ಜಿಲ್ಲಾಸುದ್ದಿ

ನರಿಬೋಳ್–ಚಾಮನೂರು ಸೇತುವೆಗೆ ಟೆಂಡರ್ ಕರೆಯಲು ಆಗ್ರಹ: ಅಹೋರಾತ್ರಿ ಧರಣಿ

ಕಲಬುರಗಿ, ಅ.6: ಜಿಲ್ಲೆಯ ನರಿಬೋಳ್–ಚಾಮನೂರು ಸೇತುವೆ ಕಾಮಗಾರಿಗೆ ಕೂಡಲೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಲೋಕೋಪಯೋಗಿ ಇಲಾಖೆಯ ಕಚೇರಿ ಎದುರು ಅನಿರ್ದಿಷ್ಟಾವಧಿ ಹಗಲು–ರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ ನರಿಬೋಳ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ, ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ಹುಚ್ಚೇಶ್ವರ ವಠಾರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ವರ್ಷಗಳಾದರೂ ಪೂರ್ಣಗೊಳ್ಳದ ಕಾಮಗಾರಿ

ನರಿಬೋಳ್–ಚಾಮನೂರು ಸೇತುವೆ ಕಾಮಗಾರಿ 2017ರಲ್ಲಿ ಆರಂಭವಾಗಿದ್ದು, ಒಪ್ಪಂದದ ಪ್ರಕಾರ ಒಂದೂವರೆ ವರ್ಷದೊಳಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಹಲವು ವರ್ಷಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರ ವ್ಯಾಪ್ತಿಗೆ ಒಳಪಡುವ ಸೇತುವೆ ಕಾಮಗಾರಿಯ ಸ್ಥಿತಿಯೇ ಹೀಗಾದರೆ ಕ್ಷೇತ್ರದ ಅಭಿವೃದ್ಧಿ ನಿರೀಕ್ಷಿಸುವುದು ಹೇಗೆ ಎಂದು ಪ್ರಶ್ನಿಸಿದರು.

ಹಿಂದಿನ ಕೆಎಂವಿ ಕಂಪನಿಯ ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿದ್ದಲ್ಲದೆ, ಬಜೆಟ್ ಮೊತ್ತವನ್ನೂ ಹೆಚ್ಚಿಸಿಕೊಂಡು ಹೋಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸೇತುವೆ ಕಾಮಗಾರಿ ಪೂರ್ಣಗೊಳಿಸದೆ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದೋಣಿ ಸಂಗ್ರಹದ ಆದಾಯದ ಬಗ್ಗೆಯೂ ತನಿಖೆಗೆ ಆಗ್ರಹ

ನರಿಬೋಳ್–ಚಾಮನೂರು ನದಿಯಲ್ಲಿ ನಡೆಯುತ್ತಿರುವ ದೋಣಿ ಸಂಚಾರದಿಂದ ದಿನಕ್ಕೆ ಕನಿಷ್ಠ ಹತ್ತು ಸಾವಿರ ರೂಪಾಯಿ ಸಂಗ್ರಹವಾಗುತ್ತಿದೆ. ಅಮಾವಾಸ್ಯೆ, ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳಲ್ಲಿ ಲೆಕ್ಕವಿಲ್ಲದಷ್ಟು ಆದಾಯ ಬರುತ್ತಿದೆ. ಆದರೆ ಈ ಆದಾಯದ ಒಂದು ಭಾಗ ಲೋಕೋಪಯೋಗಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜೇಬಿಗೆ ಹೋಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ದೋಣಿ ಸಂಚಾರದಿಂದ ಸಂಗ್ರಹವಾಗುತ್ತಿರುವ ಹಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಆದಾಯದ ಸಂಪೂರ್ಣ ವಿವರವನ್ನು ಸಾರ್ವಜನಿಕಗೊಳಿಸಬೇಕು ಎಂದು ಒತ್ತಾಯಿಸಿದರು.

ಭೂಮಿ ಹಸ್ತಾಂತರ ವಿಳಂಬಕ್ಕೂ ಆಕ್ರೋಶ

ಚಾಮನೂರು ಭಾಗದ ರೈತರು ಸೇತುವೆ ನಿರ್ಮಾಣಕ್ಕೆ ಅಗತ್ಯವಿರುವ ಜಮೀನನ್ನು ನೇರವಾಗಿ ಮಾರಾಟ ಮಾಡಿ ಒಂದು ವರ್ಷ ಹಿಂದೆಯೇ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಆದರೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜಮೀನಿನ ದಾಖಲೆ ಪ್ರಕ್ರಿಯೆ ಪೂರ್ಣಗೊಳಿಸದೆ ವಿಳಂಬ ಮಾಡುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಹೇಳಿದರು.

ಕೆಲವು ವರ್ಷಗಳಿಂದ ಕಾಮಗಾರಿ ನೆನೆಗುದಿಗೆ ಬಿದ್ದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೂಡಲೇ ಟೆಂಡರ್ ಕರೆದು ಸೇತುವೆ ಕಾಮಗಾರಿಯನ್ನು ಆರಂಭಿಸಬೇಕು. ವಿಳಂಬಕ್ಕೆ ಕಾರಣರಾದ ಲೋಕೋಪಯೋಗಿ ಇಲಾಖೆಯ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಗುರಣ್ಣ ಹೈನಾಪುರ, ಸುಭಾಷ್ ಕವಲ್ದಾರ್, ಸಮೀನಾಬೇಗಂ, ಪ್ರಶಾಂತ ಸಿರೂರ್, ವೀರೇಶ ಬಿಂಗೆ, ವಿನೋದ ಶಹಾಪುರ, ಪ್ರದೀಪ ಪೂಜಾರಿ, ಶರಣು ಸಿರೂರ್, ಸಾಯಿನಾಥ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button