ಜಿಲ್ಲಾಸುದ್ದಿ

ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಗೆ ಶಿವಶರಣಪ್ಪ ಕೋಬಾಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಗೆ ಜೇವರ್ಗಿ ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಶಿವಶರಣಪ್ಪ ಕೋಬಾಳ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿದೆ.

ಶಿವಶರಣಪ್ಪ ಕೋಬಾಳ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಹಲವು ವರ್ಷಗಳಿಂದ ನಿಷ್ಠೆ, ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಸರಳತೆ, ಸಜ್ಜನಿಕೆ, ಉತ್ತಮ ವ್ಯಕ್ತಿತ್ವ ಹಾಗೂ ಜನಪರ ಕಾಳಜಿಯಿಂದ ಗುರುತಿಸಿಕೊಂಡಿರುವ ಅವರು, ಇದೀಗ ತಮಗೆ ವಹಿಸಿರುವ ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಪ್ರಗತಿಗೆ ಹಾಗೂ ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಶಿವಶರಣಪ್ಪ ಕೋಬಾಳ ಅವರು ಮಹತ್ವದ ಕೊಡುಗೆ ನೀಡಲಿದ್ದಾರೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಪಕ್ಷದ ಸಂಘಟನೆಗಾಗಿ ದೀರ್ಘಕಾಲ ಸೇವೆ ಸಲ್ಲಿಸಿರುವ ಅವರ ಹಿರಿತನ ಮತ್ತು ಪಕ್ಷನಿಷ್ಠೆಯನ್ನು ಪರಿಗಣಿಸಿ ಅಧ್ಯಕ್ಷ ಸ್ಥಾನ ಅಥವಾ ವಿಧಾನ ಪರಿಷತ್ ಸದಸ್ಯ ಸ್ಥಾನದಂತಹ ಉನ್ನತ ಪ್ರಾತಿನಿಧ್ಯ ನೀಡಬೇಕಿತ್ತು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಆದಾಗ್ಯೂ, ಜೇವರ್ಗಿ ಕ್ಷೇತ್ರದ ಶಾಸಕ ಹಾಗೂ ಸಣ್ಣ ನೀರಾವರಿ ಸಚಿವ ಡಾ. ಅಜಯ್ ಸಿಂಗ್ ಅವರು ತಡವಾಗಿಯಾದರೂ ಹಿರಿಯ ಮುಖಂಡರನ್ನು ಗುರುತಿಸಿ ಜವಾಬ್ದಾರಿ ನೀಡಿರುವುದು ಸಂತೋಷದ ಸಂಗತಿ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಶಿವಶರಣಪ್ಪ ಕೋಬಾಳ ಅವರನ್ನು ಮಂಡಳಿಯ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button