ಜಿಲ್ಲಾಸುದ್ದಿ

ಕಲಬುರಗಿಯಲ್ಲಿ ಇಂದು ಯುವ ಸಂಸ್ಕೃತಿ ಪುನಶ್ಚೇತನ ಶಿಬಿರ: ಜಿಲ್ಲಾ ಮಟ್ಟದ ಸ್ಪರ್ಧೆಗಳು

ಕಲಬುರಗಿ, ನ.16: ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಮಹಿಳಾ ಮಹಾವಿದ್ಯಾಲಯದಲ್ಲಿ ನವೆಂಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ವಿದ್ಯಾರ್ಥಿಗಳ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಡಾ. ಮೀನಾಕ್ಷಿ ಬಾಳಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದ ಅಧ್ಯಯನ ಕೇಂದ್ರವು ರಾಜ್ಯದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ‘ಯುವ ಸಂಸ್ಕೃತಿ ಪುನಶ್ಚೇತನ ಶಿಬಿರ’ವನ್ನು ಆಯೋಜಿಸುತ್ತಿದೆ. ಶರಣ ಸಾಹಿತ್ಯ, ತತ್ವಪದ ಸಾಹಿತ್ಯ ಹಾಗೂ ಕೀರ್ತನೆ ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.

ವಿದ್ಯಾರ್ಥಿಗಳು ಈ ಸಾಹಿತ್ಯವನ್ನು ಓದಿ, ಅದರ ಆಶಯಗಳನ್ನು ಗ್ರಹಿಸಿ ಅಭಿವ್ಯಕ್ತಿಪಡಿಸುವಂತೆ ಪ್ರೇರೇಪಿಸುವುದು ಹಾಗೂ ಕನ್ನಡದ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶಿಬಿರ ಹಮ್ಮಿಕೊಳ್ಳಲಾಗಿದೆ. ಇಂದಿನ ಬದುಕಿನೊಂದಿಗೆ ವೈಚಾರಿಕವಾಗಿ ಸಂವೇದನಾಶೀಲರಾಗುವಂತೆ ಯುವಜನರನ್ನು ಸಿದ್ಧಪಡಿಸುವುದೂ ಇದರ ಆಶಯವಾಗಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರಬಂಧ ರಚನೆ, ಓದು–ವ್ಯಾಖ್ಯಾನ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ನವೆಂಬರ್ 17ರಂದು ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಗಳು ನಡೆಯಲಿವೆ. ಈಗಾಗಲೇ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯ ಬಹುತೇಕ ತಾಲ್ಲೂಕುಗಳಿಂದ ವಿದ್ಯಾರ್ಥಿಗಳು ಭಾಗವಹಿಸಲು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.

ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಡಾ. ದಾಕ್ಷಾಯಿಣಿ ಎಸ್. ಅಪ್ಪ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಸಂತಕವಿ ಕನಕದಾಸ ಮತ್ತು ತತ್ವಪದ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ. ತ. ಚಿಕ್ಕಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಆಗಮಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ. ಸೀಮಾ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

ಉದ್ಘಾಟನೆಯ ನಂತರ ವಿವಿಧ ಸ್ಪರ್ಧೆಗಳು ನಡೆಯಲಿವೆ. ಪ್ರತಿ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡಿದ 15 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರಬಂಧ ಸ್ಪರ್ಧೆಯಲ್ಲಿ ಆಯ್ಕೆಯಾದ 15 ವಿದ್ಯಾರ್ಥಿಗಳಿಗೆ ತಲಾ 2,000 ರೂ., ಓದು–ವ್ಯಾಖ್ಯಾನ ಸ್ಪರ್ಧೆಯ 15 ವಿಜೇತರಿಗೆ ತಲಾ 1,000 ರೂ. ಹಾಗೂ ಭಾಷಣ ಸ್ಪರ್ಧೆಯ 15 ವಿಜೇತರಿಗೆ ತಲಾ 1,000 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಆಯ್ಕೆಯಾದ ಪ್ರಬಂಧಗಳಲ್ಲಿ ಒಂದನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು ಎಂದು ಡಾ. ಮೀನಾಕ್ಷಿ ಬಾಳಿ ತಿಳಿಸಿದರು.

ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ ಅವರು ಕಾಲೇಜಿನ ವತಿಯಿಂದ ಸ್ಪರ್ಧೆಗಳ ಮೇಲ್ವಿಚಾರಣೆ ವಹಿಸಿದ್ದಾರೆ. ಶಿಬಿರದ ಜಿಲ್ಲಾ ಸಂಚಾಲಕರಾಗಿ ಡಾ. ಮೀನಾಕ್ಷಿ ಬಾಳಿ ಹಾಗೂ ಸಹ ಸಂಚಾಲಕರಾಗಿ ಡಾ. ರೋಳೇಕರ್ ನಾರಾಯಣ, ಡಾ. ಸುರೇಶ್ ಜಾಧವ್ ಮತ್ತು ಡಾ. ಪುಟ್ಟಮಣಿ ದೇವಿದಾಸ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯದ ಯುವಪೀಳಿಗೆಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಶಿಬಿರ ಮಹತ್ವದ ಪಾತ್ರ ವಹಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಡಾ. ನೀಲಾಂಬಿಕಾ ಶೇರಿಕಾರ, ಡಾ. ರೋಳೇಕರ್ ನಾರಾಯಣ, ಡಾ. ಸುರೇಶ್ ಜಾಧವ್, ಡಾ. ಪುಟ್ಟಮಣಿ ದೇವಿದಾಸ ಹಾಗೂ ಪ್ರೊ. ಆರ್.ಕೆ. ಹುಡಗಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button