
ಕಲಬುರಗಿ, ಆ.27- ಪಿಯು ಹಾಗೂ ಪದವಿ ಕಾಲೇಜುಗಳಲ್ಲಿ ನಡೆಯಲಿರುವ ವಿದ್ಯಾರ್ಥಿ ಸಂಘದ ಚುನಾವಣೆಗಳ ನೆಪದಲ್ಲಿ ವಿದ್ಯಾರ್ಥಿ ಸಂಘಟನೆಗಳನ್ನು ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಖಂಡಿಸಿರುವ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ), ಯಾವುದೇ ವಿದ್ಯಾರ್ಥಿ ಸಂಘಟನೆಗಳು ಕಾಲೇಜು ಆವರಣ ಪ್ರವೇಶಿಸದಂತೆ ತಡೆಯುವ ಸರ್ಕಾರದ ಚಿಂತನೆ ಅಪ್ರಜಾಪ್ರಭುತ್ವವಾದದ್ದು ಎಂದು ಆಕ್ಷೇಪಿಸಿದೆ.
ಈ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್ ದೇವದುರ್ಗ, ಉನ್ನತ ಶಿಕ್ಷಣ ಸೇರಿದಂತೆ ಇಡೀ ಶಿಕ್ಷಣ ವ್ಯವಸ್ಥೆ ಹಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ಇಂತಹ ಸಮಸ್ಯೆಗಳ ವಿರುದ್ಧ ದೇಶಾದ್ಯಂತ ದೊಡ್ಡ ಮಟ್ಟದ ಜನಾಂದೋಲನಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವುದು ಪ್ರಜಾಪ್ರಭುತ್ವದ ಸಹಜ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದ್ದಾರೆ.
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿಯೂ ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಅನೇಕ ಮಹನೀಯರು ವಿದ್ಯಾರ್ಥಿ ದೆಸೆಯಿಂದಲೇ ಹೋರಾಟದ ಹಾದಿಗೆ ಬಂದಿದ್ದರು. ವಿದ್ಯಾರ್ಥಿಗಳು ನೇರವಾಗಿ ರಾಜಕೀಯದಲ್ಲಿ ಭಾಗವಹಿಸಬೇಕು ಎಂಬ ಕರೆಯನ್ನೂ ಹಲವರು ನೀಡಿದ್ದರು. ಆದರೆ ಇದೀಗ ರಾಜ್ಯ ಸರ್ಕಾರವು ರಾಜಕೀಯ ಪಕ್ಷಗಳಿಗೆ ಕಡಿವಾಣ ಹಾಕುವ ನೆಪದಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯದಿಂದ ದೂರವಿಡಲು ಮುಂದಾಗಿರುವುದು ವಿದ್ಯಾರ್ಥಿ ಚಳವಳಿಗಳನ್ನು ಹತ್ತಿಕ್ಕುವ ತಂತ್ರವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಕಾಲೇಜುಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ಪ್ರಮುಖ ವೇದಿಕೆಯಾಗಿ ವಿದ್ಯಾರ್ಥಿ ಸಂಘಟನೆಗಳು ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿ ಸಂಘಟನೆಗಳನ್ನೇ ನಿಷೇಧಿಸಿದರೆ ವಿದ್ಯಾರ್ಥಿಗಳ ಸಂಘಟಿತ ಹೋರಾಟಕ್ಕೆ ಹಿನ್ನಡೆಯಾಗಲಿದೆ. ಯಾವುದೇ ವೈಚಾರಿಕತೆಯನ್ನು ಅಳವಡಿಸಿಕೊಳ್ಳದಂತೆ ವಿದ್ಯಾರ್ಥಿಗಳನ್ನು ತಡೆಯುವುದು, ಸರ್ಕಾರದ ಕ್ರಮಗಳನ್ನು ಪ್ರಶ್ನಿಸದೆ ಒಪ್ಪಿಕೊಳ್ಳುವಂತಹ ಪರಿಸ್ಥಿತಿಯನ್ನು ನಿರ್ಮಿಸುವ ಪ್ರಯತ್ನವಾಗಿದೆ ಎಂದು ವೆಂಕಟೇಶ್ ದೇವದುರ್ಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಧ್ವನಿ ಹತ್ತಿಕ್ಕುವ ಪ್ರಯತ್ನ ಬೇಡ
ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಧ್ವನಿ ಎತ್ತುತ್ತಿದ್ದರೂ ಸುಮ್ಮನಿರಬೇಕು ಎನ್ನುವ ರೀತಿಯಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವುದು ಖಂಡನೀಯ. ಸಮಸ್ಯೆಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಹಾಗೂ ಸಂಘಟಿತರಾಗಿ ಹೋರಾಟ ನಡೆಸಲು ಅವಕಾಶ ಇರಬೇಕು. ವಿದ್ಯಾರ್ಥಿ ಸಂಘಟನೆಗಳನ್ನು ನಿಷೇಧಿಸುವ ಮೂಲಕ ಅವರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಮುಂದಾಗಬಾರದು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರವು ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು ನಿರ್ಧರಿಸಿದಾಗ ಎಐಡಿಎಸ್‌ಒ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತ್ತು. ಆದರೆ ಇದೀಗ ಸರ್ಕಾರ ತನ್ನ ನಿಲುವು ಬದಲಿಸಿ ವಿದ್ಯಾರ್ಥಿ ಸಂಘಟನೆಗಳನ್ನು ಕಾಲೇಜುಗಳಿಂದ ದೂರವಿಡಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಒಂದೆಡೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟಗಳಿಗೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್ ಪಕ್ಷವೇ ತನ್ನ ಆಡಳಿತವಿರುವ ರಾಜ್ಯದಲ್ಲಿ ವಿದ್ಯಾರ್ಥಿ ಹೋರಾಟಗಳನ್ನು ನಿಯಂತ್ರಿಸಲು ಮುಂದಾಗಿರುವುದು ದುರದೃಷ್ಟಕರ ಎಂದು ಅವರು ಟೀಕಿಸಿದ್ದಾರೆ.
ತಕ್ಷಣವೇ ವಿದ್ಯಾರ್ಥಿ ಸಂಘಟನೆಗಳನ್ನು ನಿಷೇಧಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು. ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಗೌರವಿಸಬೇಕು. ಸರ್ಕಾರದ ವಿದ್ಯಾರ್ಥಿ ವಿರೋಧಿ ಕ್ರಮಗಳ ವಿರುದ್ಧ ರಾಜ್ಯಾದ್ಯಂತ ಪ್ರಬಲ ಚಳವಳಿ ಕಟ್ಟಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್ ದೇವದುರ್ಗ ಕರೆ ನೀಡಿದ್ದಾರೆ.



