
ಕಲಬುರಗಿ, ಆ.29- ಕಲ್ಯಾಣ ಕರ್ನಾಟಕ ಭಾಗದ ಪೊಲೀಸ್, ಅರಣ್ಯ ಹಾಗೂ ಅಗ್ನಿಶಾಮಕ ದಳದ ಹುದ್ದೆಗಳ ಆಕಾಂಕ್ಷಿ ಅಭ್ಯರ್ಥಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ಜಿಲ್ಲಾಡಳಿತದ ಜಂಟಿ ಆಶ್ರಯದಲ್ಲಿ ಆಗಸ್ಟ್ 30ರಂದು ವಿಶೇಷ ಓಟದ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅಥ್ಲೆಟಿಕ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಮಹೆಬೂಬ್ ಪಟೇಲ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರುಷ ಅಭ್ಯರ್ಥಿಗಳಿಗೆ 1600 ಮೀಟರ್ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 400 ಮೀಟರ್ ಓಟದ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯು ಆಗಸ್ಟ್ 30ರಂದು ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಬೆಳಗ್ಗೆ 6.30ರಿಂದ 11 ಗಂಟೆಯವರೆಗೆ ನಡೆಯಲಿದೆ ಎಂದು ಹೇಳಿದರು.
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಪೊಲೀಸ್, ಅರಣ್ಯ ಹಾಗೂ ಅಗ್ನಿಶಾಮಕ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಭಾಗದ ಅನೇಕ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗುತ್ತಿದ್ದಾರೆ. ಆದರೆ ದೈಹಿಕ ಪರೀಕ್ಷೆಯಲ್ಲಿ ನಿಗದಿತ ಸಮಯದೊಳಗೆ ಓಟ ಪೂರ್ಣಗೊಳಿಸಲು ಸಾಧ್ಯವಾಗದೆ ಅವಕಾಶ ಕಳೆದುಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಯುವಕ-ಯುವತಿಯರಲ್ಲಿ ದೈಹಿಕ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಈ ವಿಶೇಷ ಓಟದ ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಭಾವಂತ ಅಭ್ಯರ್ಥಿಗಳಿಗೆ ಆಕರ್ಷಕ ನಗದು ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು. ಸ್ಪರ್ಧೆಗೆ ನೋಂದಣಿ ಪ್ರಕ್ರಿಯೆ ಉಚಿತವಾಗಿದ್ದು, ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಆಸಕ್ತ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವವರು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಆಗಮಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಆಯೋಜಕರು ತಿಳಿಸಿದ್ದಾರೆ.
ಈ ಸ್ಪರ್ಧೆಯ ಮೂಲಕ ಪೊಲೀಸ್, ಅರಣ್ಯ ಹಾಗೂ ಅಗ್ನಿಶಾಮಕ ಇಲಾಖೆಯಲ್ಲಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಯುವಕ-ಯುವತಿಯರಿಗೆ ದೈಹಿಕ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಿ.ಎನ್. ಬಾಬಳಗಾಂವ್, ಧನರಾಜ್ ಭಾಸಗಿ, ಹುಲಿಗೆಪ್ಪ ಕನಕಗಿರಿ, ನಾಗರಾಜ್, ಅಮೃತ ಅಷ್ಟಗಿ, ತವಡೆ, ದತ್ತಾತ್ರೇಯ ಜೇವರ್ಗಿ, ಸಂಜಯ್ ಬಾಣದ್, ಪ್ರವೀಣ್ ಪುಣೆ, ನಾಗರಾಜ್ ಮಾಳಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.



