ಶಿಕ್ಷಣ

ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆಗೆ ಒತ್ತಾಯ; ವಿಶೇಷ ಶಿಕ್ಷಕರ ನೇಮಕಾತಿಗೆ ಆಗ್ರಹ

ಕಲಬುರಗಿ, ಆ. 19: ರಾಜ್ಯ ಸರ್ಕಾರ ಆದೇಶಿಸಿರುವ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಬೇಕು ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗಣಿತ, ಹಿಂದಿ, ಉರ್ದು ಸೇರಿದಂತೆ ವಿವಿಧ ವಿಷಯ ಶಿಕ್ಷಕರನ್ನು ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಶನ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಮುಖ್ಯಮಂತ್ರಿ ಹಾಗೂ ಶಾಲಾ ಶಿಕ್ಷಣ ಸಚಿವರಿಗೆ ಬರೆದ ಮನವಿ ಪತ್ರವನ್ನು ರಾಜ್ಯದ ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಅವರಿಗೆ ಸಲ್ಲಿಸಿದರು.

ಎಐಡಿವೈಒ ಸಂಘಟನೆಯ ಅಖಿಲ ಭಾರತ ಉಪಾಧ್ಯಕ್ಷ ಡಾ. ಜಿ. ಶಶಿಕುಮಾರ್ ಮಾತನಾಡಿ, ಮಾನವೀಯ ದೃಷ್ಟಿಯಿಂದ ರಾಜ್ಯ ಸರ್ಕಾರದ ಆದೇಶದಂತೆ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಬೇಕು ಎಂದು ಒತ್ತಾಯಿಸಿದರು. ಮಕ್ಕಳ ಸಮಗ್ರ ಬೆಳವಣಿಗೆ ಮತ್ತು ಗುಣಮಟ್ಟದ ಶಿಕ್ಷಣದ ಹಿತದೃಷ್ಟಿಯಿಂದ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗಣಿತ, ಹಿಂದಿ, ಉರ್ದು ಸೇರಿದಂತೆ ಅಗತ್ಯವಿರುವ ವಿಷಯ ಶಿಕ್ಷಕರನ್ನು ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ, ರಾಜ್ಯ ಉಪಾಧ್ಯಕ್ಷ ವಿನಯ ಸಾರಥಿ ಹಾಗೂ ಹೋರಾಟ ಸಮಿತಿಯ ರಾಜ್ಯ ಸಹ ಸಂಚಾಲಕ ಭವಾನಿ ಶಂಕರ್ ಗೌಡ ವಹಿಸಿದ್ದರು.

ಉದ್ಯೋಗಾಕಾಂಕ್ಷಿಗಳಾದ ಲಕ್ಷ್ಮಿ ರೆಡ್ಡಿ, ವೆಂಕಟಯ್ಯ, ಅಬ್ದುಲ್ ಭಾಷಾ ಪಟೇಲ್, ಸರೋಜಾ, ಎಲ್ಲಪ್ಪ ದೊರೆ, ಪರಶುರಾಮ್, ಜಗದೀಶ್ ನೇಮಕಲ್, ರಣಜಿತ್, ಜಯಣ್ಣ, ಕಲಾವತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಚಿವ ಡಾ. ಅಜಯ್ ಸಿಂಗ್ ಅವರು ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ರಾಜ್ಯ ಸರ್ಕಾರ ಜನವರಿ 29ರಂದು ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆಗೆ ಮಾಡಿರುವ ನಿರ್ಧಾರ ಸರ್ಕಾರದ ಗಮನದಲ್ಲಿದೆ. ಇದು ನ್ಯಾಯೋಚಿತವಾಗಿದ್ದು, ಸಮಸ್ಯೆ ಪರಿಹರಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕೂಡಲೇ ತೀರ್ಮಾನ ಕೈಗೊಂಡು ಪ್ರತಿಭಟನಾಕಾರರ ಪರವಾಗಿ ನಿಲ್ಲುವುದಾಗಿ ಭರವಸೆ ನೀಡಿದರು.

ಅದೇ ರೀತಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಗಣಿತ ವಿಷಯದಲ್ಲಿ ಅನುತ್ತೀರ್ಣರಾಗುತ್ತಿರುವ ಮಕ್ಕಳ ಪ್ರಮಾಣ ಹೆಚ್ಚಾಗಿರುವ ಕುರಿತು ಸರ್ಕಾರದ ಗಮನಕ್ಕೆ ಬಂದಿದೆ. ಈ ಸಮಸ್ಯೆಯ ಬಗ್ಗೆಯೂ ಸರ್ಕಾರ ಗುಣಾತ್ಮಕವಾಗಿ ಸ್ಪಂದಿಸಲಿದೆ ಎಂದು ಸಚಿವರು ಭರವಸೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button