ಜಿಲ್ಲಾಸುದ್ದಿ

371(ಜೆ) ಸಮರ್ಪಕ ಜಾರಿಗೆ ನವೆಂಬರ್‌ನಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಜಾಗೃತಿ ಜಾಥಾ

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಯೋಜನಾಬದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿ, ಸೆ.24: ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ 371(ಜೆ) ವಿಧಿಯನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ನವೆಂಬರ್‌ನಲ್ಲಿ ಕಲ್ಯಾಣ ಕರ್ನಾಟಕದಾದ್ಯಂತ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಮಿತಿಯ ಡಾ. ಮೀನಾಕ್ಷಿ ಬಾಳಿ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ ಕಲಂ 371(ಜೆ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಉಪಸಮಿತಿಯನ್ನು ಪುನರ್ ರಚಿಸಿರುವುದು ಸ್ವಾಗತಾರ್ಹ. ಈ ಸಮಿತಿಯಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರು ಇರುವುದರಿಂದ 371(ಜೆ) ಸಮರ್ಪಕ ಅನುಷ್ಠಾನಕ್ಕೆ ಪರಿಣಾಮಕಾರಿ ಹಾಗೂ ಯೋಜನಾಬದ್ಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ ವಿಭಾಗೀಯ ಅಭಿವೃದ್ಧಿ ಮಂಡಳಿಯು ಮಾನವ ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಸ್ಪಷ್ಟವಾದ ಕ್ರಿಯಾ ಯೋಜನೆ ರೂಪಿಸಿ, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಪ್ರದೇಶದಲ್ಲಿನ ಅಸಮಾನತೆ ನಿವಾರಣೆ ಹಾಗೂ ಜನರ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು 371(ಜೆ) ಸಚಿವ ಸಂಪುಟ ಉಪಸಮಿತಿಯು ವಿವಿಧ ಸಂಘಟನೆಗಳ ಸಭೆ ಕರೆಯಬೇಕು ಎಂದು ಆಗ್ರಹಿಸಿದರು.

ಸ್ಥಳೀಯ ಉದ್ಯೋಗಕ್ಕೆ ಆದ್ಯತೆ ನೀಡಿ

ಕಲ್ಯಾಣ ಕರ್ನಾಟಕ ಪ್ರದೇಶದ ನಗರ ಹಾಗೂ ನಗರ ಕೇಂದ್ರಿತ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಉದ್ಯೋಗದ ಕೊರತೆಯಿಂದ ಈ ಭಾಗದ ಕಾರ್ಮಿಕರು ಹಾಗೂ ಸಾರ್ವಜನಿಕರು ಬೆಂಗಳೂರಿಗೆ ವಲಸೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮೀನಾಕ್ಷಿ ಬಾಳಿ ಹೇಳಿದರು.

ರೈಲು ಪ್ರಯಾಣದಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದ ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ರೈಲುಗಳಲ್ಲಿ ಅತಿಯಾದ ದಟ್ಟಣೆ ಇರುವುದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದು, ವಲಸೆ ಹೋದ ಕುಟುಂಬಗಳು ವಿವಿಧ ಕಾರಣಗಳಿಂದ ತಮ್ಮ ಮೂಲ ನೆಲೆಗೆ ಮರಳುವ ಅನಿವಾರ್ಯತೆಯನ್ನೂ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕಡಿಮೆ ದರದಲ್ಲಿ ಕನಿಷ್ಠ ಎರಡು ಹೆಚ್ಚುವರಿ ರೈಲುಗಳನ್ನು ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕೆಕೆಆರ್‌ಡಿಬಿ ಅನುದಾನ ಸಮರ್ಪಕ ಬಳಕೆಗೆ ಆಗ್ರಹ

ಕಲ್ಯಾಣ ಕರ್ನಾಟಕ ಪ್ರದೇಶದ ಸರ್ಕಾರಿ ವಲಯದ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನವನ್ನು ಸಮರ್ಪಕವಾಗಿ ಬಳಸಬೇಕು ಎಂದು ಅವರು ಆಗ್ರಹಿಸಿದರು.

ಈ ಕುರಿತು ಮುಂದಿನ ಒಂದು ವಾರದೊಳಗೆ ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲ ಶಾಸಕರು ಹಾಗೂ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಗುವುದು. 371(ಜೆ) ಸಮರ್ಪಕ ಅನುಷ್ಠಾನ, ಸ್ಥಳೀಯ ಉದ್ಯೋಗ, ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅರ್ಜುನ್ ಭದ್ರೆ, ನಾಗೇಂದ್ರ ತಂಬೆ, ಸುಧಾಮ ಧನ್ನಿ, ಮಹೇಶ್ ಎಸ್.ಬಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button