ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರೋಧಿಸಿ ಸೆ.1ರಿಂದ ರಾಯಚೂರಿನಿಂದ ಬಳ್ಳಾರಿವರೆಗೆ ಬಿಜೆಪಿ ಬೃಹತ್ ಪಾದಯಾತ್ರೆ
ಸೆ.1ರಿಂದ 10ರವರೆಗೆ 200 ಕಿ.ಮೀ. ಪಾದಯಾತ್ರೆ: ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ

ಕಲಬುರಗಿ, ಆ.27: ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಸುಮಾರು 200 ಕಿ.ಮೀ. ಬೃಹತ್ ಪಾದಯಾತ್ರೆ ಹಾಗೂ ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ದಲಿತರಿಗಾಗಿ ಮೀಸಲಿಟ್ಟ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದ ಅವರು, ಮೀಸಲಾತಿ ಕಡಿತ ಸೇರಿದಂತೆ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ದೂರಿದರು. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಆಡಳಿತದ ವಿರುದ್ಧ ಹಲವು ಆರೋಪಗಳನ್ನು ಮಾಡಿದ ಅವರು, ಈ ಎಲ್ಲ ವೈಫಲ್ಯಗಳನ್ನು ಜನರ ಮುಂದಿಟ್ಟು ಹೋರಾಟ ನಡೆಸಲಾಗುವುದು ಎಂದರು.
2023ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ದೂರದೃಷ್ಟಿ ಹೊಂದಿದ್ದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಮುಖ್ಯಮಂತ್ರಿ ಕುರ್ಚಿ ಹಾಗೂ ಸಚಿವ ಸಂಪುಟಕ್ಕಾಗಿ ಕಿತ್ತಾಟದಲ್ಲೇ ನಿರತವಾಗಿದೆ ಎಂದು ಟೀಕಿಸಿದರು.
ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣವನ್ನು ವಾಪಸ್ ಪಡೆಯಲು ಯತ್ನ, ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಚಿತ್ತಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ದಾಳಿ ಹಾಗೂ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಅವರಿಗೆ ಬೆದರಿಕೆ ಸೇರಿದಂತೆ ಹಲವು ಘಟನೆಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿವೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ನಡೆಯಲಿರುವ ಈ ಬೃಹತ್ ಪಾದಯಾತ್ರೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.



