ದಲಿತ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ರಕ್ಷಣೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೀದರ್, ನ.9: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ದಲಿತ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬೆಂಗಳೂರಿನ ನಿವಾಸಕ್ಕೆ ಚಾಕು, ಚೂರಿ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಆನ್ಲೈನ್ ಮೂಲಕ ಕಳುಹಿಸಿರುವ ಘಟನೆಯನ್ನು ಖಂಡಿಸಿ, ಬಿಜೆಪಿ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕರ್ತರು ನಗರದ ಡಾ. ಬಾಬಾಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮೋರ್ಚಾ ಅಧ್ಯಕ್ಷ ರವಿ ನಿಜಾಂಪುರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಲಿತರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ಚಾಕು, ಚೂರಿಗಳಂತಹ ಅಪಾಯಕಾರಿ ವಸ್ತುಗಳನ್ನು ಕಳುಹಿಸಿ ಬೆದರಿಸುವ ಪ್ರವೃತ್ತಿ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಈ ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಛಲವಾದಿ ನಾರಾಯಣಸ್ವಾಮಿ ಅವರಿಗೆ ಅಗತ್ಯ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಈ ರೀತಿಯ ಕೃತ್ಯಗಳು ಹೆಚ್ಚು ದಿನ ನಡೆಯಲು ಸಾಧ್ಯವಿಲ್ಲ. ಮುಂಬರುವ ದಿನಗಳಲ್ಲಿ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮೋರ್ಚಾ ಉಪಾಧ್ಯಕ್ಷ ಮಹೇಶ ದೊಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ. ಭೀಮ್ ಬಂಧು, ಲುಂಬಿಣಿ ಗೌತಮ್, ನಗರ ಘಟಕದ ಅಧ್ಯಕ್ಷ ಶಶಿ ಹೊಸಳ್ಳಿ, ಗ್ರಾಮಾಂತರ ಘಟಕದ ಅಧ್ಯಕ್ಷ ದೀಪಕ್ ಗಾದಗೆ, ರಾಜೇಂದ್ರ ಪೂಜಾರಿ, ಸುಭಾಷ್ ವರ್ಮಾ, ಸ್ವಾಮಿದಾಸ ಕೆಂಪೇನೋರ್, ಪ್ರಕಾಶ ಮಹಾರಾಜ ಕೆರೋರ್, ಶಿವಕಾಂತ ಹಾರೂಗೇರಿ, ನಿಜಲಿಂಗ ಪಾಟೀಲ, ಶಿವಶಂಕರ ಚಾಂಬೋಳ, ಭೀಮಣ್ಣ ಚಿಕ್ಕಪೇಟೆ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
