ರಾಜಕೀಯ

ಬಡತನ ಪ್ರಮಾಣದಲ್ಲಿ ಗಣನೀಯ ಇಳಿಕೆ: ಮೋದಿ ನಾಯಕತ್ವಕ್ಕೆ ಡಾ. ಸುಧಾ ಹಾಲಕೈ ಶ್ಲಾಘನೆ

ವಿಶ್ವ ಬ್ಯಾಂಕ್ ವರದಿ ಉಲ್ಲೇಖಿಸಿ ಕೇಂದ್ರ ಸರ್ಕಾರದ ಜನಕಲ್ಯಾಣ ಯೋಜನೆಗಳ ಮೆಚ್ಚುಗೆ; ವಸತಿ, ಆಹಾರ ಭದ್ರತೆ ಮತ್ತು ಆರ್ಥಿಕ ಸಬಲೀಕರಣಕ್ಕೆ ಆದ್ಯತೆ

ಕಲಬುರಗಿ, ನ. 2: ಕಳೆದ ಒಂದು ದಶಕದಲ್ಲಿ ಭಾರತದಲ್ಲಿ ತೀವ್ರ ಬಡತನದ ಪ್ರಮಾಣ ಶೇ. 27.6ರಿಂದ ಶೇ. 2.6ಕ್ಕೆ ಇಳಿದಿರುವುದು ಮಹತ್ವದ ಸಾಧನೆಯಾಗಿದೆ. ಜಾಗತಿಕ ಮಟ್ಟದಲ್ಲಿ ತೀವ್ರ ಬಡತನವನ್ನು ವೇಗವಾಗಿ ಕಡಿಮೆ ಮಾಡಿದ ರಾಷ್ಟ್ರಗಳ ಪೈಕಿ ಭಾರತ ಮುಂಚೂಣಿಯಲ್ಲಿದೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಡಾ. ಸುಧಾ ಹಾಲಕೈ ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ, ಜನಪರ ಆಡಳಿತ ಹಾಗೂ ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಲಾದ ಯೋಜನೆಗಳ ಪರಿಣಾಮಕಾರಿತ್ವ ಈ ಸಾಧನೆಗೆ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಡವರಿಗೆ ವಸತಿ ಮತ್ತು ಆಹಾರ ಭದ್ರತೆ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೋಟ್ಯಂತರ ಬಡ ಕುಟುಂಬಗಳಿಗೆ ಸ್ವಂತ ಮನೆಗಳನ್ನು ಒದಗಿಸಲಾಗಿದೆ. ಸ್ವಚ್ಛ ಭಾರತ ಅಭಿಯಾನದಡಿ ಕೋಟ್ಯಂತರ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಮಹಿಳೆಯರ ಘನತೆ, ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಸುಮಾರು 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸುವ ಮೂಲಕ ಆಹಾರ ಭದ್ರತೆಯನ್ನು ಖಾತರಿಪಡಿಸಲಾಗಿದೆ. ಈ ಯೋಜನೆಗಳು ಬಡ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಸಬಲೀಕರಣಕ್ಕೆ ಒತ್ತು

ಪ್ರಧಾನಮಂತ್ರಿ ಜನಧನ್ ಯೋಜನೆಯ ಮೂಲಕ ಕೋಟ್ಯಂತರ ಜನರನ್ನು ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸಂಪರ್ಕಿಸಿ ಆರ್ಥಿಕ ಸಬಲೀಕರಣಕ್ಕೆ ದಾರಿ ಮಾಡಿಕೊಡಲಾಗಿದೆ. ಇದರ ಜತೆಗೆ ಉದ್ಯೋಗಾವಕಾಶಗಳ ಸೃಷ್ಟಿ, ಕೌಶಲಾಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ವಿವಿಧ ಜೀವನೋಪಾಯ ಯೋಜನೆಗಳ ಮೂಲಕ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಪ್ರಯತ್ನಿಸಲಾಗಿದೆ ಎಂದು ಡಾ. ಸುಧಾ ಹಾಲಕೈ ಹೇಳಿದ್ದಾರೆ.

ಈ ಯೋಜನೆಗಳು ಕೇವಲ ಸರ್ಕಾರಿ ಕಾರ್ಯಕ್ರಮಗಳಲ್ಲ; ಬಡವರ ಬದುಕಿನಲ್ಲಿ ಗೌರವ, ಸ್ವಾವಲಂಬನೆ ಮತ್ತು ಆತ್ಮವಿಶ್ವಾಸ ಮೂಡಿಸುವ ಸಾಮಾಜಿಕ ಪರಿವರ್ತನೆಯ ಹೆಜ್ಜೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಡತನದಿಂದ ಸಮೃದ್ಧಿಯತ್ತ ಹಾಗೂ ಅಭಾವದಿಂದ ಆತ್ಮಗೌರವದತ್ತ ಸಾಗುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಮತ್ತು ಜನಕಲ್ಯಾಣದ ಹೊಸ ಅಧ್ಯಾಯವನ್ನು ರೂಪಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button