ಜಿಲ್ಲಾಸುದ್ದಿ

ಸೇವಾ ಭದ್ರತೆ, ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ

ಕಲಬುರಗಿ, ನ.16: ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರಿಗೆ ವಿಬಿಜಿ ರಾಮ್‌ಜಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್ ಅಂಬಲಗಿ ಅವರು ಮನವಿ ಸಲ್ಲಿಸಿದರು.

ನಗರದ ಭಾನುವಾರಪೇಟೆಯಲ್ಲಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣಕ್ಕೆ ಒತ್ತಾಯಿಸಿ ಆಯೋಜಿಸಿದ್ದ ಸಮಾರಂಭಕ್ಕೆ ಆಗಮಿಸಿದ್ದ ಸಚಿವರಿಗೆ ಸಂಘದ ಪದಾಧಿಕಾರಿಗಳು ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ ಮನವಿ ಸಲ್ಲಿಸಿದರು.

ಹಿಂದಿನ ನರೇಗಾ ಯೋಜನೆಯಿಂದ ಹಿಡಿದು ಪ್ರಸ್ತುತ ಯೋಜನೆಯವರೆಗೆ ಸುಮಾರು 10ರಿಂದ 15 ವರ್ಷಗಳ ಕಾಲ ಯೋಜನೆಯಡಿ ಸೇವೆ ಸಲ್ಲಿಸುತ್ತಿದ್ದೇವೆ. ನಮ್ಮ ಕುಟುಂಬಗಳ ಸಂಪೂರ್ಣ ನಿರ್ವಹಣೆ ನಮ್ಮ ಉದ್ಯೋಗದ ಮೇಲೆಯೇ ಅವಲಂಬಿತವಾಗಿದೆ. ಬೇರೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ವಯಸ್ಸನ್ನೂ ಮೀರಿರುವುದರಿಂದ ಸೇವಾ ಭದ್ರತೆ ಒದಗಿಸುವುದು ಅಗತ್ಯವಾಗಿದೆ ಎಂದು ನೌಕರರು ಮನವಿಯಲ್ಲಿ ತಿಳಿಸಿದ್ದಾರೆ.

ದಿನನಿತ್ಯದ ಜೀವನಾವಶ್ಯಕ ವಸ್ತುಗಳು ಹಾಗೂ ಆಹಾರ ಸಾಮಗ್ರಿಗಳ ಬೆಲೆ ಏರಿಕೆಯಾಗಿರುವುದರಿಂದ ಪ್ರಸ್ತುತ ದೊರೆಯುತ್ತಿರುವ ವೇತನದಲ್ಲಿ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ಆದ್ದರಿಂದ ಈಗಿನ ಮೂಲ ವೇತನಕ್ಕೆ ಶೇ.25ರಷ್ಟು ಹೆಚ್ಚಳ ಮಾಡಬೇಕು. ಪ್ರತಿ ತಿಂಗಳು ನಿಗದಿತ ಸಮಯಕ್ಕೆ ವೇತನ ಪಾವತಿಸಬೇಕು ಹಾಗೂ ಪ್ರಯಾಣ ಭತ್ಯೆಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಕೆಲಸದ ಅವಧಿಯಲ್ಲಿ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಈಗಾಗಲೇ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಬಿಜಿ ರಾಮ್‌ಜಿ ರಾಜ್ಯ ನೌಕರರ ಸಂಘದ ಪದಾಧಿಕಾರಿಗಳ ಸಭೆಯನ್ನು ಕೂಡಲೇ ಕರೆದು, ನೌಕರರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಅನಿಲ್ ರಾಠೋಡ್, ಜ್ಯೋತಿ ಸಾಗರ್, ಇರ್ಫಾನ್ ಜಾಗೀರದಾರ್, ಸಚಿನ್ ಲೊಂಡೆ, ರವಿ ಶಂಕರ ಲಾವಟೆ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button