ಜಿಲ್ಲಾಸುದ್ದಿ

ಕೇಂದ್ರದಿಂದ ಬರ ಪರಿಹಾರದ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ಧರಣಿ

ಕಲಬುರಗಿ, ನ.11: ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಭೀಕರ ಬರಗಾಲ ಎದುರಾಗಿದ್ದರೂ ಕೇಂದ್ರ ಸರ್ಕಾರ ಸಮರ್ಪಕವಾಗಿ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ, ಆಳಂದ ಶಾಸಕ ಬಿ.ಆರ್. ಪಾಟೀಲ ಅವರ ನೇತೃತ್ವದಲ್ಲಿ ಬುಧವಾರ ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರು ಧರಣಿ ಸತ್ಯಾಗ್ರಹ ನಡೆಸಿದರು.

ಧರಣಿಯಲ್ಲಿ ಜಿಲ್ಲಾ ಸಹಕಾರ ಬ್ಯಾಂಕ್ ಮಾಜಿ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಕಾಂಗ್ರೆಸ್ ಮುಖಂಡರಾದ ನಿರಗುಡಿ ಶಂಕರ ದೇಶಮುಖ, ಸೂರ್ಯಕಾಂತ ಪೊಲೀಸ್ ಪಾಟೀಲ, ಬಸವರಾಜ ಪವಾಡಶೆಟ್ಟಿ, ಅನಂತರಾಜ ಸಾಹು ಭೂಸನೂರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ರಾಜ್ಯವು ಇತ್ತೀಚಿನ ಇತಿಹಾಸದಲ್ಲಿಯೇ ಅತ್ಯಂತ ಗಂಭೀರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಗಮನ ಸೆಳೆದರು. ಮಳೆಯ ಕೊರತೆ, ವ್ಯಾಪಕ ಅಂತರ್ಜಲ ಕುಸಿತ ಹಾಗೂ ಬೆಳೆ ನಷ್ಟದಿಂದ ರೈತ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕೃಷಿಯನ್ನೇ ಜೀವನಾಧಾರವಾಗಿಸಿಕೊಂಡಿರುವ ಲಕ್ಷಾಂತರ ರೈತ ಕುಟುಂಬಗಳ ಬದುಕು, ಆರ್ಥಿಕ ಭದ್ರತೆ ಮತ್ತು ಭವಿಷ್ಯದ ಆಶಾಭಾವನೆಗಳು ಅನಿಶ್ಚಿತತೆಯ ಸುಳಿಯಲ್ಲಿ ಸಿಲುಕಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಮುಂಗಾರು ಮಳೆ ಕೊರತೆಯಿಂದ ತೀವ್ರ ಸಂಕಷ್ಟ

2026ರ ನೈಋತ್ಯ ಮುಂಗಾರು ಮಳೆಯು ತೀವ್ರ ಕೊರತೆಯನ್ನು ದಾಖಲಿಸಿದೆ. ಕರ್ನಾಟಕದಲ್ಲಿ ವಾಡಿಕೆಯಂತೆ 852 ಮಿ.ಮೀ. ಮಳೆಯಾಗಬೇಕಾಗಿದ್ದರೂ ಕೇವಲ 551 ಮಿ.ಮೀ. ಮಳೆಯಾಗಿದೆ. ಇದರಿಂದ ಶೇ.35ರಿಂದ 40ರಷ್ಟು ಮಳೆ ಕೊರತೆ ಉಂಟಾಗಿದೆ. 1956ರ ನಂತರದ ಎರಡನೇ ಅತಿ ಕಡಿಮೆ ಮುಂಗಾರು ಮಳೆಯಾಗಿದ್ದು, 1901ರ ನಂತರದ ಏಳನೇ ಅತಿ ಕಡಿಮೆ ಮಳೆಯಾಗಿದೆ. ಇದರಿಂದ ರಾಜ್ಯವು ತನ್ನ ಇತಿಹಾಸದಲ್ಲಿಯೇ ಅತ್ಯಂತ ಭೀಕರ ಮುಂಗಾರು ಬರಗಾಲವನ್ನು ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ

