ನಾಳಿನ ಕಪ್ಪು ಬಾವುಟ ಪ್ರತಿಭಟನೆ ಕೈಬಿಡಿ: ತಳವಾರರಿಗೆ ಕಮಕನೂರ್ ಕೋರಿಕೆ

ಕಲಬುರ್ಗಿ, ಸೆ.೧೫- ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರ ಕೊಡುವ ಕುರಿತಂತೆ ರಾಜ್ಯ ಸರ್ಕಾರವು ಈಗಾಗಲೇ ಕ್ರಮಗಳನ್ನು ಕೈಗೊಂಡಿದೆ. ಜೊತೆಗೆ ಬೇಡಿಕೆಗಳ ಕುರಿತು ಸಹಾನುಭೂತಿಯಿಂದ ಪರಿಹರಿಸಲಾಗುತ್ತದೆ. ಆದ್ದರಿಂದ ಸೆಪ್ಟೆಂಬರ್ ೧೭ರಂದು ನಗರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಕಪ್ಪು ಬಾವುಟ ತೋರಿಸುವ ಪ್ರತಿಭಟನೆಯನ್ನು ಕೂಡಲೇ ತಳವಾರ್ ಸಮಾಜದವರು ಕೈಬಿಡಬೇಕು ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಹಾಗೂ ಕೋಲಿ ಸಮಾಜದ ನೇತಾರ ತಿಪ್ಪಣ್ಣಪ್ಪ ಕಮಕನೂರ್ ಅವರು ಮನವಿ ಮಾಡಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರವು ತಳವಾರ್ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರ ಕೊಡಲು ಕ್ರಮ ಕೈಗೊಂಡಿದೆ. ಅಫಜಲಪುರ ಮತ್ತು ಜೇವರ್ಗಿಯಲ್ಲಿ ಸ್ವಲ್ಪ ಸಮಸ್ಯೆ ಆಗಿತ್ತು. ಅದನ್ನೂ ಸಹ ನಿವಾರಿಸಲಾಗಿದೆ ಎಂದರು.
ತಳವಾರ್ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರ ಕೊಡುವ ಕುರಿತು ಗ್ರೇಡ್-೨ ತಹಸಿಲ್ದಾರರ ಸಭೆ ಮಾಡಲಾಗಿದ್ದು, ಮೂಲ ತಳವಾರರಿಗೆ ಎಸ್‌ಟಿ ಪ್ರಮಾಣಪತ್ರ ನೀಡುವಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಸೂಚಿಸಿದ್ದಾರೆ. ಅರ್ಹರಿಗೆ ಯಾವುದೇ ತೊಂದರೆಯಾಗದAತೆ ಎಸ್‌ಟಿ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಅವರು, ಜಿಲ್ಲೆಯಲ್ಲಿ ಸುಮಾರು ೩೦೦ ಅರ್ಜಿಗಳು ಮಾತ್ರ ಬಾಕಿ ಇವೆ. ಅವುಗಳಲ್ಲಿ ಅಫಜಲಪುರ ಮತ್ತು ಜೇವರ್ಗಿ ತಾಲ್ಲೂಕುಗಳಲ್ಲಿ ಹೆಚ್ಚಿನ ಸಮಸ್ಯೆಗಳಿದ್ದು, ಅವುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಪ್ರಭಾವಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ನೀರಾವರಿ ಮತ್ತು ವಿಜ್ಞಾನ, ತಂತ್ರಜ್ಞಾನ ಸಚಿವ ಡಾ. ಅಜಯಸಿಂಗ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಇದ್ದಾರೆ. ಅವರಾರು ತಳವಾರ್ ಸಮಾಜಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧವಾಗಿರುವಾಗ ಪದೇ ಪದೇ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ಸರಿಯಲ್ಲ. ಕಪ್ಪು ಬಾವುಟ ತೋರಿಸುವುದರಿಂದ ಸಮಾಜಕ್ಕೆ ಆಗುವ ಕೆಲಸಗಳೂ ಸಹ ಆಗಲಾರವು. ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಕೋರಿದರು.
ಈಗಾಗಲೇ ಸಮಾಜದ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಚೌಡದಾನಪುರ ಅಭಿವೃದ್ಧಿಗಾಗಿ ನೂರು ಕೋಟಿ ರೂ.ಗಳ ಬೇಡಿಕೆ ಇದೆ. ನಗರದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ಸ್ಥಾಪನೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಬೆಂಗಳೂರಿನ ವಿಧಾನಸೌಧದ ಮುಂದೆಯೂ ಸಹ ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ಸ್ಥಾಪಿಸಲಾಗುವುದು. ಕೋಲಿ ಸಮಾಜದ ರ‍್ಯಾಯ ಪದಗಳನ್ನು ಎಸ್‌ಟಿಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರವು ಶಿಫಾರಸ್ಸು ಮಾಡಲಿದೆ ಎಂದು ಅವರು ಹೇಳಿದರು.
ಕೋಲಿ ಮತ್ತು ತಳವಾರ್ ಸಮಾಜದ ಎಲ್ಲ ಬೇಡಿಕೆಗಳಿಗೆ ರಾಜ್ಯ ಸರ್ಕಾರವು ಸಕಾರಾತ್ಮವಾಗಿ ಸ್ಪಂದಿಸುತ್ತಿದೆ. ಇಂತಹ ಸಂದರ್ಭದಲ್ಲಿ ಹೋರಾಟ ಮಾಡುವ ಮೂಲಕ ಆಗುವ ಕೆಲಸಗಳಿಗೆ ಅಡ್ಡಿಪಡಿಸಬಾರದು. ಆದ್ದರಿಂದ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ ೧೭ರಂದು ಪ್ರತಿಭಟನೆ ಮಾಡಬೇಡಿ. ಮುಖ್ಯಮಂತ್ರಿ ಹಾಗೂ ಸಂಬAಧಪಟ್ಟ ಸಚಿವರೊಂದಿಗೆ ಸಮಾಲೋಚನೆ ಮಾಡುವ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳೋಣ ಎಂದು ಅವರು ತಿಳಿಸಿದರು.



