ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಿಎಂ ಸೂಚನೆ

ಕಲಬುರಗಿ, ಸೆ.9: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ, ಇಲಾಖೆಯ ಚಟುವಟಿಕೆಗಳು ಹಾಗೂ ಸಮುದಾಯಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಜಾರಿಯಲ್ಲಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಸರ್ಕಾರದ ಯೋಜನೆಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದು ಹಾಗೂ ಸಮುದಾಯದ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ವಿವಿಧ ಯೋಜನೆಗಳ ಪ್ರಗತಿ ಹಾಗೂ ಅವುಗಳ ಅನುಷ್ಠಾನದಲ್ಲಿರುವ ಸಮಸ್ಯೆಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಜಮೀರ್ ಅಹಮದ್ ಖಾನ್, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಮಾಜಿ ಸಚಿವ ರಹೀಂ ಖಾನ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಹಾಫಿಜ್ ಡಾ. ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ ಸಾಹೇಬ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಲ್ತಾಫ್ ಖಾನ್, ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ. ಜಾಫರ್, ಹಜ್ ಸಮಿತಿ ಅಧ್ಯಕ್ಷ ಜುಲ್ಫಿಕಾರ್ ಅಹಮದ್ ಖಾನ್ ಟಿಪ್ಪು ಸೇರಿದಂತೆ ಹಲವರು ಭಾಗವಹಿಸಿದ್ದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಆತಿಕ್, ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.



