ಕಲಬುರಗಿ ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ
ವಿದ್ಯುತ್ ಕಂಬಗಳಿಂದ ಉಂಟಾಗುವ ಅಡಚಣೆ ನಿವಾರಣೆ, ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಒತ್ತು

ಕಲಬುರಗಿ, ಅ. 30: ಕಲಬುರಗಿ ನಗರದ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಉದ್ದೇಶದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಸಂಪರ್ಕ ಜಾಲ ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ, ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಗರದಾದ್ಯಂತ ಹಂತ ಹಂತವಾಗಿ ಭೂಗತ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಮೂಲಕ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳು ಹಾಗೂ ಅವುಗಳಿಂದ ಉಂಟಾಗುವ ಅಡಚಣೆಗಳನ್ನು ಕಡಿಮೆ ಮಾಡುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದರಿಂದ ವಿದ್ಯುತ್ ಅಪಘಾತಗಳನ್ನು ನಿಯಂತ್ರಿಸುವುದರ ಜೊತೆಗೆ ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.
ಯೋಜನೆಯ ರೂಪುರೇಷೆ, ತಾಂತ್ರಿಕ ಸಾಧ್ಯತೆಗಳು ಹಾಗೂ ಅನುಷ್ಠಾನದ ಕುರಿತು ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಮತ್ತು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ವಿದ್ಯುತ್ ಸುರಕ್ಷತೆಗೆ ಆದ್ಯತೆ
ಪ್ರಸ್ತುತ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ವಿದ್ಯುತ್ ತಂತಿಗಳಿಂದ ಉಂಟಾಗಬಹುದಾದ ಅಪಾಯಗಳನ್ನು ಕಡಿಮೆ ಮಾಡುವುದು ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ. ರಸ್ತೆಗಳಲ್ಲಿ ಸಂಚಾರಕ್ಕೆ ಎದುರಾಗುವ ಅಡಚಣೆಗಳನ್ನು ನಿವಾರಿಸಿ, ನಗರದ ಮೂಲಸೌಕರ್ಯವನ್ನು ವ್ಯವಸ್ಥಿತಗೊಳಿಸುವುದಕ್ಕೂ ಈ ಯೋಜನೆ ಸಹಕಾರಿಯಾಗಲಿದೆ.
ಭೂಗತ ವಿದ್ಯುತ್ ಸಂಪರ್ಕ ವ್ಯವಸ್ಥೆ ಜಾರಿಗೊಳಿಸುವುದರಿಂದ ವಿದ್ಯುತ್ ವಿತರಣಾ ಮೂಲಸೌಕರ್ಯವನ್ನು ಇನ್ನಷ್ಟು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲು ಹಾಗೂ ಕಲಬುರಗಿ ನಗರದ ಬೆಳವಣಿಗೆಗೆ ಅನುಗುಣವಾಗಿ ಆಧುನಿಕ ಸೌಲಭ್ಯಗಳನ್ನು ಒದಗಿಸಲು ಅವಕಾಶ ದೊರೆಯಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಯೋಜನೆಯ ತಾಂತ್ರಿಕ ಸಾಧ್ಯತೆಗಳು, ಅನುಷ್ಠಾನದ ಮುಂದಿನ ಹಂತಗಳು ಮತ್ತು ಅಗತ್ಯ ಕ್ರಮಗಳ ಕುರಿತು ಜೆಸ್ಕಾಂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ನಗರದ ಮೂಲಸೌಕರ್ಯವನ್ನು ಆಧುನೀಕರಿಸಿ, ಸುರಕ್ಷಿತ ವಿದ್ಯುತ್ ಸಂಪರ್ಕ ವ್ಯವಸ್ಥೆ ಹಾಗೂ ಸುಗಮ ಸಂಚಾರಕ್ಕೆ ಪೂರಕವಾದ ನಗರ ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
