
ಕಲಬುರಗಿ, ಅ. 30: ಪಾರ್ಶ್ವವಾಯುವಿನ ಲಕ್ಷಣಗಳನ್ನು ಆರಂಭದಲ್ಲಿಯೇ ಗುರುತಿಸಿ, ಯಾವುದೇ ವಿಳಂಬ ಮಾಡದೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದರಿಂದ ಗಂಭೀರ ಪರಿಣಾಮಗಳನ್ನು ತಡೆಗಟ್ಟಬಹುದು ಎಂದು ಜಿಮ್ಸ್ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕಿ ಡಾ. ರುಕಿಯಾ ಅಸ್ನಾ ತಿಳಿಸಿದರು.
ವಿಶ್ವ ಪಾರ್ಶ್ವವಾಯು ದಿನಾಚರಣೆಯ ಅಂಗವಾಗಿ ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್) ಜಿಲ್ಲಾ ಆಸ್ಪತ್ರೆಯ ಏಳನೇ ಮಹಡಿಯಲ್ಲಿರುವ ಸಾಮಾನ್ಯ ವೈದ್ಯಕೀಯ ವಿಭಾಗದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪಾರ್ಶ್ವವಾಯುವಿನ ಲಕ್ಷಣಗಳು, ಅದಕ್ಕೆ ಕಾರಣಗಳು, ಸಂಭವಿಸಬಹುದಾದ ಪರಿಣಾಮಗಳು ಹಾಗೂ ಲಭ್ಯವಿರುವ ಚಿಕಿತ್ಸಾ ವಿಧಾನಗಳ ಕುರಿತು ಮಾಹಿತಿ ನೀಡಿದ ಅವರು, ಪಾರ್ಶ್ವವಾಯುವಿನ ಲಕ್ಷಣಗಳು ಕಂಡುಬಂದಾಗ ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು ಎಂದು ಹೇಳಿದರು.
ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆತರೆ ರೋಗಿಯ ಜೀವ ಉಳಿಸುವುದರ ಜತೆಗೆ ಅಂಗವೈಕಲ್ಯದ ಅಪಾಯವನ್ನೂ ಕಡಿಮೆ ಮಾಡಬಹುದು. ಆದ್ದರಿಂದ ಸಾರ್ವಜನಿಕರು ಪಾರ್ಶ್ವವಾಯುವಿನ ಲಕ್ಷಣಗಳ ಬಗ್ಗೆ ಅರಿವು ಹೊಂದಿರಬೇಕು ಹಾಗೂ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗೆ ತೆರಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಡಾ. ಶ್ರೀಕಾಂತ್ ಅವರು ಪಾರ್ಶ್ವವಾಯುವಿನ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಾಮಾನ್ಯ ವೈದ್ಯಕೀಯ ವಿಭಾಗದ ಮುಖ್ಯಸ್ಥರು ಪಾರ್ಶ್ವವಾಯುವಿನ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಮತ್ತು ಚಿಕಿತ್ಸಾ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಪಾರ್ಶ್ವವಾಯುವಿನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಭಾರಿ ವೈದ್ಯಕೀಯ ಅಧೀಕ್ಷಕ ಡಾ. ರೇವಣಸಿದ್ದಪ್ಪ ಬೋಸ್ಗೆ, ಸಾಮಾನ್ಯ ವೈದ್ಯಕೀಯ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರು, ವೈದ್ಯಕೀಯ ಜಿಲ್ಲಾ ಸಂಯೋಜಕಿ ಶಾಂತಾ ಜಾಕತಿ ಸೇರಿದಂತೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



