ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಇನ್ನು ನೋಟಿಸ್ ಬದಲು ದಂಡೋಪಾಯ: ಡಾ. ಶರಣಪ್ಪ
ನಿಯಮ ಉಲ್ಲಂಘನೆ ತಡೆಗೆ ಜಾಗೃತಿ ಅಭಿಯಾನ ಮುಂದುವರಿಕೆ; ಇನ್ನು ನೇರ ಚಲನ್ ಮೂಲಕ ದಂಡ ಪಾವತಿಗೆ ಕ್ರಮ

ಕಲಬುರಗಿ, ಆ. 19: ನಗರದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಈವರೆಗೆ ನೋಟಿಸ್ ನೀಡಿ ಎಚ್ಚರಿಸಲಾಗುತ್ತಿತ್ತು. ಇನ್ನು ಮುಂದೆ ಯಾವುದೇ ನೋಟಿಸ್ ನೀಡದೆ ನೇರವಾಗಿ ಚಲನ್ ಮೂಲಕ ದಂಡ ಪಾವತಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ತಿಳಿಸಿದರು.
ತಮ್ಮ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿನಿಂದ ನಗರ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಪಾಲನೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆದಾಗ್ಯೂ, ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ಶಾಲೆಗಳು, ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮೊದಲ, ಎರಡನೇ ಹಾಗೂ ಮೂರನೇ ಹಂತದಲ್ಲಿ ಎಚ್ಚರಿಕೆ ನೋಟಿಸ್‌ಗಳನ್ನು ನೀಡಲಾಗಿದೆ. ಆದರೂ ನಿಯಮ ಉಲ್ಲಂಘನೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ನೇರವಾಗಿ ಚಲನ್ ಮೂಲಕ ದಂಡ ವಿಧಿಸಿ ವಸೂಲಿ ಮಾಡಲು ಸಂಚಾರ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೂ ನಗರ ವ್ಯಾಪ್ತಿಯಲ್ಲಿ ಪ್ರತಿದಿನ 25 ಸಾವಿರದಿಂದ 26 ಸಾವಿರದಷ್ಟು ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಸಂಚಾರ ಠಾಣೆಯ ಪೊಲೀಸರು ಈವರೆಗೆ ವಿನಾಯಿತಿ ನೀಡುತ್ತಿದ್ದರು ಎಂದು ಅವರು ತಿಳಿಸಿದರು.
ಇದುವರೆಗೆ ಪ್ರತಿದಿನ ಸುಮಾರು 1,000ರಿಂದ 2,000 ವಾಹನ ಸವಾರರಿಗೆ ದಂಡ ವಿಧಿಸಲಾಗುತ್ತಿತ್ತು. ಆದರೆ ಇನ್ನು ಮುಂದೆ ಯಾವುದೇ ರೀತಿಯ ವಿನಾಯಿತಿ ನೀಡದೆ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ನೇರವಾಗಿ ದಂಡ ಪಾವತಿ ಕ್ರಮ ಜಾರಿಗೊಳಿಸಲಾಗುವುದು ಎಂದು ಡಾ. ಶರಣಪ್ಪ ಎಚ್ಚರಿಕೆ ನೀಡಿದರು.
ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತಮ್ಮ ಹಾಗೂ ಇತರರ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು. ನಿಯಮ ಪಾಲನೆಯ ಮೂಲಕ ಅಪಘಾತಗಳನ್ನು ತಡೆಗಟ್ಟಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.



