗಳಿಗೆ ಸರ್ಕಾರದ ಯೋಜನೆಗಳು ಹಾಗೂ ಅವಕಾಶಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಇಂತಹ ಸಮುದಾಯಗಳ ಸಬಲೀಕರಣಕ್ಕಾಗಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ ಮೀಸಲಾತಿ ವ್ಯವಸ್ಥೆಯಲ್ಲಿಯೂ ನ್ಯಾಯಯುತ ಪಾಲು ಕಲ್ಪಿಸುವುದು ಕಾಲದ ಅಗತ್ಯವಾಗಿದೆ ಎಂದು ದೇವೇಂದ್ರ ದೇಸಾಯಿ ಕಲೂರ್ ಹೇಳಿದರು.

ರಾಜ್ಯದ ವಿಶ್ವಕರ್ಮ ಪಂಚ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಸಮುದಾಯದ ಅರ್ಹ ವ್ಯಕ್ತಿಯೊಬ್ಬರನ್ನು ಕರ್ನಾಟಕ ವಿಧಾನ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಇದರಿಂದ ವಿಶ್ವಕರ್ಮ ಸಮುದಾಯದ ಸಮಸ್ಯೆಗಳು ವಿಧಾನಮಂಡಲದಲ್ಲಿ ಪರಿಣಾಮಕಾರಿಯಾಗಿ ಪ್ರತಿಧ್ವನಿಸಲಿದ್ದು, ಸರ್ಕಾರದ ಮಟ್ಟದಲ್ಲಿ ಸಮುದಾಯದ ಅಭಿವೃದ್ಧಿ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಒಬಿಸಿ ಸಮುದಾಯಗಳಲ್ಲಿನ ಅತ್ಯಂತ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರವೇ ಸ್ಪಷ್ಟ ನೀತಿ ಪ್ರಕಟಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳಿಗಾಗಿ ರಾಜ್ಯವ್ಯಾಪಿ ಹೋರಾಟ ರೂಪಿಸುವ ಅನಿವಾರ್ಯತೆ ಎದುರಾಗಬಹುದು ಎಂದು ದೇವೇಂದ್ರ ದೇಸಾಯಿ ಕಲೂರ್ ಎಚ್ಚರಿಸಿದರು.

Related Articles

Leave a Reply

Your email address will not be published. Required fields are marked *

Back to top button