ಜಿಲ್ಲಾಸುದ್ದಿ

ಜಲಜೀವನ್ ಮಿಷನ್ ಕಾಮಗಾರಿಗಳಲ್ಲಿ ಅವ್ಯವಹಾರ ಆರೋಪ: ಸಮಗ್ರ ತನಿಖೆಗೆ ಆಗ್ರಹ

ಮಹಾಗಾಂವ್ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಳಪೆ ಕಾಮಗಾರಿ; ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಕಮಲಾಪುರ, ನ.17: ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ಗಂಗೆ ಹೆಸರಿನಲ್ಲಿ ಕಮಲಾಪುರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬ ಆರೋಪ ಕೇಳಿಬಂದಿದೆ. ಮಹಾಗಾಂವ್ ಗ್ರಾಮವೊಂದರಲ್ಲೇ ಸುಮಾರು 3.50 ಕೋಟಿ ರೂ. ವೆಚ್ಚದ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಕರ್ನಾಟಕ ಯುವಶಕ್ತಿ ಸೈನ್ಯದ ಕಾರ್ಯಕರ್ತರು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಲಿಂಗರಾಜ ಗುಂಡೂರಕರ್ ಮಾತನಾಡಿ, ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳು ಮಹಾಗಾಂವ್ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕಳಪೆ ಮಟ್ಟದಲ್ಲಿ ನಡೆದಿವೆ ಎಂದು ಆರೋಪಿಸಿದರು.

ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗಿದೆಯೇ ಎಂಬುದನ್ನು ಪರಿಶೀಲಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಾಮಗಾರಿಗಳ ಗುಣಮಟ್ಟದ ಕುರಿತು ಸಮಗ್ರ ತನಿಖೆ ನಡೆಸಬೇಕು. ಕಾಮಗಾರಿಗಳಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕಿನ ರೈತರು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಜೀವನಾಡಿಯಾಗಿರುವ ಗಂಡೋರಿ ನಾಲಾ ಜಲಾಶಯದಲ್ಲಿ ಮಳೆ ಕೊರತೆಯಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. ಇದರಿಂದ ಜನರು ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಜಲಾಶಯದಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿಗೆ ಕೊಳವೆ ಮಾರ್ಗದ ಮೂಲಕ ನೀರು ಪೂರೈಸುವ ಕಾಮಗಾರಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಮೊದಲು ಸ್ಥಳೀಯ ರೈತರು, ಸಾರ್ವಜನಿಕರು ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅಗತ್ಯಕ್ಕೆ ಆದ್ಯತೆ ನೀಡಬೇಕು. ಮಹಾಗಾಂವ್ ತಾಂಡಾದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ನಿವಾಸಿಗಳು ಪ್ರತಿನಿತ್ಯ ನೀರಿಗಾಗಿ ಪರದಾಡುತ್ತಿದ್ದಾರೆ. ಅಧಿಕಾರಿಗಳು ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರಾಜು ರಾಥೋಡ್, ಶರಣಪ್ಪ ಬೆನಕಪಳ್ಳಿ, ಮನೋಜಕುಮಾರ ಹತ್ತಿ, ವೆಂಕಟೇಶ ರಾಥೋಡ್, ಸಂಜುಕುಮಾರ, ಮುಸ್ತಫಾ ಕುರಿಕೋಟಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಮೊಹಮ್ಮದ್ ಮೊಸಿನ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Related Articles

Leave a Reply

Your email address will not be published. Required fields are marked *

Back to top button