ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಣ್ಣ ನೀರಾವರಿ ಯೋಜನೆಗಳಿಗೆ ಹೊಸ ವೇಗ: ಡಾ. ಅಜಯ್ ಸಿಂಗ್
೪೧ ವಿಧಾನಸಭಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಜಲಸಮೃದ್ಧಿಯ ಸಂಕಲ್ಪ | ₹೩೦೦ ಕೋಟಿ ವೆಚ್ಚದ ಅಂತರ್ಜಲ ವೃದ್ಧಿ ಯೋಜನೆ ರೂಪಿಸಲು ಸೂಚನೆ

ಬೆಂಗಳೂರು, ನ. ೩: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ೪೧ ವಿಧಾನಸಭಾ ಕ್ಷೇತ್ರಗಳಲ್ಲಿ ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿ ಸಣ್ಣ ನೀರಾವರಿ ಕ್ಷೇತ್ರದಲ್ಲಿ ಹೊಸ ಯೋಜನೆಗಳನ್ನು ರೂಪಿಸಿ, ಜಲಸಮೃದ್ಧಿಯ ಭದ್ರ ಬುನಾದಿ ಹಾಕುವ ಸಂಕಲ್ಪ ಹೊಂದಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಡಾ. ಅಜಯ್ ಸಿಂಗ್ ತಿಳಿಸಿದರು.
ಈ ನಿಟ್ಟಿನಲ್ಲಿ ಸೋಮವಾರ ಬೆಂಗಳೂರಿನ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಲಬುರಗಿ ವಿಭಾಗದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿ ಸೇರಿದಂತೆ ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿರುವ ಸಣ್ಣ ನೀರಾವರಿ ಯೋಜನೆಗಳಿಗೆ ಹೊಸ ಆಯಾಮ ನೀಡುವ ಉದ್ದೇಶದಿಂದ ಸಭೆ ನಡೆಸಲಾಯಿತು. ಈ ಭಾಗದ ಎಂಜಿನಿಯರ್ಗಳು, ಅಧಿಕಾರಿಗಳು ಹಾಗೂ ತಾಂತ್ರಿಕ ಪರಿಣತರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಕಲ್ಯಾಣ ಕರ್ನಾಟಕದ ಪ್ರತಿಯೊಂದು ಪ್ರದೇಶಕ್ಕೂ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವ ದೂರದೃಷ್ಟಿಯೊಂದಿಗೆ ಪ್ರಗತಿಯಲ್ಲಿರುವ ಯೋಜನೆಗಳ ಅನುಷ್ಠಾನ, ಸ್ಥಗಿತಗೊಂಡಿರುವ ಕಾಮಗಾರಿಗಳ ಪುನಶ್ಚೇತನ ಹಾಗೂ ಹೊಸ ನೀರಾವರಿ ಯೋಜನೆಗಳ ರೂಪುರೇಷೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು ಎಂದು ಸಚಿವರು ತಿಳಿಸಿದರು.
ಕಲ್ಯಾಣ ಕರ್ನಾಟಕದ ನೀರಾವರಿ ಮೂಲಸೌಕರ್ಯವನ್ನು ಬಲಪಡಿಸುವುದು, ಜಲಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ಭಾಗದ ಸಮಗ್ರ ಅಭಿವೃದ್ಧಿಗೆ ಜಲಸಮೃದ್ಧಿಯ ಬುನಾದಿ ಹಾಕಿ, ರೈತರ ಬದುಕಿನಲ್ಲಿ ಸಮೃದ್ಧಿ ತರುವ ಸುಸ್ಥಿರ ನೀರಾವರಿ ವ್ಯವಸ್ಥೆ ನಿರ್ಮಿಸುವುದು ತಮ್ಮ ಗುರಿಯಾಗಿದೆ ಎಂದರು.
ಜಿಲ್ಲೆಗೊಂದು ವಿಶೇಷ ನೀರಾವರಿ ಯೋಜನೆ ಕೈಗೆತ್ತಿಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಪ್ರದೇಶವಾರು ಶಾಸಕರ ಅಭಿಪ್ರಾಯಗಳನ್ನು ಪಡೆದು ಹೊಸ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಸಾಧ್ಯತೆಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಈ ಹಿಂದೆ ₹೨೦೦ ಕೋಟಿ ವೆಚ್ಚದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಯೋಜನೆ ರೂಪಿಸಲಾಗಿತ್ತು. ಈ ಬಾರಿ ಇದೇ ಸಹಕಾರದೊಂದಿಗೆ ₹೩೦೦ ಕೋಟಿ ವೆಚ್ಚದ ಮತ್ತೊಂದು ಯೋಜನೆ ರೂಪಿಸುವ ಚಿಂತನೆ ಇದೆ. ಈ ಸಂಬಂಧ ತಾಂತ್ರಿಕ ವರದಿ ಸಿದ್ಧಪಡಿಸುವಂತೆ ಎಂಜಿನಿಯರ್ಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕಾಮಗಾರಿಗಳಲ್ಲಿ ಗುಣಮಟ್ಟ, ವೇಗ ಮತ್ತು ಪಾರದರ್ಶಕತೆ ಕಾಪಾಡಬೇಕು. ಪ್ರತಿಯೊಂದು ಯೋಜನೆಯ ಪ್ರಯೋಜನ ನೇರವಾಗಿ ರೈತರ ಹೊಲಗಳಿಗೆ ತಲುಪುವಂತೆ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಏಳು ಜಿಲ್ಲೆಗಳಲ್ಲಿನ ಸಣ್ಣ ನೀರಾವರಿ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿರುವುದಾಗಿ ತಿಳಿಸಿದ ಸಚಿವರು, ಮುಂದಿನ ದಿನಗಳಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ವೇಗ ನೀಡಲಾಗುವುದು ಎಂದರು.
ಸಭೆಯಲ್ಲಿ ಇಲಾಖೆಯ ಮುಖ್ಯ ಎಂಜಿನಿಯರ್, ಹಿರಿಯ ಅಧಿಕಾರಿಗಳು ಹಾಗೂ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸಣ್ಣ ನೀರಾವರಿ ಇಲಾಖೆಯ ಹಿರಿಯ ಎಂಜಿನಿಯರ್ಗಳು ಭಾಗವಹಿಸಿದ್ದರು.
