ರಾಜಕೀಯ

ಎಸ್‌ಐಆರ್‌ ವಿರುದ್ಧ ಚಿತ್ತಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಮತದಾರರ ಹಕ್ಕುಗಳ ರಕ್ಷಣೆಗೆ ಒಗ್ಗಟ್ಟಿನ ಹೋರಾಟದ ಕರೆ; ಲಾಡ್ಜಿಂಗ್ ಕ್ರಾಸ್ ಬಳಿ ಮಾನವ ಸರಪಳಿ

ಚಿತ್ತಾಪುರ, ನ.17: ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದ್ದು, ಪ್ರಜಾಪ್ರಭುತ್ವದ ಉಳಿವಿಗಾಗಿ ನಾವೆಲ್ಲರೂ ಒಂದಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.

ಪಟ್ಟಣದ ಲಾಡ್ಜಿಂಗ್ ಕ್ರಾಸ್ ಬಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ‘ಮತ ಉಳಿಸಿ, ದೇಶ ಉಳಿಸಿ’ ಜನಜಾಗೃತಿ ಆಂದೋಲನದ ಅಂಗವಾಗಿ ಎಸ್‌ಐಆರ್‌ ಪ್ರಕ್ರಿಯೆ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಮತದಾರರ ಹಕ್ಕುಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ. ಆದ್ದರಿಂದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್‌ ಪ್ರಕ್ರಿಯೆಯ ಹೆಸರಿನಲ್ಲಿ, ಅದರಲ್ಲೂ ವಿಶೇಷವಾಗಿ ನಮೂನೆ-7ರ ದುರ್ಬಳಕೆ ಮಾಡಿಕೊಂಡು ಅರ್ಹ ಹಾಗೂ ಸಾಂಪ್ರದಾಯಿಕ ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಮತ್ತು ಅಕ್ರಮವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿದರು. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ದೂರಿದರು.

ಮತದಾರರ ಪಟ್ಟಿಯಲ್ಲಿನ ಗೊಂದಲಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಉದ್ದೇಶಪೂರ್ವಕವಾಗಿ ವಿಳಂಬವಾಗುತ್ತಿವೆ. ಸಂವಿಧಾನಬದ್ಧ ಸಂಸ್ಥೆಯಾಗಿರುವ ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಟೀಕಿಸಿದರು.

ಗೊಂದಲಮಯ ಹಾಗೂ ಅವೈಜ್ಞಾನಿಕವಾಗಿರುವ ಎಸ್‌ಐಆರ್‌ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಬೇಕು. ನಮೂನೆ-7ರ ಮೂಲಕ ಅಕ್ರಮವಾಗಿ ಕೈಬಿಡಲಾಗಿರುವ ಅರ್ಹ ಮತದಾರರ ಹೆಸರುಗಳನ್ನು ಮತ್ತೆ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು. ಚುನಾವಣಾ ಆಯೋಗದ ಮೇಲೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದರು.

ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ ಮಾತನಾಡಿ, ದೇಶದಲ್ಲಿ ಎಂಟು ಕೋಟಿ ಮತದಾರರ ಹೆಸರುಗಳನ್ನು ಅಳಿಸಲು ಕೇಂದ್ರದ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು. ಬಿಹಾರದಲ್ಲಿ 65 ಲಕ್ಷ ಮತದಾರರ ಹೆಸರುಗಳನ್ನು ಕೈಬಿಟ್ಟಂತೆ ಕರ್ನಾಟಕದಲ್ಲಿಯೂ ಅದೇ ಪ್ರಯತ್ನ ನಡೆಯುತ್ತಿದೆ. ಚುನಾವಣೆಯಲ್ಲಿ ನೇರವಾಗಿ ಗೆಲ್ಲಲು ಸಾಧ್ಯವಾಗದ ಬಿಜೆಪಿ ಈಗ ಮತದಾರರ ಪಟ್ಟಿಯಲ್ಲಿಯೇ ಅಕ್ರಮ ನಡೆಸಲು ಮುಂದಾಗಿದೆ ಎಂದು ದೂರಿದರು.

ಚಿತ್ತಾಪುರದ ಜನರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗೆಲ್ಲಿಸಿರುವುದರಿಂದ ಮತ ಉಳಿಸಿ, ದೇಶ ಉಳಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ವೃತ್ತದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸುನೀಲ ದೊಡ್ಡಮನಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಕ್ತಾರ ಪಟೇಲ್ ಮಾತನಾಡಿದರು.

ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ವೀರೂಪಾಕ್ಷಪ್ಪ ಗಡ್ಡದ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವರುದ್ರ ಭೀಣಿ, ತಾಪಂ ಮಾಜಿ ಅಧ್ಯಕ್ಷ ಜಗಣ್ಣಗೌಡ ರಾಮತೀರ್ಥ, ಪುರಸಭೆ ಮಾಜಿ ಅಧ್ಯಕ್ಷರಾದ ಶೀಲಾ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಶಿವಕಾಂತ ಬೆಣ್ಣೂರಕರ್, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಹಳ್ಳಿ, ಯುವ ಕಾಂಗ್ರೆಸ್ ಅಧ್ಯಕ್ಷ ದೇವ ಯಾಬಾಳ, ಟಿಎಪಿಸಿಎಂ ಅಧ್ಯಕ್ಷ ದೇವೇಂದ್ರ ಅರಣಕಲ್, ಪ್ರಮುಖರಾದ ಯಲ್ಲಾಲಿಂಗ ಮುಗುಟಿ, ಶಿವಕುಮಾರ ಯಾಗಾಪುರ, ಬಸವರಾಜ ಚಿನ್ನಮಳ್ಳಿ, ನಾಗರೆಡ್ಡಿ ಗೋಪಶೆಟ್ಟಿ, ಜಗದೀಶ ಚವ್ಹಾಣ, ಭೀಮೂ ಹೊತ್ತಿನಮಡಿ, ಬಸವರಾಜ ಹೊಸಳ್ಳಿ, ಸೂರ್ಯಕಾಂತ ಪೂಜಾರಿ, ಸಾಬಣ್ಣ ಕಾಶಿ, ಸಂಜಯ ಬುಳಕರ್, ವಿನೋದ ಗುತ್ತೇದಾರ, ಸಾಬಣ್ಣ ಭರಾಟೆ, ಶಿವಯೋಗಿ ರಾವೂರ, ನಿಂಗಣ್ಣ ಹೆಗಲೇರಿ, ಈರಪ್ಪ ಭೋವಿ, ವೆಂಕಟೇಶ ಕುಲಕರ್ಣಿ, ಹನಮಂತ ಸಾಂಕನೂರ, ಎಂ.ಎಂ. ರಶೀದ್, ಶರಣಪ್ಪ ನಾಟೇಕಾರ, ರಾಮಲಿಂಗ ಬಾನರ್, ಶಿವಾಜಿ ಕಾಶಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button