ಇಚ್ಛಾಶಕ್ತಿಯಿದ್ದರೆ ವಿಕಲಚೇತನರು ಏನು ಬೇಕಾದರೂ ಸಾಧಿಸಬಹುದು: ರಾಯಪ್ಪ ಹುಣಸಗಿ
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

ಕಲಬುರಗಿ, ನ.17– ದೈಹಿಕ ಸವಾಲುಗಳಿದ್ದರೂ ಮನಸ್ಸಿನ ದೃಢತೆ ಮತ್ತು ಇಚ್ಛಾಶಕ್ತಿ ಇದ್ದರೆ ವಿಕಲಚೇತನರು ಜೀವನದಲ್ಲಿ ಏನು ಬೇಕಾದರೂ ಸಾಧಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.
ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಘ-ಸಂಸ್ಥೆಗಳ ಸಹಯೋಗದಲ್ಲಿ 2026ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೈನಂದಿನ ಕೆಲಸದ ಒತ್ತಡದ ನಡುವೆಯೂ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರುವುದು ಸಂತಸ ತಂದಿದೆ. ಈ ಕಾರ್ಯಕ್ರಮ ಜೀವನದ ಮೇಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅವರು ಹೇಳಿದರು.
ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಉತ್ಸಾಹದಿಂದ ಭಾಗವಹಿಸುವುದೇ ನಿಜವಾದ ಗೆಲುವು. ಎಲ್ಲ ಸ್ಪರ್ಧಾರ್ಥಿಗಳು ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು. ಸ್ಪರ್ಧಿಗಳಿಗೆ ಯಾವುದೇ ತೊಂದರೆಯಾಗದಂತೆ ಆರೋಗ್ಯ ಇಲಾಖೆಯಿಂದ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಶಕ್ತಿವರ್ಧಕ ಪಾನೀಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಪ್ರಾಸ್ತಾವಿಕವಾಗಿ ಮಾತನಾಡಿ, 2026ನೇ ಸಾಲಿನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಕಲಬುರಗಿ ಜಿಲ್ಲೆಯಲ್ಲಿ ವಿಕಲಚೇತನ ಕ್ರೀಡಾಪಟುಗಳಿಗಾಗಿ ಈ ರೀತಿಯ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಚಾಲನೆ ನೀಡುತ್ತಿರುವುದು ವಿಶೇಷವಾಗಿದೆ. ಜಿಲ್ಲಾಡಳಿತದ ಸಂಪೂರ್ಣ ಸಹಕಾರದಿಂದ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ್ ಗೋನಾಯಕ್, ವಿಜಯಲಕ್ಷ್ಮಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಲಿಂಗರಾಜ್ ತಾರ್ಫೆಲ್, ವಿನಾಯಕ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಶ್ರೀಮಂತ ರೇವೂರ್, ಫ್ಯಾಷನ್ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ಜಾಕೀರ್ ಹುಸೇನ್, ಸಿದ್ಧಾರ್ಥ್ ಕೋರ್ವಾರ, ರಾಜು ಶಕಾಪುರ, ಡಾ. ಲೋಕೇಶ್ ಹಾಗೂ ವೆಂಕಟೇಶ್ ಪಾಟೀಲ್ ಉಪಸ್ಥಿತರಿದ್ದರು.



