ಕಲಬುರಗಿಯಲ್ಲಿ ಬರ ಘೋಷಣೆ, ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಸಿಪಿಐ ಪ್ರತಿಭಟನೆ
ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ಉದ್ಯೋಗ ಖಾತ್ರಿ ಕಾಮಗಾರಿ ಆರಂಭಿಸಿ ರೈತರ ಸಂಕಷ್ಟ ನಿವಾರಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ.

ಕಲಬುರಗಿ, ಜು.27: ಜಿಲ್ಲೆಯಾದ್ಯಂತ ಮುಂಗಾರು ಮಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಕಲಬುರಗಿಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶಕುಮಾರ ರಾಠೋಡ್ ವಹಿಸಿದ್ದರು. ರಾಜ್ಯ ಮಂಡಳಿ ಸದಸ್ಯ ಸಿದ್ದಪ್ಪ ಪಾಲ್ಕಿ, ಸಹ ಕಾರ್ಯದರ್ಶಿ ಪ್ರಭುದೇವ ಯಳಸಂಗಿ, ಪದ್ಮಾವತಿ ಎನ್. ಮಾಳಿಪಾಟೀಲ್, ಭೀಮಾಶಂಕರ ಮಾಡಿಯಾಳ, ಹೆಚ್.ಎಸ್. ಪತಕಿ, ಭೀಮರಾಯ ಮುದಬಸ್ಸಪ್ಪಗೌಡ ಯಡ್ರಾಮಿ, ಮೊಹಮ್ಮದ್ ಚೌಧರಿ ಜೇವರ್ಗಿ, ಸಾಜಿದ್ ಅಹ್ಮದ್, ಶಿವಲಿಂಗಮ್ಮ ಲೆಂಗಟೀಕರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಜಿಲ್ಲೆಯಲ್ಲಿ ಈಗಾಗಲೇ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲದ ಎರಡು ತಿಂಗಳು ಕಳೆದರೂ ಸಮರ್ಪಕ ಮಳೆಯಾಗದ ಕಾರಣ ಬೆಳೆಗಳು ಒಣಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ರೈತರು ಬಿತ್ತಿದ ಬೀಜಗಳು ನಾಶವಾಗಿದ್ದು, ಕೃಷಿ ಕೂಲಿಕಾರರಿಗೆ ಉದ್ಯೋಗವಿಲ್ಲದೆ ಜೀವನ ಸಂಕಷ್ಟಕ್ಕೆ ಸಿಲುಕಿದೆ ಎಂದು ದೂರಿದರು.
ಇಂತಹ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಕ್ಷಣ ಕಾಮಗಾರಿಗಳನ್ನು ಆರಂಭಿಸಿ ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಬೇಕು. ಬರದಿಂದ ತತ್ತರಿಸಿರುವ ರೈತರು, ಕೃಷಿ ಕೂಲಿಕಾರರು ಹಾಗೂ ಬಡ ಕುಟುಂಬಗಳಿಗೆ ಸರ್ಕಾರ ವಿಶೇಷ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ಸಾರ್ವಜನಿಕ ಹಾಗೂ ಖಾಸಗಿ ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳು ಮತ್ತು ಖಾಸಗಿ ಸಾಲದಾತರಿಂದ ಪಡೆದ ಸಾಲದ ಒತ್ತಡದಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಜೊತೆಗೆ ಬೆಳೆ ವಿಮೆ ಎಲ್ಲ ಬೆಳೆಗಳಿಗೆ ವಿಸ್ತರಿಸಿ, ಹತ್ತಿ, ಕಬ್ಬು ಸೇರಿದಂತೆ ಎಲ್ಲಾ ಬೆಳೆಗಳಿಗೆ ವಿಮೆ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.



