ಕ್ರೀಡಾಕೂಟ: ಯರನಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಬೀದರ್, ಸೆ.9: ತಾಲ್ಲೂಕಿನ ಯರನಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು 2026ನೇ ಸಾಲಿನ ಜನವಾಡ ಹೋಬಳಿ ಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ನಗರದ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಮಂಗಳವಾರ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದ ಖೋ-ಖೋ ಹಾಗೂ 4×100 ಮೀಟರ್ ರಿಲೇ ಸ್ಪರ್ಧೆಗಳಲ್ಲಿ ಯರನಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರ ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡಿವೆ.
100 ಮೀಟರ್ ಹಾಗೂ 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ಶಾಲೆಯ ಅಂಕಿತಾ ಪ್ರಥಮ ಸ್ಥಾನ ಗಳಿಸಿದ್ದಾರೆ. 100 ಮೀಟರ್ ಓಟದಲ್ಲಿ ಸುಜಾತಾ ಚಂದ್ರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಚಕ್ರ ಎಸೆತ ಸ್ಪರ್ಧೆಯಲ್ಲಿ ಹುಲಪ್ಪ ಶಿವಕುಮಾರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಹೋಬಳಿ ಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ (ಗ್ರೇಡ್–1) ಸಂಜೀವ್ ಬಿ. ಸೂರ್ಯವಂಶಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸಲಿಂಖಾನ್, ಸದಸ್ಯರು, ಮುಖ್ಯಶಿಕ್ಷಕ ಮಚೇಂದ್ರ ಗಾಯಕ್ವಾಡ್, ತಂಡದ ವ್ಯವಸ್ಥಾಪಕರಾದ ರಮೇಶ್, ಹೇಮಲತಾ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.