ಬರ ನಿರ್ವಹಣಾ ಕೈಪಿಡಿ-2020ರ ಮಾರ್ಗಸೂಚಿಗಳ ಅನ್ವಯ ನಡೆಸಿದ ಸಮಗ್ರ ಮೌಲ್ಯಮಾಪನದ ಬಳಿಕ ರಾಜ್ಯ ಸರ್ಕಾರ ಒಟ್ಟು 226 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಕೃಷಿ ಕ್ಷೇತ್ರದಲ್ಲಿನ ಹಾನಿಯ ಪ್ರಮಾಣ ಆತಂಕಕಾರಿಯಾಗಿದೆ. 53.92 ಲಕ್ಷ ಹೆಕ್ಟೇರ್ ಕೃಷಿ ಬೆಳೆಗಳು ಹಾಗೂ 4.01 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಎಲ್ಲ 226 ಬರಪೀಡಿತ ತಾಲೂಕುಗಳನ್ನು ಒಳಗೊಂಡ ಸಮಗ್ರ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿ, ಕುಡಿಯುವ ನೀರಿನ ಪೂರೈಕೆ, ಜಾನುವಾರುಗಳ ರಕ್ಷಣೆ ಹಾಗೂ ಸಣ್ಣ ಮತ್ತು ಅತಿಸಣ್ಣ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಡಿ 20,585.73 ಕೋಟಿ ರೂ. ಆರ್ಥಿಕ ನೆರವು ನೀಡುವಂತೆ ಕೋರಿದೆ ಎಂದು ತಿಳಿಸಿದರು.

ಪರಿಹಾರ ಮೊತ್ತ ಹೆಚ್ಚಳವಾದರೂ ಅಸಮಾಧಾನ

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಅಕ್ಟೋಬರ್ 26ರಂದು ಹೊರಡಿಸಿದ ಅಧಿಸೂಚನೆಯ ಮೂಲಕ 2026-27ರಿಂದ 2030-31ರವರೆಗಿನ ಅವಧಿಗೆ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ ಹಾಗೂ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಡಿ ನೆರವು ಒದಗಿಸುವ ಮಾನದಂಡಗಳನ್ನು ಪರಿಷ್ಕರಿಸಿದೆ.

ಪರಿಷ್ಕೃತ ಮಾನದಂಡಗಳ ಪ್ರಕಾರ ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿಗಾಗಿ ಕರ್ನಾಟಕಕ್ಕೆ ಅಗತ್ಯವಿರುವ ಅನುದಾನ 6,128.70 ಕೋಟಿ ರೂ.ಗಳಿಂದ 7,943.55 ಕೋಟಿ ರೂ.ಗಳಿಗೆ ಹೆಚ್ಚಳವಾಗಿದೆ. ಅಂದರೆ 1,814.85 ಕೋಟಿ ರೂ. ಹೆಚ್ಚುವರಿ ಅನುದಾನ ದೊರೆಯಲಿದೆ. ಇದರ ಪರಿಣಾಮವಾಗಿ ರಾಜ್ಯದ ಒಟ್ಟು ಬರ ಪರಿಹಾರದ ಅನುದಾನದ ಬೇಡಿಕೆ ಈ ಹಿಂದೆ ಸಲ್ಲಿಸಿದ್ದ 20,585.73 ಕೋಟಿ ರೂ.ಗಳಿಂದ 22,400.58 ಕೋಟಿ ರೂ.ಗಳಿಗೆ ಪರಿಷ್ಕೃತಗೊಂಡಿದೆ.

ಆದರೆ ಕೃಷಿ ವೆಚ್ಚದ ಅಸಾಧಾರಣ ಹೆಚ್ಚಳ, ಹವಾಮಾನ ವೈಪರೀತ್ಯದಿಂದ ಉಂಟಾಗುತ್ತಿರುವ ವಿಪತ್ತುಗಳ ತೀವ್ರತೆ ಹಾಗೂ ರೈತರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಕ್ಕೆ ಹೋಲಿಸಿದರೆ ಪರಿಹಾರದ ಮೊತ್ತದಲ್ಲಿನ ಹೆಚ್ಚಳ ಅತ್ಯಲ್ಪವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಪರಿಹಾರ ಮೊತ್ತ ಹೆಚ್ಚಳಕ್ಕೆ ಒತ್ತಾಯ

