ಸರ್ಕಾರದಿಂದಲೇ ಅಧಿಕೃತವಾಗಿ ಜಯಂತಿ ಆಚರಿಸಲು ಪಾಂಡುರಂಗ ದೇಶಮುಖ್ ಒತ್ತಾಯ

ಕಲಬುರಗಿ, ಸೆ.17: ಜಗದ್ಗುರು ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದಲೇ ಅಧಿಕೃತವಾಗಿ ಆಚರಿಸಬೇಕು ಎಂದು ಜಿಲ್ಲಾ ಬ್ರಾಹ್ಮಣ ಸಮಾಜದ ಅಧ್ಯಕ್ಷ ಪಾಂಡುರಂಗ ದೇಶಮುಖ್ ಒತ್ತಾಯಿಸಿದ್ದಾರೆ.ಈ ಕುರಿತು ರಾಜ್ಯದ ಗೃಹ ಹಾಗೂ ಐಟಿಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿ, ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದಿಂದಲೇ ಅಧಿಕೃತವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.ಶ್ರೀಮಧ್ವಾಚಾರ್ಯರ ತತ್ವಜ್ಞಾನ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೊಡುಗೆ ಅಪಾರವಾಗಿದೆ. ಅವರ ವಿಚಾರಧಾರೆ ಮತ್ತು ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಜಯಂತಿ ಆಚರಣೆ ನಡೆಸುವುದು ಸಮಾಜದ ಪ್ರಮುಖ ಬೇಡಿಕೆಯಾಗಿದೆ ಎಂದು ಪಾಂಡುರಂಗ ದೇಶಮುಖ್ ತಿಳಿಸಿದ್ದಾರೆ.ಜಗದ್ಗುರು ಮಧ್ವಾಚಾರ್ಯರ ತತ್ವ, ಆದರ್ಶ ಹಾಗೂ ಕೊಡುಗೆಗಳನ್ನು ಜನರಿಗೆ ಪರಿಚಯಿಸುವ ಮೂಲಕ ಅವರ ಸಂದೇಶವನ್ನು ವ್ಯಾಪಕವಾಗಿ ತಲುಪಿಸಲು ಸರ್ಕಾರ ಮುಂದಾಗಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಪ್ರಶಾಂತ್ ಕೊರಳ್ಳಿ, ಘಂಟಿ ರಾಮಾಚಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



