ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಬಸ್ ನಿಲ್ದಾಣ, ಎಪಿಎಂಸಿಯಲ್ಲಿ ಪ್ರತಿಭಟನೆ ಬಿಸಿ
ಮಳೆ ಕೊರತೆಯಿಂದ ಬೆಳೆ ನಷ್ಟ; ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ

ಕಲಬುರಗಿ, ಆ.20: ಮುಂಗಾರು ಮಳೆ ವಿಫಲಗೊಂಡಿರುವ ಹಿನ್ನೆಲೆಯಲ್ಲಿ ಕೂಡಲೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು, ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಸಂಘಟಕರ ನೇತೃತ್ವದಲ್ಲಿ ಬುಧವಾರ ಕರೆ ನೀಡಿದ್ದ ಕಲಬುರಗಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ವಿವಿಧ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಬೆಳಿಗ್ಗೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದರು. ಪ್ರತಿಭಟನೆಯಿಂದ ಬಸ್‌ಗಳ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಯಿತು. ನಿಲ್ದಾಣದಿಂದ ಹೊರಬಂದ ಕೆಲವು ಬಸ್‌ಗಳನ್ನು ಪ್ರತಿಭಟನಾಕಾರರು ತಡೆದ ಹಿನ್ನೆಲೆಯಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್ ನಿಲ್ದಾಣದ ಮಾರ್ಗದಲ್ಲಿಯೂ ವಾಹನಗಳ ಸಂಚಾರಕ್ಕೆ ಪ್ರತಿಭಟನಾಕಾರರು ಅವಕಾಶ ನೀಡದ ಕಾರಣ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತು.
ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಕೇಂದ್ರ ಬಸ್ ನಿಲ್ದಾಣದಿಂದ ಎಂಎಸ್‌ಕೆ ಮಿಲ್ ಮಾರ್ಗ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದವರೆಗಿನ ಬಹುತೇಕ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದವು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರದೇಶದಲ್ಲಿಯೂ ಅಂಗಡಿಗಳು ಬಂದ್ ಆಗಿದ್ದವು.
ಮಧ್ಯಾಹ್ನದ ನಂತರ ಪ್ರತಿಭಟನೆಯ ಕಾವು ಕಡಿಮೆಯಾಯಿತು. ಅಂಗಡಿ-ಮುಂಗಟ್ಟುಗಳು ಎಂದಿನಂತೆ ಪುನಃ ಆರಂಭಗೊಂಡವು. ಆದರೆ ಬೆಳಗಿನ ಸಮಯದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಕೆಲಕಾಲ ಪರದಾಡಬೇಕಾಯಿತು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದವರು ಬಿ. ನಾಗೇಂದ್ರ ಅವರನ್ನು ಮುಂದಿಟ್ಟುಕೊಂಡು ಕಲಾಪವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಬರಗಾಲದ ಕುರಿತು ಚರ್ಚಿಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಜೈ ಕನ್ನಡಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಸಚಿನ್ ಎಸ್. ಫರತಾಬಾದ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್, ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸಂದೀಪ್ ಭರಣಿ, ಕರ್ನಾಟಕ ನವನಿರ್ಮಾಣ ಸೇನೆಯ ಜಿಲ್ಲಾಧ್ಯಕ್ಷ ರವಿ ಎನ್. ದೇವಗಾಂವ್, ಭೀಮಾಶಂಕರ ಮಾದಿಯಾಳ, ಮೌಲಾಮುಲ್ಲಾ, ಆನಂದ ದೊಡ್ಡಮನಿ, ಗೋಪಾಲ್ ನಾಟೀಕಾರ್, ನಂದಕುಮಾರ್ ನಾಗಭುಜಂಗ, ಕರೆಪ್ಪ ಕರಗೊಂದ, ಎಂ.ಬಿ. ಸಜ್ಜನ, ಪದ್ಮಿನಿ ಕಿರಣಗಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಕಲಬುರಗಿ ಜಿಲ್ಲೆಯನ್ನು ಭೀಕರ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು. ಜೂನ್ ತಿಂಗಳಲ್ಲಿ ವಾಡಿಕೆಯಷ್ಟು ಮಳೆಯಾಗದೆ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಬೀನ್, ಎಳ್ಳು, ಹತ್ತಿ ಹಾಗೂ ಕಬ್ಬು ಸೇರಿದಂತೆ ಹಲವು ಬೆಳೆಗಳು ಬೆಳವಣಿಗೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದರು.
ಬೆಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಪ್ರತಿ ಎಕರೆಗೆ ₹50 ಸಾವಿರ ಬರ ಪರಿಹಾರ ನೀಡಬೇಕು. ಎಲ್ಲ ರೈತರ ಬೆಳೆ ವಿಮೆ ಹಣವನ್ನು ಬಿಡುಗಡೆ ಮಾಡಬೇಕು ಹಾಗೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಮಹಾರಾಷ್ಟ್ರದ ಪುಣೆ ಉಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು. ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆಬಾವಿ ಮತ್ತು ಬಾವಿಗಳು ಬತ್ತುತ್ತಿವೆ. ಕಬ್ಬು ಬೆಳೆ ಒಣಗುತ್ತಿರುವುದರಿಂದ ನದಿ-ಕೆರೆಗಳಲ್ಲಿಯೂ ನೀರಿನ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಗೋಶಾಲೆಗಳನ್ನು ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಗರದಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಂಪನಿಯ ವಿರುದ್ಧ ಕ್ರಮ ಕೈಗೊಂಡು ಶುದ್ಧ ಕುಡಿಯುವ ನೀರು ಪೂರೈಸಬೇಕು. ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಅಂಗವಿಕಲರ ವೇತನವನ್ನು ಬಾಕಿಯಿಲ್ಲದೆ ಬಿಡುಗಡೆ ಮಾಡಬೇಕು. ಹಿಂಗಾರು ಬಿತ್ತನೆಗೆ ಅಗತ್ಯವಾದ ಬೀಜ ಹಾಗೂ ರಸಗೊಬ್ಬರವನ್ನು ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಒದಗಿಸಬೇಕು ಮತ್ತು ಬೆಂಬಲ ಬೆಲೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಕೇಂದ್ರದ ಬಳಿ ನಿಯೋಗ ತೆರಳಿ ಬರ ಪರಿಹಾರಕ್ಕೆ ಅಗತ್ಯ ಅನುದಾನ ಪಡೆಯಬೇಕು. ಕೂಡಲೇ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.