ಪರಿಷ್ಕೃತ ಮಾನದಂಡಗಳ ಪ್ರಕಾರ ಪ್ರತಿ ಹೆಕ್ಟೇರ್ ಮಳೆಯಾಶ್ರಿತ ಬೆಳೆಗಳಿಗೆ 11,000 ರೂ., ನೀರಾವರಿ ಬೆಳೆಗಳಿಗೆ 22,000 ರೂ. ಹಾಗೂ ಬಹುವಾರ್ಷಿಕ ಬೆಳೆಗಳಿಗೆ 30,000 ರೂ. ಪರಿಹಾರ ನಿಗದಿಪಡಿಸಲಾಗಿದೆ. ಈ ಮೊತ್ತವನ್ನು ಹೆಚ್ಚಿಸಿದ್ದರೂ ರೈತರು ಕೃಷಿಯಲ್ಲಿ ಮಾಡಿರುವ ಬಂಡವಾಳ ಹೂಡಿಕೆ ಹಾಗೂ ಎದುರಿಸುತ್ತಿರುವ ಆರ್ಥಿಕ ಸಂಕಷ್ಟಕ್ಕೆ ಹೋಲಿಸಿದರೆ ಪರಿಹಾರ ಸಮರ್ಪಕವಾಗಿಲ್ಲ ಎಂದು ಅವರು ದೂರಿದರು.

ಇದಲ್ಲದೆ, 2015-16ನೇ ಸಾಲಿನ ಕೃಷಿ ಗಣತಿಯು ಪ್ರಸ್ತುತ ಭೂಹಿಡುವಳಿ ಮಾದರಿಗಳನ್ನು ಸಮರ್ಪಕವಾಗಿ ಪ್ರತಿಬಿಂಬಿಸುತ್ತಿಲ್ಲ. ಇದರಿಂದ ಅರ್ಹ ಸಣ್ಣ ಮತ್ತು ಅತಿಸಣ್ಣ ರೈತರು ಪರಿಹಾರದ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆಯಿದೆ. ಆದ್ದರಿಂದ ದತ್ತಾಂಶ ವ್ಯವಸ್ಥೆಯನ್ನು ಆಧುನೀಕರಿಸಿ, ಪ್ರಸ್ತುತ ಭೂಹಿಡುವಳಿ ಮತ್ತು ಕೃಷಿ ಪರಿಸ್ಥಿತಿಗೆ ಅನುಗುಣವಾಗಿ ಅರ್ಹ ಫಲಾನುಭವಿಗಳನ್ನು ಗುರುತಿಸುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸಾಲ ಮನ್ನಾ, ಮೇವು ಬ್ಯಾಂಕ್ ಸ್ಥಾಪನೆಗೆ ಆಗ್ರಹ

ಭೀಕರ ಬರಗಾಲದಿಂದ ರಾಜ್ಯದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದಿಂದಾಗಿ ಕೃಷಿಗಾಗಿ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ರೈತರ ಸಾಲವನ್ನು ಕೇಂದ್ರ ಸರ್ಕಾರ ಮಾನವೀಯ ನೆಲೆಯಲ್ಲಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ, ಕುಡಿಯುವ ನೀರು ಮತ್ತು ಮೇವಿನ ತೀವ್ರ ಅಭಾವದಿಂದ ರೈತರು ತಮ್ಮ ಜಾನುವಾರುಗಳನ್ನು ಸಾಕಲು ಸಾಧ್ಯವಾಗದೆ ಅನಿವಾರ್ಯವಾಗಿ ಕಸಾಯಿಖಾನೆಗಳಿಗೆ ಮಾರಾಟ ಮಾಡುವ ದುಸ್ಥಿತಿಗೆ ತಲುಪಿದ್ದಾರೆ. ಈ ಪರಿಸ್ಥಿತಿ ತಪ್ಪಿಸಲು ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಿ, ಜಾನುವಾರುಗಳಿಗೆ ಅಗತ್ಯ ಪ್ರಮಾಣದ ಮೇವು ಹಾಗೂ ಕುಡಿಯುವ ನೀರನ್ನು ಒದಗಿಸಬೇಕು. ಇದಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಅನುದಾನ ಮತ್ತು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಪಂಚಾಯಿತಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ವಿವಿಧ ಇಲಾಖೆಗಳ ತಾಲೂಕು ಅಧಿಕಾರಿಗಳಿಗೆ ಮೇಲ್ವಿಚಾರಣೆಯ ಜವಾಬ್ದಾರಿ ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ನಿರ್ಲಕ್ಷ್ಯಕ್ಕೆ ಖಂಡನೆ

