ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಕಾಂಗ್ರೆಸ್ ಪ್ರತಿಭಟನೆ: ಸಂಸದ ರಾಧಾಕೃಷ್ಣ ದೊಡ್ಡಮನಿ ಭಾಗಿ

ಕಲಬುರಗಿ, ಅ. 6: ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪಕ್ಷ ನವದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ಭಾಗವಹಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಆ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಹಾಗೂ ಚುನಾವಣಾ ಆಯೋಗದ ಸಹಭಾಗಿತ್ವದಲ್ಲಿ ಚುನಾವಣಾ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ಅದರ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಸದರು ಪ್ರತಿಭಟನಾಕಾರರೊಂದಿಗೆ ಧ್ವನಿಗೂಡಿಸಿ, ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬ ಘೋಷಣೆಗಳನ್ನು ಕೂಗಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೀನದಲಿತರು, ಬಡವರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಮತಗಳನ್ನು ಪಟ್ಟಿಯಿಂದ ತೆಗೆದುಹಾಕುವ ಮೂಲಕ ಸಂವಿಧಾನಬದ್ಧವಾಗಿ ದೊರೆತಿರುವ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಇಂತಹ ಕ್ರಮಗಳನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತಿದ್ದು, ಚುನಾವಣಾ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ದೇಶದಾದ್ಯಂತ ಹೋರಾಟ ಮುಂದುವರಿಸಲಾಗುವುದು ಎಂದು ಪ್ರತಿಭಟನೆಯಲ್ಲಿ ತಿಳಿಸಲಾಯಿತು.
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕಾಂಗ್ರೆಸ್ ಪಕ್ಷ ಸದಾ ಬೀದಿಗಿಳಿದು ಹೋರಾಟ ನಡೆಸುತ್ತಾ ಬಂದಿದೆ. ಇದೀಗ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಸಂಸದ ರಾಧಾಕೃಷ್ಣ ದೊಡ್ಡಮನಿ ತಿಳಿಸಿದರು.



