ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ
ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣಕ್ಕೆ ಅವಕಾಶ; ಜುಲೈ 12ರಿಂದ ಆನ್‌ಲೈನ್ ಅರ್ಜಿ ಆರಂಭ

ಕಲಬುರಗಿ, ಜು.11: ನಗರದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಾಂಶುಪಾಲೆ ಸವಿತಾ ತಿವಾರಿ ಕರೆ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1932ರಲ್ಲಿ ಸ್ಥಾಪನೆಯಾದ ಈ ಮಹಾವಿದ್ಯಾಲಯವು ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿದ್ದು, ‘ಬಿ+’ ನ್ಯಾಕ್ ಮಾನ್ಯತೆ ಪಡೆದಿದೆ ಎಂದು ತಿಳಿಸಿದರು. ಕಲೆ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ನಾಲ್ಕು ಪದವಿ ಮತ್ತು 13 ಸ್ನಾತಕೋತ್ತರ ಕೋರ್ಸ್‌ಗಳನ್ನು ಕಾಲೇಜಿನಲ್ಲಿ ನಡೆಸಲಾಗುತ್ತಿದೆ ಎಂದರು.
ಅನುಭವಿ ಬೋಧಕ ವರ್ಗ, ಗುಣಮಟ್ಟದ ಶೈಕ್ಷಣಿಕ ವಾತಾವರಣ, ಸುಸಜ್ಜಿತ ಮೂಲಸೌಕರ್ಯ ಹಾಗೂ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಸಹಕಾರದಿಂದ ಸುಮಾರು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ನೂತನ ಗ್ರಂಥಾಲಯ ಹಾಗೂ ಆಧುನಿಕ ಡಿಜಿಟಲ್ ಸಭಾಂಗಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಕನ್ನಡ, ಇಂಗ್ಲಿಷ್, ಹಿಂದಿ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ ಸೇರಿದಂತೆ ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ, ಗಣಿತ, ಗಣಕ ವಿಜ್ಞಾನ, ಪ್ರಾಣಿಶಾಸ್ತ್ರ, ಸೂಕ್ಷ್ಮಜೀವಶಾಸ್ತ್ರ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಲಭ್ಯವಿದೆ.



