ರಾಜಕೀಯ

ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚನೆಗೆ ಒತ್ತಾಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಬಿಜೆಪಿ ಮುಖಂಡರು

ಕಲಬುರಗಿ, ಅ. 27: ಬಿಹಾರದ ಪಾಟ್ನಾದಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ಹೇಳಿಕೆಯನ್ನು ಖಂಡಿಸಿ, ಮಂಗಳವಾರ ಬಿಜೆಪಿ ಕಾರ್ಯಕರ್ತರು ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಖರ್ಗೆ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದು, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ದಶಕಗಳ ಕಾಲ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ಅವರಿಗೆ ಈ ಹಿಂದೆ ಗೌರವವಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿರುವ ಹೇಳಿಕೆ ಖಂಡನೀಯ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕೋಟ್ಯಂತರ ಜನರ ವಿಶ್ವಾಸ ಗಳಿಸಿದ್ದಾರೆ. ದೇಶಕ್ಕೆ ಗೌರವ ಮತ್ತು ಹೆಮ್ಮೆ ತಂದುಕೊಟ್ಟಿದ್ದಾರೆ. ಇಂತಹ ನಾಯಕನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಖರ್ಗೆ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಚಂದು ಪಾಟೀಲ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ವಿರುದ್ಧ ನೀಡಿರುವ ಹೇಳಿಕೆಗೆ ತಕ್ಷಣ ಕ್ಷಮೆ ಕೇಳಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಕಾರ್ಯಕರ್ತರು ಯಾರ ಮನೆಗೂ ಹೋಗುವುದಿಲ್ಲ; ಬದಲಾಗಿ ಕಾಂಗ್ರೆಸ್ ನಾಯಕರನ್ನೇ ಮನೆಗೆ ಕಳುಹಿಸುವ ಕಾಲ ಬರಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ ಮಾತನಾಡಿ, ಖರ್ಗೆ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ನಾಚಿಕೆಗೇಡಿನ ಸಂಗತಿ. ಮೋದಿ ಅವರು ದೇಶದ ಗಡಿಗಳನ್ನು ಮೀರಿ ಜಾಗತಿಕ ಮಟ್ಟದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ದೇಶವು ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಮಾರ್ಗದಲ್ಲಿ ನಡೆಯುತ್ತಿದೆ. ದೇಶದ ಪ್ರಧಾನಿಗೆ ಗೌರವ ನೀಡದಿರುವುದು ರಾಷ್ಟ್ರಕ್ಕೆ ಗೌರವ ನೀಡದಂತೆಯೇ ಸರಿ ಎಂದು ಹೇಳಿದರು. ಖರ್ಗೆ ಅವರು ಕ್ಷಮೆಯಾಚಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರನ್ನು ಮೆಚ್ಚಿಸಲು ಇಂತಹ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ. ಕೂಡಲೇ ಕ್ಷಮೆಯಾಚಿಸಬೇಕು; ಇಲ್ಲದಿದ್ದರೆ ದೇಶಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ತಿಳಿಸಿದರು.

ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಬಗಲಿ ಅವರು ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ, ಶಿವಕಾಂತ ಮಹಾಜನ, ಅಂಬಾರಾಯ ಅಷ್ಟಗಿ, ಅವ್ವಣ್ಣ ಮ್ಯಾಕೇರಿ, ಮಹಾದೇವ ಬೆಳಮಗಿ, ಗೌರಿ ಚಿಚಕೋಟಿ, ಸುಧಾ ಹಲಕಾಯಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button