ಜನವಾಡಾ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಬೀದರ್, ನ.9: ತಾಲ್ಲೂಕಿನ ಜನವಾಡಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶುಶ್ರೂಷಕಿ ಭಾಗ್ಯಲಕ್ಷ್ಮಿ ಅವರು ಗರ್ಭಿಣಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಈ ಕುರಿತು ಹಲವು ಬಾರಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಜನವಾಡಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಕಾಲದಲ್ಲಿ ಹೆರಿಗೆ ಸೌಲಭ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಗರ್ಭಿಣಿಯರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗಲೂ ಸಮಯೋಚಿತವಾಗಿ ಸೂಕ್ತ ಕ್ರಮ ಕೈಗೊಳ್ಳದ ಪರಿಣಾಮ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯ ಉಂಟಾಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂಬುದು ಸಂಘಟನೆಗಳ ಪ್ರಮುಖ ಆರೋಪವಾಗಿದೆ.
ಈ ಕುರಿತು 2025ರ ಅಕ್ಟೋಬರ್ 23ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಹಾಗೂ ಡಿಸೆಂಬರ್ 15ರಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು 2026ರ ಜನವರಿ 30ರಂದು ಶುಶ್ರೂಷಕಿಯನ್ನು ವರ್ಗಾವಣೆಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದರು. ಆದರೆ, ನಂತರ ಅದೇ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಅಧಿಕಾರದ ದುರುಪಯೋಗ ಮಾಡಿಕೊಂಡು ವರ್ಗಾವಣೆ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಜನವಾಡಾ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿ ಭಾಗ್ಯಲಕ್ಷ್ಮಿ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.
ವರ್ಗಾವಣೆ ಆದೇಶ ರದ್ದುಗೊಳಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳ ಕ್ರಮದ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಆರೋಗ್ಯಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ಸಂಬಂಧಪಟ್ಟ ಶುಶ್ರೂಷಕಿ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ, ಭಾರತೀಯ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಭೀಮ ಯೋಧ ಸಮಿತಿ, ಮಾದಿಗ ದಂಡೋರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಭಾರತೀಯ ವಿದ್ಯಾರ್ಥಿ ಸಂಘದ ಪ್ರದೀಪ್ ನಾಟೇಕರ್, ಯುವ ಘಟಕದ ರಾಜ್ಯಾಧ್ಯಕ್ಷ ಲಕ್ಷ್ಮಣ ಎಸ್. ದೇವಕತ್ತೆ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ರವೀಂದ್ರ ಭಂಗೆ, ರಾಷ್ಟ್ರೀಯ ಅಹಿಂದ ಸಂಘಟನೆಯ ಜಿಲ್ಲಾಧ್ಯಕ್ಷ ಘಾಳೆಪ್ಪ ಬೇಮಳಖೇಡ, ರಾಷ್ಟ್ರೀಯ ಭೀಮ ಯೋಧ ಸಮಿತಿಯ ಜಿಲ್ಲಾಧ್ಯಕ್ಷ ರಾಜಕುಮಾರ ಪ್ರಸಾದೆ, ಪ್ರೇಮ ಗಾಂವ್ಕರ್, ಸುನೀಲ್ ಧರಣನಾಯಕ, ಪ್ರೀತಮ್ ದೊಡ್ಡಿ, ಕೃಷ್ಣ ಚಟ್ಟಾ, ಸಾಲೋಮನ್ ಕಪಲಾಪುರ ಹಾಗೂ ರಾಬರ್ಟ್ ಕಪಲಾಪುರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