ಈಗಾಗಲೇ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು ರಾಜ್ಯದ ಬರ ಪರಿಸ್ಥಿತಿ ಮತ್ತು ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ವಿವರಿಸಿ ಪ್ರಧಾನ ಮಂತ್ರಿಗಳ ಕಾರ್ಯಾಲಯ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಿಗೆ ಮೂರು ಬಾರಿ ಪತ್ರ ಬರೆದಿದ್ದಾರೆ. ಅಲ್ಲದೆ, ಖುದ್ದಾಗಿ ಭೇಟಿ ಮಾಡಲು ಸಮಯಾವಕಾಶ ಕೋರಿ ಪತ್ರವನ್ನೂ ಸಲ್ಲಿಸಿದ್ದಾರೆ. ಆದರೂ ಕೇಂದ್ರ ಸರ್ಕಾರ ರಾಜ್ಯದ ಮನವಿಗೆ ಸ್ಪಂದಿಸುತ್ತಿಲ್ಲ ಹಾಗೂ ಪತ್ರಗಳಿಗೆ ಉತ್ತರ ನೀಡಿಲ್ಲ ಎಂದು ಪ್ರತಿಭಟನಾಕಾರರು ಖಂಡಿಸಿದರು.

ಬರಗಾಲದ ನಂತರ ರಾಷ್ಟ್ರೀಯ ವಿಪತ್ತು ಎದುರಾದಾಗ ಕೇಂದ್ರದ ನೆರವು ರಾಜ್ಯಗಳಿಗೆ ತಕ್ಷಣ ತಲುಪಬೇಕು. ಆದರೆ ಸಮಯಕ್ಕೆ ಸರಿಯಾಗಿ ಸ್ಪಂದಿಸದಿರುವುದು ವಿಷಾದನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

22,400.58 ಕೋಟಿ ರೂ. ಪರಿಹಾರ ಬಿಡುಗಡೆಗೆ ಆಗ್ರಹ

ಕರ್ನಾಟಕದ 226 ಬರಪೀಡಿತ ತಾಲೂಕುಗಳ ರೈತರು ಎದುರಿಸುತ್ತಿರುವ ಸಂಕಷ್ಟದ ತೀವ್ರತೆಯನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಬೇಕು. ರಾಜ್ಯ ಸರ್ಕಾರ ಪರಿಷ್ಕರಿಸಿ ಸಲ್ಲಿಸಿರುವ ಒಟ್ಟು 22,400.58 ಕೋಟಿ ರೂ. ಬರ ಪರಿಹಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಖುದ್ದಾಗಿ ಪರಿಶೀಲಿಸಿ, ಅರ್ಹ ಅನುದಾನಕ್ಕೆ ಶೀಘ್ರ ಅನುಮೋದನೆ ನೀಡಿ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಒಟ್ಟಾರೆ, ರೈತರಿಗೆ ನೀಡುವ ನೆರವು ಕೇವಲ ತಾತ್ಕಾಲಿಕ ಪರಿಹಾರಕ್ಕೆ ಸೀಮಿತವಾಗದೆ, ಅವರ ಜೀವನೋಪಾಯವನ್ನು ರಕ್ಷಿಸಿ ಕೃಷಿ ಚಟುವಟಿಕೆಗಳನ್ನು ಪುನಃ ಸ್ಥಾಪಿಸಲು ನೆರವಾಗುವ ಸಮಗ್ರ ಯೋಜನೆಯಾಗಬೇಕು. ದೇಶದ ಆಹಾರ ಭದ್ರತೆ ಮತ್ತು ಆರ್ಥಿಕ ಪ್ರಗತಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಕರ್ನಾಟಕದ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು. ರಾಜ್ಯದ ಎಲ್ಲ ಪಕ್ಷಗಳ ನಿಯೋಗವನ್ನು ಕೇಂದ್ರದ ಬಳಿಗೆ ಕರೆದೊಯ್ದು ರೈತರ ಪರವಾಗಿ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.

Related Articles

Leave a Reply

Your email address will not be published. Required fields are marked *

Back to top button