ಕಲಬುರಗಿಯಲ್ಲಿ ನಾಳೆಯಿಂದ ವಿದ್ಯಾರ್ಥಿಗಳಿಗೆ ಐತಿಹಾಸಿಕ ಶೈಕ್ಷಣಿಕ ಪ್ರವಾಸ

ಕಲಬುರಗಿ, ಸೆ.19: ಕರ್ನಾಟಕ ಟೂರಿಸಂ ಫೋರಂ, ಕಲ್ಯಾಣ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಹಾಗೂ ಇನ್ಟ್ಯಾಕ್ ಕಲಬುರಗಿ ಚಾಪ್ಟರ್ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನ ಮತ್ತು ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ನಾಲ್ಕು ದಿನಗಳ ಐತಿಹಾಸಿಕ ಶೈಕ್ಷಣಿಕ ಪ್ರವಾಸ ಆಯೋಜಿಸಲಾಗಿದೆ ಎಂದು ಇನ್ಟ್ಯಾಕ್ನ ಡಾ. ಶಂಭುಲಿಂಗ ವಾಣಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 21ರಂದು ಬೆಳಿಗ್ಗೆ 9 ಗಂಟೆಗೆ ಬುದ್ಧವಿಹಾರದಲ್ಲಿ ಜಿಲ್ಲಾಧಿಕಾರಿ ಪ್ರವಾಸಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ನಿರಂತರ ನಾಲ್ಕು ದಿನಗಳ ಕಾಲ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ನಡೆಯಲಿದೆ ಎಂದರು.
ಕಲ್ಯಾಣ ಕರ್ನಾಟಕದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಹಾಗೂ ಈ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ಉತ್ತೇಜನ ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಹಲವು ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವದ ಸ್ಥಳಗಳಿದ್ದು, ಅವುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಮೂಲಕ ಇತಿಹಾಸ ಮತ್ತು ಪರಂಪರೆಯ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ಕಲಬುರಗಿ ಕೋಟೆ, ಬುದ್ಧವಿಹಾರ, ಶರಣಬಸವೇಶ್ವರ ದೇವಸ್ಥಾನ, ಬಂದೇನವಾಜ್ ದರ್ಗಾ, ಸನ್ನತಿ ಚಂದ್ರಲಾಂಬಿಕಾ ದೇವಿ ದೇವಸ್ಥಾನ, ಚಂದ್ರಂಪಳ್ಳಿ ಡ್ಯಾಂ, ಗಾಣಗಾಪುರ ಸೇರಿದಂತೆ ವಿವಿಧ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಸ್ಥಳಗಳನ್ನು ಪ್ರವಾಸದಲ್ಲಿ ಪರಿಚಯಿಸಲಾಗುವುದು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಬೇಟಿ ಮೊಥೇರಾ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ನಗರದ 15ರಿಂದ 20 ಶಾಲಾ-ಕಾಲೇಜುಗಳಿಂದ ಸುಮಾರು 1,500 ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸದಲ್ಲಿ ಭಾಗವಹಿಸುವಂತೆ ಯೋಜಿಸಲಾಗಿದೆ. ಜಿಲ್ಲೆಯ ಇತಿಹಾಸ, ಸಂಸ್ಕೃತಿ ಹಾಗೂ ಪ್ರವಾಸಿ ತಾಣಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಉದ್ದೇಶ ಹೊಂದಿರುವ ಈ ಕಾರ್ಯಕ್ರಮ ಮಹತ್ವದ್ದಾಗಿದೆ ಎಂದರು.
ಬುದ್ಧವಿಹಾರ, ಬಂದೇನವಾಜ್ ದರ್ಗಾ, ಹಫ್ತ್ ಗುಂಬಜ್, ಸೇಂಟ್ ಮೇರಿ ಚರ್ಚ್, ಶರಣಬಸವೇಶ್ವರ ದೇವಸ್ಥಾನ, ಕಲಬುರಗಿ ಕೋಟೆ, ಜಿಲ್ಲಾ ವಿಜ್ಞಾನ ಕೇಂದ್ರ ಹಾಗೂ ಅಪ್ಪನ ಕೆರೆಯ ಉದ್ಯಾನವನ ಸೇರಿದಂತೆ ವಿವಿಧ ಸ್ಥಳಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಲಿದ್ದಾರೆ.
ನಾಲ್ಕು ದಿನಗಳ ಪ್ರವಾಸದ ಅವಧಿಯಲ್ಲಿ ಪ್ರತಿದಿನ ಮಧ್ಯಾಹ್ನ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿಜೇತರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಗುವುದು. ಪ್ರತಿದಿನ ರಸಪ್ರಶ್ನೆಯ ನಂತರ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ವಿಜ್ಞಾನ ಕೇಂದ್ರದ ಎಂಟ್ರಿ ಟಿಕೆಟ್ಗಳನ್ನೂ ಒದಗಿಸಲಾಗುವುದು. ವಿದ್ಯಾರ್ಥಿಗಳಿಗೆ ಸ್ಥಳಗಳ ಕುರಿತು ಮಾಹಿತಿ ನೀಡಲು ಗೈಡ್ಗಳು ಹಾಗೂ ಸ್ವಯಂಸೇವಕರ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸೆ.25ರಂದು ಚಿತ್ರಕಲಾ ಸ್ಪರ್ಧೆ
ಸೆಪ್ಟೆಂಬರ್ 25ರಂದು ರೋಟರಿ ಕ್ಲಬ್ನ ಡಾ. ಜ್ಯೋತಿ ತೆಗನೂರು ಅವರ ಅಧ್ಯಕ್ಷತೆಯಲ್ಲಿ ಎಸ್.ಎಸ್. ತೆಗನೂರು ಪಿಯು ಹಾಗೂ ಪದವಿ ಕಾಲೇಜಿನಲ್ಲಿ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸ್ಪರ್ಧೆ ನಡೆಯಲಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತರು ಡಾ. ಜ್ಯೋತಿ ತೆಗನೂರು ಅವರನ್ನು ಸಂಪರ್ಕಿಸಬಹುದು ಎಂದು ಆಯೋಜಕರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶ್ರೀಕಾಂತ್ ಲಾಹೋಟಿ, ಸಂಜೀವ್ ರಾಯ್ಕರ್, ಚಂದು ಶೆಟ್ಟಿ, ಸಂಧ್ಯಾರಾಜ್ ಸ್ಯಾಮುವೆಲ್, ಶರಣು ಪಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು.



