ಜಿಲ್ಲಾಸುದ್ದಿ

ಕಲ್ಯಾಣ ಕರ್ನಾಟಕದ ಶಿಕ್ಷಣ ಸಮಸ್ಯೆ, 371(ಜೆ) ಅನುಷ್ಠಾನ ಹಾಗೂ ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣಪತ್ರಕ್ಕೆ ಆಗ್ರಹ

ಕಲಬುರಗಿ, ಸೆ.17: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಕಲಬುರಗಿಗೆ ಆಗಮಿಸಿದ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲು ಮುಂದಾದ ಎಸ್‌ಎಫ್‌ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮುಖ್ಯಮಂತ್ರಿ ಆಗಮಿಸುವ ಮುನ್ನ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಸರ್ಕಾರಿ ಶಾಲಾ-ಕಾಲೇಜುಗಳ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಸಮಸ್ಯೆಗಳನ್ನು ರಾಜ್ಯ ಸರ್ಕಾರ ತಕ್ಷಣ ಪರಿಹರಿಸಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯ ಸರ್ಕಾರದ ಅಂಕಿ-ಅಂಶಗಳ ಪ್ರಕಾರ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಟ್ಟು 8,706 ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲಗೊಂಡಿವೆ. ಇದರಲ್ಲಿ 7,419 ಪ್ರಾಥಮಿಕ ಹಾಗೂ 1,287 ಪ್ರೌಢಶಾಲಾ ಕೊಠಡಿಗಳಿವೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಶಿಥಿಲ ಕಟ್ಟಡಗಳಲ್ಲೇ ತರಗತಿಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸುರಕ್ಷತೆ ಕುರಿತು ಆತಂಕ ಉಂಟಾಗಿದೆ ಎಂದು ಹೇಳಿದರು.

ಜಿಲ್ಲಾವಾರು ಅಂಕಿ-ಅಂಶಗಳ ಪ್ರಕಾರ ಕಲಬುರಗಿಯಲ್ಲಿ 2,334, ಯಾದಗಿರಿಯಲ್ಲಿ 1,451, ಬೀದರ್‌ನಲ್ಲಿ 1,315, ವಿಜಯನಗರದಲ್ಲಿ 1,075, ಕೊಪ್ಪಳದಲ್ಲಿ 1,036, ಬಳ್ಳಾರಿಯಲ್ಲಿ 756 ಹಾಗೂ ರಾಯಚೂರಿನಲ್ಲಿ 739 ಶಾಲಾ ಕೊಠಡಿಗಳು ಶಿಥಿಲಗೊಂಡಿವೆ ಎಂದು ಅವರು ಹೇಳಿದರು.

ಎಸ್‌ಎಫ್‌ಐ ಕೇಂದ್ರ ಸಮಿತಿ ಸದಸ್ಯೆ ಸುಜಾತಾ ವೈ. ಮಾತನಾಡಿ, ಸಂವಿಧಾನದ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ನೀಡಿರುವ ವಿಶೇಷ ಸ್ಥಾನಮಾನದ ಉದ್ದೇಶ ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಅವಕಾಶ ಕಲ್ಪಿಸುವುದಾಗಿದೆ. ಆದರೆ ಅನುಷ್ಠಾನದಲ್ಲಿನ ಹಲವು ಸಮಸ್ಯೆಗಳಿಂದ ಸ್ಥಳೀಯ ವಿದ್ಯಾರ್ಥಿಗಳು ತಮ್ಮ ಹಕ್ಕಿನ ಅವಕಾಶಗಳನ್ನು ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಶೈಕ್ಷಣಿಕ ಪ್ರವೇಶ, ಸರ್ಕಾರಿ ಉದ್ಯೋಗ ನೇಮಕಾತಿ ಮತ್ತು ಮೀಸಲಾತಿ ಪ್ರಕ್ರಿಯೆಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಸ್ಪಷ್ಟ ಹಾಗೂ ಪಾರದರ್ಶಕ ಕ್ರಮ ಕೈಗೊಳ್ಳಬೇಕು. 371(ಜೆ) ಪ್ರಮಾಣಪತ್ರ, ಸ್ಥಳೀಯ ಅಭ್ಯರ್ಥಿಗಳ ಅರ್ಹತೆ ಹಾಗೂ ಮೀಸಲಾತಿ ಜಾರಿಯಲ್ಲಿನ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರು ಹಾಗೂ ಉಪನ್ಯಾಸಕರ ಖಾಲಿ ಹುದ್ದೆಗಳು, ಹಾಸ್ಟೆಲ್‌ಗಳ ಕೊರತೆ, ವಿದ್ಯಾರ್ಥಿವೇತನ ವಿಳಂಬ ಮತ್ತು ಸಾರಿಗೆ ಸಮಸ್ಯೆಗಳು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುತ್ತಿವೆ ಎಂದು ಎಸ್‌ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಸರ್ವೇಶ್ ಪಿ. ಮಾವಿನಕರ್ ಹೇಳಿದರು.

ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಸರ್ಕಾರಿ ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಅಗತ್ಯವಿರುವ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವುದರ ಜತೆಗೆ ಗ್ರಾಮೀಣ ಪ್ರದೇಶಗಳಿಗೆ ಪ್ರತ್ಯೇಕ ಬಸ್ ಸೌಲಭ್ಯ ಒದಗಿಸಬೇಕು ಎಂದು ರಾಜ್ಯ ಸಮಿತಿ ಸದಸ್ಯ ಇಮಾಮ್‌ಸಾಬ್ ನದಾಫ್ ಆಗ್ರಹಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಕೆಕೆಆರ್‌ಡಿಬಿಗೆ ಪ್ರತಿವರ್ಷ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ. 2026-27ನೇ ಸಾಲಿಗೆ ₹5,000 ಕೋಟಿ ಮೀಸಲಿಟ್ಟಿದ್ದರೂ ಅದರ ಪ್ರಯೋಜನ ಶಿಕ್ಷಣ ಕ್ಷೇತ್ರಕ್ಕೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೆಕೆಆರ್‌ಡಿಬಿ ಅನುದಾನದಲ್ಲಿ ಎಷ್ಟು ಹಣ ಬಿಡುಗಡೆಯಾಗಿದೆ, ಎಷ್ಟು ಖರ್ಚಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ಎಷ್ಟು ಪ್ರಯೋಜನ ತಲುಪಿದೆ ಎಂಬುದನ್ನು ಜಿಲ್ಲಾವಾರು ಸಾರ್ವಜನಿಕಗೊಳಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು ಎಂದು ಎಸ್‌ಎಫ್‌ಐ ಎಚ್ಚರಿಕೆ ನೀಡಿತು.

ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣಪತ್ರಕ್ಕೆ ಆಗ್ರಹ

ಇದೇ ವೇಳೆ ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣಪತ್ರ ನೀಡಬೇಕು ಎಂದು ಆಗ್ರಹಿಸಿ ಜೆಡಿಎಸ್ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಶಿವಕುಮಾರ್ ನಾಟೀಕಾರ್ ಹಾಗೂ ಬೆಂಬಲಿಗರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದರು.

ಮುಖ್ಯಮಂತ್ರಿ ಗಾಣಗಾಪುರದ ಸುಕ್ಷೇತ್ರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಅಫಜಲಪುರ ತಾಲ್ಲೂಕಿನ ಚೌಡಾಪುರ ಕ್ರಾಸ್ ಬಳಿಯ ಸೇತುವೆ ಸಮೀಪ ನಾಟೀಕಾರ್ ಹಾಗೂ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ನಿಂಬರ್ಗಾ ಪೊಲೀಸ್ ಠಾಣೆಗೆ ಕರೆದೊಯ್ದರು.

ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿರುವುದರಿಂದ ಚೌಡಾಪುರ ಕ್ರಾಸ್ ಹಾಗೂ ನಿಂಬರ್ಗಾ ಪೊಲೀಸ್ ಠಾಣೆ ಸುತ್ತಮುತ್ತ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Related Articles

Leave a Reply

Your email address will not be published. Required fields are marked *

Back to top button