ತಾಯಿ-ಮಕ್ಕಳ ಆಸ್ಪತ್ರೆಗೆ ಸಚಿವ ಡಾ. ಅಜಯ್ ಸಿಂಗ್ ಭೇಟಿ

ಜೇವರ್ಗಿ, ಅ. 10: ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಅವರು ಅನಿರೀಕ್ಷಿತ ಭೇಟಿ ನೀಡಿ, ಆಸ್ಪತ್ರೆಯ ವೈದ್ಯಕೀಯ ಸೌಲಭ್ಯಗಳು, ಚಿಕಿತ್ಸಾ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿದರು.
ಮಹಿಳೆಯರು ಮತ್ತು ಮಕ್ಕಳಿಗೆ ಗುಣಮಟ್ಟದ, ಸಮಯೋಚಿತ ಹಾಗೂ ಜನಸ್ನೇಹಿ ಆರೋಗ್ಯ ಸೇವೆಗಳು ದೊರೆಯುವಂತೆ ಅಗತ್ಯ ಸೌಲಭ್ಯಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಅವರು ವೈದ್ಯರೊಂದಿಗೆ ಚರ್ಚಿಸಿದರು. ಆಸ್ಪತ್ರೆಯ ಸ್ವಚ್ಛತೆ, ಮೂಲಸೌಕರ್ಯ, ಔಷಧಗಳ ಲಭ್ಯತೆ, ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳ ಆರೈಕೆ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದು, ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಕ್ಷೇತ್ರದಲ್ಲಿ ಆರೋಗ್ಯ ಸೇವೆಗಳನ್ನು ಇನ್ನಷ್ಟು ಸುಧಾರಿಸಿ, ಪ್ರತಿಯೊಬ್ಬ ಮಹಿಳೆ ಮತ್ತು ಮಗುವಿಗೂ ಸುರಕ್ಷಿತ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಜೇವರ್ಗಿ ಹಾಗೂ ಯಡ್ರಾಮಿ ಭಾಗಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಸೌಲಭ್ಯಗಳ ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗುವುದು ಎಂದು ಸಚಿವ ಡಾ. ಅಜಯ್ ಸಿಂಗ್ ತಿಳಿಸಿದರು.
ತಳವಾರ ಸಮಾಜದ ಮುಖಂಡರೊಂದಿಗೆ ಚರ್ಚೆ
ಇದೇ ಸಂದರ್ಭದಲ್ಲಿ ತಳವಾರ ಸಮಾಜದ ಪರಿಶಿಷ್ಟ ಪಂಗಡದ ಮಾನ್ಯತೆ ಹಾಗೂ ಸಮಾಜಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಸಚಿವ ಡಾ. ಅಜಯ್ ಸಿಂಗ್ ಅವರೊಂದಿಗೆ ಸಮಾಜದ ಮುಖಂಡರು ಸುಮಾರು 40 ನಿಮಿಷಗಳ ಕಾಲ ಅರ್ಥಪೂರ್ಣ ಚರ್ಚೆ ನಡೆಸಿದರು.
ಪರಿಶಿಷ್ಟ ಪಂಗಡದ ಮಾನ್ಯತೆ ವಿಚಾರದಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಿ, ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಮುಖಂಡರು ಸಚಿವರಲ್ಲಿ ಮನವಿ ಮಾಡಿದರು.
ಚರ್ಚೆಯ ವೇಳೆ ಪರಿಶಿಷ್ಟ ಪಂಗಡದ ಮಾನ್ಯತೆ ವಿಚಾರದಲ್ಲಿನ ಗೊಂದಲ, ಸಮಾಜ ಎದುರಿಸುತ್ತಿರುವ ಸಮಸ್ಯೆಗಳು, ನ್ಯಾಯಯುತ ಬೇಡಿಕೆಗಳು ಹಾಗೂ ಮುಂದಿನ ಕ್ರಮಗಳ ಕುರಿತು ಸುದೀರ್ಘವಾಗಿ ವಿಚಾರ ವಿನಿಮಯ ನಡೆಯಿತು.
ತಳವಾರ ಸಮಾಜದ ಹಿತಾಸಕ್ತಿ, ಒಗ್ಗಟ್ಟು ಹಾಗೂ ನ್ಯಾಯಯುತ ಹಕ್ಕುಗಳ ರಕ್ಷಣೆಗೆ ಎಲ್ಲರೂ ಒಗ್ಗಟ್ಟಿನಿಂದ ಮುಂದುವರಿಯುವ ಸಂಕಲ್ಪವನ್ನು ಮುಖಂಡರು ವ್ಯಕ್ತಪಡಿಸಿದರು.



