ಜಿಲ್ಲಾಸುದ್ದಿ

ಛಲವಾದಿ ನಾರಾಯಣಸ್ವಾಮಿ ಅವರಿಗೆ ಮಾರಕಾಸ್ತ್ರಗಳ ರವಾನೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಕಲಬುರಗಿ, ನ.14: ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಸಮಾಜಘಾತಕ ಶಕ್ತಿಗಳು ಕೋರಿಯರ್ ಮೂಲಕ ಮಾರಕಾಸ್ತ್ರಗಳನ್ನು ಕಳುಹಿಸಿ ಬೆದರಿಕೆ ಹಾಕಿರುವ ಘಟನೆಯನ್ನು ಖಂಡಿಸಿ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬಿಜೆಪಿ ನಗರ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ ಹಾಗೂ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಜಿನಕೇರಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಹಾಗೂ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಸಂಸದ ಡಾ. ಉಮೇಶ ಜಾಧವ್, ಮಾಜಿ ಸಚಿವ ಬಾಬುರಾವ್ ಚವ್ಹಾಣ್, ಅಂಬಾರಾಯ ಅಷ್ಟಗಿ, ಮಹಾದೇವ ಬೆಳಮಗಿ, ಧರ್ಮಣ್ಣ ಇಟಗಾ, ಅವ್ವಣ್ಣ ಮಾಕೇರಿಮಠ, ಮಹೇಂದ್ರ ಎನ್. ಪೂಜಾರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪ್ರತಿಭಟನಾಕಾರರು ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಕೋರಿಯರ್ ಮೂಲಕ ಚಾಕು, ಚೂರಿಗಳಂತಹ ಮಾರಕಾಸ್ತ್ರಗಳನ್ನು ಕಳುಹಿಸಿ ಬೆದರಿಕೆ ಹಾಕಿರುವ ಕೃತ್ಯ ಖಂಡನೀಯವಾಗಿದೆ. ಈ ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಸಂವಿಧಾನಿಕ ಹುದ್ದೆಯಲ್ಲಿರುವ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕನಿಗೇ ಸಮಾಜಘಾತಕ ಶಕ್ತಿಗಳಿಂದ ಬೆದರಿಕೆ ಎದುರಾಗಿರುವುದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ. ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕೋರಿಯರ್ ಮೂಲಕ ಮಾರಕಾಸ್ತ್ರಗಳನ್ನು ಕಳುಹಿಸಿ ಬೆದರಿಕೆ ಹಾಕಿರುವ ಸಮಾಜಘಾತಕ ಶಕ್ತಿಗಳನ್ನು ರಾಜ್ಯ ಸರ್ಕಾರ ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಬಿಜೆಪಿ ಗ್ರಾಮಾಂತರ ಹಾಗೂ ನಗರ ಜಿಲ್ಲಾ ಎಸ್‌ಸಿ ಮೋರ್ಚಾ ವತಿಯಿಂದ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

Related Articles

Leave a Reply

Your email address will not be published. Required fields are marked *

Back to top button