ಜಿಲ್ಲಾಸುದ್ದಿ

ದಲಿತ ಪದವೀಧರೆ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ

ಕಲಬುರಗಿ, ಸೆ.2: ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ವಕೆರಾಣ ಗ್ರಾಮದ ದಲಿತ ಸಮುದಾಯದ 21 ವರ್ಷದ ಪದವೀಧರೆ ಅಶ್ವಿನಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ರಾಜ್ಯ ಸಂಚಾಲಕ ಅರ್ಜುನ್ ಭದ್ರೇ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂತ್ರಸ್ತ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು, ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿನ ಚಳುವಳಿ ಸಮುದಾಯಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಅಶ್ವಿನಿ ಅವರು ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇನ್ನೆರಡು ತಿಂಗಳಲ್ಲಿ ಮದುವೆಯಾಗಬೇಕಿತ್ತು. ಆದರೆ ದುಷ್ಕರ್ಮಿಗಳ ಕೃತ್ಯದಿಂದ ಆಕೆ ಮೃತಪಟ್ಟಿರುವುದು ಕುಟುಂಬಕ್ಕೆ ಆಘಾತ ತಂದಿದೆ. ಪ್ರಕರಣದ ಹಿಂದೆ ಯಾರಾದರೂ ಪ್ರಭಾವಿಗಳ ಕೈವಾಡವಿದ್ದರೆ ಅದನ್ನು ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಸೇರಿದಂತೆ ಘೋರ ಅಪರಾಧಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕಾನೂನು ಜಾರಿಗೊಳಿಸಬೇಕು. ಇಂತಹ ಪ್ರಕರಣಗಳ ಪುನರಾವರ್ತನೆಗೆ ಕಡಿವಾಣ ಹಾಕಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಕ್ರಾಂತಿ, ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಆಜಾದಪುರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರಕರಣದ ಕುರಿತು ಆತಂಕ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತ ಸಮುದಾಯಕ್ಕೆ ಸೇರಿದವರ ಮೇಲಿನ ಹತ್ಯೆ ಪ್ರಕರಣಗಳು ನಡೆದಿರುವುದನ್ನು ಉಲ್ಲೇಖಿಸಿ, ಪೊಲೀಸ್ ಇಲಾಖೆ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು. ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ತ್ವರಿತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Related Articles

Leave a Reply

Your email address will not be published. Required fields are marked *

Back to top button