ಕ್ರೀಡೆಶಿಕ್ಷಣ

ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ: ಡಾ. ಪಾಸೋಡಿ

ಕ್ರೀಡೆಯಿಂದ ದೈಹಿಕ ಆರೋಗ್ಯದ ಜತೆಗೆ ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳ ವೃದ್ಧಿ

ಕಲಬುರಗಿ, ಆ.29- ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಂ.ಎಸ್. ಪಾಸೋಡಿ ಹೇಳಿದರು.

ನಗರದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಕ್ರೀಡೆಗಳು ದೈಹಿಕ ಆರೋಗ್ಯವನ್ನು ಕಾಪಾಡುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಓಂಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಿಗೆ ನೀಡುವಷ್ಟೇ ಮಹತ್ವವನ್ನು ಕ್ರೀಡಾ ಚಟುವಟಿಕೆಗಳಿಗೂ ನೀಡಬೇಕು. ನಿಯಮಿತ ಕ್ರೀಡಾಭ್ಯಾಸವು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ನೆಮ್ಮದಿ ಹಾಗೂ ಏಕಾಗ್ರತೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕ ಡಾ. ಆನಂದ್ ಗುತೇದಾರ್ ಮಾತನಾಡಿ, ಭಾರತದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಪ್ರತಿವರ್ಷ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ದೇಶದ ಕ್ರೀಡಾ ಕ್ಷೇತ್ರಕ್ಕೆ ಅವರು ನೀಡಿದ ಅಪೂರ್ವ ಕೊಡುಗೆ ಹಾಗೂ ಸಾಧನೆಯನ್ನು ಸ್ಮರಿಸುವ ದಿನ ಇದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ ಹಾಗೂ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಉತ್ಸಾಹಭರಿತ ವಾತಾವರಣದಲ್ಲಿ ನಡೆಯಿತು.

Related Articles

Leave a Reply

Your email address will not be published. Required fields are marked *

Back to top button